ಕೇರಳ, ಮಹಾರಾಷ್ಟ್ರದಿಂದ ಬರುವವರ ಮೇಲೆ ನಿಗಾ ಇಡುವಂತೆ ಸಿಎಂ ಬೊಮ್ಮಾಯಿ ಸೂಚನೆ!
ಬೆಂಗಳೂರು, ಆ. 21: ಕೊರೊನಾ ವೈರಸ್ ಮೂರನೇ ಅಲೆಯ ಅಪಾಯದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳ ಭಾಗಗಳಿಂದ ಬರುವವರ ಮೇಲೆ ತೀವ್ರ ನಿಗಾ ಇಡಲು ಚೆಕ್‌ಪೋಸ್ಟ್‌ಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸುವಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೋಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಆಲಮಟ್ಟಿ ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ವಿಜಯಪುರ ಬಾಗಲಕೋಟೆ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ್ದಾರೆ. ಕೋವಿಡ್ 19 ಮೂರನೇ ಅಲೆಯ ಬಗ್ಗೆ ತಜ್ಞರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕು. ಚೆಕ್ ಪೋಸ್ಟ್‌ಗಳಲ್ಲಿ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಂದ ಆಗಮಿಸುವ ನಾಗರಿಕರ ಬಗ್ಗೆ ತೀವ್ರ ನಿಗಾ ಇಟ್ಟು ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ನಿರಂತರ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ನಿಗಾ ಇಡುವಂತೆ ಸೂಚನೆ ನೀಡಿದ್ದಾರೆ.
ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ಕೊರೊನಾ ವೈರಸ್ ಲಸಿಕೆಗಳ ಸರಬರಾಜು ಹೆಚ್ಚಿಸಲು ಪ್ರಯತ್ನಿಸಲಾಗುವುದು. ವಿಶೇಷವಾಗಿ ಈ ಎರಡೂ ಜಿಲ್ಲೆಗಳಿಗೆ ಮುಂದಿನ ದಿನಗಳಲ್ಲಿ ಪ್ರತಿ ದಿನಕ್ಕೆ ತಲಾ 25000 ಸಾವಿರ ಲಸಿಕೆಗಳ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದೆಂದು ಸಿಎಂ ಬೊಮ್ಮಾಯಿ ಹೇಳಿದರು.

ಮಕ್ಕಳಿಗಾಗಿ ಜಿಲ್ಲಾ ಆಸ್ಪತ್ರೆಗಳಲ್ಲಿ ಹೆಚ್ಚಿನ ಐಸಿಯು ಬೆಡ್!
ಕೋವಿಡ್ 19 ಮೂರನೇ ಅಲೆಯ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ವಿಶೇಷ ಗಮನ ನೀಡಬೇಕು. ಮಕ್ಕಳಿಗಾಗಿ ಜಿಲ್ಲಾ ಆಸ್ಪತ್ರೆಗಳಲ್ಲಿ ಹೆಚ್ಚಿನ ಐಸಿಯು ಬೆಡ್‌ಗಳನ್ನು ಮೀಸಲಿಡಬೇಕು. ಮಕ್ಕಳ ಬೆಳವಣಿಗೆ ಸೇರಿದಂತೆ ಅಪೌಷ್ಟಿಕತೆ ನಿವಾರಣೆಗೆ ಗಮನ ಇಟ್ಟು ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಗರಗಳ ವಾರ್ಡ್ ವ್ಯಾಪ್ತಿಯಲ್ಲಿ ಮಕ್ಕಳ ಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸಬೇಕು ಎಂದು ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಉದ್ಯಮಿದಾರರು ಸಿಬ್ಬಂದಿಗಳಿಗೆ ಲಸಿಕೆ ಹಾಕಿಸಬೇಕು!
ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಸಹಯೋಗದೊಂದಿಗೆ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಹಾಗೂ ಅಪೌಷ್ಟಿಕತೆ ಕೊರತೆ ನೀಗಿಸಲು ಗಮನ ನೀಡಲು ಸಿಎಂ ಬೊಮ್ಮಾಯಿ ಸೂಚಿಸಿದರು.
ಮಧ್ಯಮ ಹಾಗೂ ಬೃಹತ್ ಉದ್ಯಮಿದಾರರು ತಮ್ಮ ಸಿಬ್ಬಂದಿಗಳಿಗೆ ಅವರೇ ಪ್ರಥಮ ಹಾಗೂ 2ನೇ ಲಸಿಕೆ ದೊರಕಿಸಬೇಕು. ವಿಜಯಪುರದ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಉನ್ನತೀಕರಣಕ್ಕಾಗಿ 22 ಕೋಟಿ ರೂ. ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಹೇಳಿದರು.

ಮೂರನೇ ಅಲೆಯಲ್ಲಿಯೂ ಸೂಕ್ತ ನಿಗಾ ವಹಿಸಿ!
ಬ್ಲಾಕ್ ಫಂಗಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ರೋಗಿಗಳ ಚಿಕಿತ್ಸೆ ವೆಚ್ಚ ಹೆಚ್ಚಿನ ರೀತಿಯಲ್ಲಿ ಆಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಪಡೆಯುವ ರೋಗಿಗಳ ಚಿಕಿತ್ಸೆ ಔಷಧಿ ವೆಚ್ಚ ಸರ್ಕಾರದಿಂದ ಭರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಕೋವಿಡ್ 19 ಮೊದಲ ಹಾಗೂ 2ನೇ ಅಲೆಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸವಾಲನ್ನು ಎದುರಿಸಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ್ದಾರೆ. 3ನೇ ಅಲೆ ಹಿನ್ನೆಲೆಯಲ್ಲಿಯೂ ಹೀಗೆ ಸಕಲ ಸಿದ್ಧತೆಗಳೊಂದಿಗೆ ಸಜ್ಜುಗೊಳ್ಳುವಂತೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಸರ್ವಪಕ್ಷ ಶಾಸಕರು ಸಭೆಯಲ್ಲಿ ಭಾಗಿ!
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ರಮೇಶ ಜಿಗಜಿಣಗಿ, ಎ.ಎಸ್. ಶಿವಾನಂದ ಪಾಟೀಲ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪಾಟೀಲ ನಡಹಳ್ಳಿ, ಸಚಿವರಾದ ಮುರುಗೇಶ ನಿರಾಣಿ, ಉಮೇಶ ಕತ್ತಿ, ಸಿ.ಸಿ. ಪಾಟೀಲ, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ, ಸಿದ್ದು ಸವದಿ, ವಿಧಾನಪರಿಷತ್ ಸದಸ್ಯ ಅರುಣ ಶಹಾಪೂರ, ಶಾಸಕ ದೊಡ್ಡನಗೌಡ ಪಾಟೀಲ್, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ ,ಕೆಎಸ್ ಆರ್ ಟಿಸಿ ಎಂಡಿ ಶಿವಯೋಗಿ ಕಳಸದ, ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ ಸೇರಿದಂತೆ ವಿಜಯಪುರ ಬಾಗಲಕೋಟೆ ಜಿಲ್ಲೆಗಳ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications