ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕುಮಾರಸ್ವಾಮಿ
ಬೆಂಗಳೂರು, ಮಾರ್ಚ್ 10 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಕಾರ್ಯಕ್ರಮ 2019ಕ್ಕೆ ಚಾಲನೆ ನೀಡಿದರು.
ರಾಷ್ಟ್ರೀಯ ಪೋಲಿಯೋ ಲಸಿಕಾ ದಿನಾಚರಣೆ ಅಂಗವಾಗಿ ಮಾ.10ರಂದು ದೇಶಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕದಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಮಾರಂಭದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್, ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಮಾ.10ರ ಭಾನುವಾರ ತಪ್ಪದೇ ಪೋಲಿಯೋ ಹನಿ ಹಾಕಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ಬಸ್, ರೈಲ್ವೆ ನಿಲ್ದಾಣಗಳಲ್ಲಿಯೂ ಪೋಲಿಯೋ ಹನಿ ಹಾಕಲು ಇಲಾಖೆ ವ್ಯವಸ್ಥೆ ಮಾಡಿದೆ.

ಬೆಳಗ್ಗೆ 8 ರಿಂದ ಸಂಜೆ 5
ಐದು ವರ್ಷದೊಳಗಿನ ಮಕ್ಕಳಿಗೆ ಮಾ.10ರ ಭಾನುವಾರ ಪೋಲಿಯೋ ಲಸಿಕೆ ಹಾಕಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ಭಾನುವಾರ ಬೆಳಗ್ಗೆ 8 ಗಂಟೆಗೆ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದ್ದು, ಸಂಜೆ 5 ಗಂಟೆಯ ತನಕ ಕಾರ್ಯಕ್ರಮ ನಡೆಯಲಿದೆ.

32 ಸಾವಿರ ಬೂತ್‌ಗಳು
ಈ ಸಾಲಿನಲ್ಲಿ ಐದು ವರ್ಷದೊಳಗಿನ 64,85,980 ಮಕ್ಕಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. ಇದಕ್ಕಾಗಿ 32,571 ಬೂತ್‌ಗಳನ್ನು ತೆರೆಯಲಾಗಿದೆ. 51,918 ತಂಡಗಳನ್ನು ರಚನೆ ಮಾಡಲಾಗಿದೆ. 2481 ಸಂಚಾರಿ ತಂಡಗಳನ್ನು ಸಹ ರಚನೆ ಮಾಡಲಾಗಿದೆ.

4,250 ಬೂತ್ ಸ್ಥಾಪನೆ
ಬೆಂಗಳೂರು ನಗರದಲ್ಲಿ 11.80 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದೆ. ಇದಕ್ಕಾಗಿ 4250 ಬೂತ್ ತೆರಯಲಾಗಿದ್ದು, 8500 ತಂಡಗಳು ಕಾರ್ಯ ನಿರ್ವಹಣೆ ಮಾಡಲಿವೆ. 17 ಸಾವಿರ ಲಸಿಕಾ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.

ಮೊಬೈಲ್ ಅಪ್ಲಿಕೇಶನ್ ಸಹಾಯ
ಈ ಬಾರಿಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜನರಿಗೆ ಲಸಿಕಾ ಕೇಂದ್ರ ಹುಡುಕಲು ಸಹಾಯಕವಾಗುವಂತೆ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿ ಪಡಿಸಲಾಗಿದೆ. ಆರೋಗ್ಯ ಇಲಾಖೆ ಆಪ್ಲಿಕೇಶನ್ ಅಭಿವೃದ್ಧಿ ಪಡಿಸಿದ್ದು, ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಅಪ್ಲಿಕೇಶನ್ ಲಭ್ಯವಿದೆ.












Click it and Unblock the Notifications