State Cabinet: ಸಚಿವ ಸಂಪುಟಕ್ಕೆ ಸರ್ಜರಿ ಆಗಲಿದೆಯಾ? ದೆಹಲಿ ಪ್ರವಾಸದ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?

ಮೈಸೂರು, ಜುಲೈ 29: ಸಚಿವ ಸಂಪುಟದಲ್ಲಿ ಈ ಹಿಂದೆ ಅವಕಾಶ ಕಳೆದುಕೊಂಡ ಕಾಂಗ್ರೆಸ್‌ ನ ಹಿರಿಯ ನಾಯಕರು ಸಿದ್ದರಾಮಯ್ಯ ಅವರ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಸಚಿವ ಸಂಪುಟ ಪುನರ್‌ ರಚನೆ ಕುರಿತು ಕಾಂಗ್ರೆಸ್‌ ಪಾಳಯದಲ್ಲಿ ಚರ್ಚೆ ನಡೆಯುತ್ತಿದೆ. ಆರೇಳು ಸಚಿವರ ಖಾತೆ ಬದಲಾವಣೆಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಪಕ್ಷದ ಹೈಕಮಾಂಡ್ ಭೇಟಿಗೆ ದೆಹಲಿಗೆ ಹೊರಟಿದ್ದಾರೆ ಎಂದು ಹೇಳಲಾಗಿದೆ.

ದೆಹಲಿ ಪ್ರವಾಸದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಸರ್ಕಾರ ಹಾಗೂ ಪಕ್ಷದ ಬಗ್ಗೆ ಚರ್ಚೆ ಮಾಡಲು ವರಿಷ್ಠರು ಕರೆದಿದ್ದಾರೆ .ಹಾಗಾಗಿ ನಾನೂ ಮತ್ತು ಉಪಮುಖ್ಯಮಂತ್ರಿಗಳು ದೆಹಲಿಗೆ ಭೇಟಿ ನೀಡುತ್ತಿದ್ದೇವೆ ಎಂದು ಹೇಳಿದರು.

CM Siddaramaiah and DCM DK Shivakumar to meet congress high command

ಮೆಟ್ಟೂರು ಅಣೆಕಟ್ಟು ತುಂಬಿ ನೀರು ವ್ಯರ್ಥವಾಗುತ್ತಿದ್ದು, ಈ ಬಗ್ಗೆ ತಮಿಳುನಾಡು ಸರ್ಕಾರದೊಂದಿಗೆ ನಾವು ಮಾತನಾಡಲು ತಯಾರಿದ್ದೇವೆ. ಮೇಕೆದಾಟು ಯೋಜನೆಯಿಂದ ಅವರಿಗೆ ತೊಂದರೆಯಾಗದಿದ್ದರೂ ಮಾತನಾಡಲು ಅವರು ಸಿದ್ದರಿಲ್ಲ.ಕೇಂದ್ರ ಸರ್ಕಾರ ಅನುಮೋದನೆ ಕೊಟ್ಟರೇ ನಾವು ನಿರ್ಮಾಣ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿಗಳನ್ನೂ ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾಪವಿಲ್ಲ. 15 ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಪೇರಿಫೇರಲ್ ರಿಂಗ್ ರೋಡ್ ಗೆ 3000ಕೋಟಿ ಕೊಡುವುದಾಗಿ ಹೇಳಿದ್ದರು.ಅದೂ ಇಲ್ಲ. 3000 ಕೋಟಿ ಕೆರೆಗಳ ಅಭಿವೃದ್ಧಿಗೆ ಕೊಡುವುದಾಗಿ ಹೇಳಿದ್ದರು. ಅದೂ ಕೂಡ ಬಜೆಟ್ ನಲ್ಲಿ ಇಲ್ಲ. ಇದು ಅನ್ಯಾಯವಲ್ಲವೇ..?ಆಂಧ್ರ, ಬಿಹಾರ ರಾಜ್ಯಗಳಿಗೆ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.

ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಅನುದಾನವನ್ನು ನಾವು ಕೂಡಿಸುತ್ತೇವೆ ಎಂದು ಪ್ರಸ್ತಾಪ ಮಾಡಬಹುದಿತ್ತು. ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸದು ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಕೊಟ್ಟಿಲ್ಲ. ರಾಯಚೂರಿಗೆ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಯಾವುದೇ ಪ್ರಸ್ತಾಪವಾಗಿಲ್ಲ. ಮೈಸೂರು ಅಥವಾ ಹಾಸನಕ್ಕೆ ಐ ಐ ಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು ಅದೂ ಕೂಡ ಆಗಿಲ್ಲ ಹಾಗಾದರೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ ಎಂದರು.

