ಜೆಡಿಎಸ್ ವಿರುದ್ಧ ಕರ್ನಾಟಕ ಹೈಕೋರ್ಟ್ ಮೊರೆ ಹೋದ ಸಿ. ಎಂ. ಇಬ್ರಾಹಿಂ
ಬೆಂಗಳೂರು, ಮೇ 09: ಪ್ರಜ್ವಲ್ ರೇವಣ್ಣ ಪ್ರಕರಣ, ಎಚ್. ಡಿ. ರೇವಣ್ಣ ಬಂಧನದಿಂದ ತಲೆನೋವು ಎದುರಿಸುತ್ತಿರುವ ಜೆಡಿಎಸ್ ಪಕ್ಷ ಮತ್ತೊಂದು ಕಾನೂನು ಸಮರ ಎದುರಿಸಬೇಕಿದೆ. ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಸಿ. ಎಂ. ಇಬ್ರಾಹಿಂ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಜೆಡಿಎಸ್ ಪಕ್ಷದ ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟನೆ ಮತ್ತು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಚ್. ಡಿ. ಕುಮಾರಸ್ವಾಮಿ ನೇಮಿಸಿರುವುದನ್ನು ಪ್ರಶ್ನಿಸಿ ಜೆಡಿಎಸ್ ಉಚ್ಚಾಟಿತ ಅಧ್ಯಕ್ಷ ಸಿ. ಎಂ. ಇಬ್ರಾಹಿಂ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ, ತಮ್ಮ ಅರ್ಜಿ ವಜಾಗೊಳಿಸಿದ್ದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಅವರು ಪ್ರಶ್ನಿಸಿದ್ದಾರೆ.

ಅಧೀನ ನ್ಯಾಯಾಲಯದ ಆದೇಶ ರದ್ದುಪಡಿಸುವಂತೆ ಕೋರಿ ಸಿ. ಎಂ. ಇಬ್ರಾಹಿಂ ಅವರು ಹೈಕೋರ್ಟ್‌ಗೆ ಆರ್‌ಎಫ್‌ಎ (ರೆಗ್ಯೂಲರ್ ಸೆಕೆಂಡ್ ಅಪೀಲ್) ಸಲ್ಲಿಸಿ ಜೆಡಿಎಸ್ ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವುದಕ್ಕೆ ಮಧ್ಯಂತರ ತಡೆ ನೀಡಬೇಕು ಎಂದು ಕೋರಿದ್ದಾರೆ.
ನ್ಯಾಯಮೂರ್ತಿ ಸಿ. ಎಂ. ಪೂಣಚ್ಚ ಅವರ ರಜಾಕಾಲೀನ ಏಕಸದಸ್ಯ ಪೀಠ, ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿತು. ಅರ್ಜಿ ವಿಚಾರಣೆಗೆ ಬಂದಾಗ ಇಬ್ರಾಹಿಂ ಪರ ವಕೀಲರು, ಜೆಡಿಎಸ್ ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವುದಕ್ಕೆ ತಡೆ ನೀಡಿ ಮಧ್ಯಂತರ ಆದೇಶ ಮಾಡಬೇಕು ಎಂದು ಕೋರಿದರು.
ವಿಚಾರಣೆಗೆ ವೇಳೆ ಹಾಜರಿದ್ದ ಜೆಡಿಎಸ್ ಪಕ್ಷದ ಪರ ವಕೀಲರು, ಪಕ್ಷದಿಂದ ಅಗತ್ಯ ಸಲಹೆ/ ಸೂಚನೆಗಳನ್ನು ಪಡೆದು ನ್ಯಾಯಾಲಯಕ್ಕೆ ತಿಳಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಪ್ರಕರಣವೇನು?: 2023ರ ವಿಧಾನಸಭೆ ಚುನಾವಣೆಗೂ ಮುನ್ನ ಸಿ. ಎಂ. ಇಬ್ರಾಹಿಂ ಅವರನ್ನು 2022ರ ಆ.3ರಂದು ಜೆಡಿಎಸ್ ಅಧ್ಯಕ್ಷರಾಗಿ ರಾಜ್ಯ ಕಾರ್ಯಕಾರಿಣಿಯಲ್ಲಿ ಘೋಷಿಸಲಾಗಿತ್ತು. ಎಚ್. ಡಿ. ದೇವೇಗೌಡ ಮತ್ತು ಎಚ್. ಡಿ. ಕುಮಾರಸ್ವಾಮಿ ಅವರು 2024 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು.
ನಂತರ ಸಕಾರಣವಿಲ್ಲದೇ ತಮ್ಮನ್ನು 2023ರ ನ.16ರಂದು ಪಕ್ಷ ಹಾಗೂ ಅಧ್ಯಕ್ಷ ಹುದ್ದೆಯಿಂದ ಉಚ್ಚಾಟನೆ ಮಾಡಲಾಗಿದೆ. ಇದು ಜೆಡಿಎಸ್ ಸಂವಿಧಾನಕ್ಕೆ ವಿರುದ್ಧವಾಗಿದೆ. ಉಚ್ಚಾಟನೆಗೂ ಮುನ್ನ ತಮ್ಮ ಅಹವಾಲು ಆಲಿಸಿಲ್ಲ. ಆದ್ದರಿಂದ ಉಚ್ಚಾಟನೆ ಆದೇಶ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.
ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸದಂತೆ ನಿರ್ಬಂಧಿಸಬೇಕು ಎಂದು ಕೋರಿ ಸಿ. ಎಂ. ಇಬ್ರಾಹಿಂ ಸಿಟಿ ಸಿವಿಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ವಜಾಗೊಳಿಸಿ 2024ರ ಮಾ.23ರಂದು ನಗರದ 26ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಇಬ್ರಾಹಿಂ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.












Click it and Unblock the Notifications