15 ನೇ ಹಣಕಾಸು ಯೋಜನೆಯಲ್ಲಿ ಅತಿ ಹೆಚ್ಚು ಅನ್ಯಾಯವಾಗಿರುವ ರಾಜ್ಯ ಕರ್ನಾಟಕ. ರಾಜ್ಯದಿಂದ ರಾಜ್ಯ ಸಭಾ ಸದಸ್ಯರಾಗಿರುವ ಅವರು ಕೈಗಾರಿಕೆಗಳೆಲ್ಲಾ ಬೇರೆ ರಾಜ್ಯಕ್ಕೆ ಹೋಗುತ್ತಿವೆ ಎಂದೂ ಹೇಳಿದ್ದಾರೆ. ಆದರೆ ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರ ನೀತಿ , ಕಾರ್ಯಕ್ರಮಗಳಿಂದ ಶೇ 31% ನಮ್ಮ ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಕಡಿಮೆಯಾಗಿದೆ. ಕೇಂದ್ರಕ್ಕೆ ತೆರಿಗೆ ನೀಡುವಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ 2 ನೇ ಸ್ಥಾನದಲ್ಲಿದೆ ಇನ್ನೇನು ಕೊಡುಗೆ ಕೊಡಬೇಕು? ಎಂದು ಪ್ರಶ್ನಿಸಿದರು.

ಕೇಂದ್ರದ ಧೋರಣೆಗೆ ನೀತಿ ಆಯೋಗದ ಸಭೆಯನ್ನು ನಾವು ಬಹಿಷ್ಕರಿಸಿದೆವು. ತಮಿಳುನಾಡು, ತೆಲಂಗಾಣ ಹಾಗೂ ಬಿಜೆಪಿ ವಿರುದ್ಧವಾಗಿರುವ ಅನೇಕ ರಾಜ್ಯಗಳು ಹೋಗಿಲ್ಲ. ಮಮತಾ ಬ್ಯಾನರ್ಜಿ ಅವರು ಸಭೆಗೆ ಹಾಜರಾಗಿ ಮಾತನಾಡಲು ಸಮಯ ನೀಡಿಲ್ಲ ಎಂದು ಸಭೆಯಿಂದ ಹೊರನಡೆದರು ಎಂದರು. ಇವರು ನಮಗೆ ಪಾಠ ಹೇಳಿಕೊಡುತ್ತಾರೆ. ಇವರ ತಪ್ಪುಗಳಿಗೆ ಇಂದು ದೇಶದಲ್ಲಿ ಹೂಡಿಕೆಯಾಗುತ್ತಿಲ್ಲ. ನಾವು ಸಾಲ ಹೆಚ್ಚು ಮಾಡಿದ್ದೇವೆ ಎನ್ನುತ್ತಾರೆ. ನಾವು ವಿತ್ತೀಯ ಹೊಣೆಗಾರಿಕೆ ಕಾಯ್ದೆಯಡಿ ಜಿಡಿಪಿಯ ಶೇ 25% ರೊಳಗೇ ಇದ್ದೇವೆ. ಅವರು ಸುಮಾರು 15 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದರು.

ಕರ್ನಾಟಕದ ಸಂಸದರು ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಬೇಕು. ಕರ್ನಾಟಕ ಭ್ರಷ್ಟ ರಾಜ್ಯ ಎಂದು ಅವರು ಮಸಿ ಬಳಿಯುತ್ತಿದ್ದಾರೆ. ಕರ್ನಾಟಕ ಭ್ರಷ್ಟ ರಾಜ್ಯವಲ್ಲ. ನಾವು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ಕಡಿಮೆಯಾಗುತ್ತಿದೆ ಎಂದರು.

ಕರ್ನಾಟಕದಲ್ಲಿ ಕೈಗಾರಿಕೆಗಳು ಹೂಡಿಕೆ ಮಾಡಲು ಮುಂದಾಗುತ್ತಿಲ್ಲ ಎಂಬ ಕೇಂದ್ರ ಹಣಕಾಸು ಸಚಿವರ ಹೇಳಿಕೆಗೆ ಸಂಬಂಧಪಟ್ಟಂತೆ ಎಂ. ಬಿ.ಪಾಟೀಲ್ ಹಾಗೂ ಪ್ರಿಯಾಂಕ ಖರ್ಗೆಯವರಿಗೆ ಈ ಬಗ್ಗೆ ಮಾತನಾಡಲು ಸೂಚಿಸುವುದಾಗಿ ಹೇಳಿದರು. ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ವಾಲ್ಮೀಕಿ ಮತ್ತು ಮೂಡಾ ಹಗರಣದ ಬಗ್ಗೆ ಪ್ರತಿಭಟಿಸಿ ಪಾದಯಾತ್ರೆ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಮಾಡಲಿ. ನಾವೂ ಕೂಡ ರಾಜಕೀಯವಾಗಿ ವಿರೋಧಿಸುತ್ತೇವೆ. ವಾಲ್ಮೀಕಿ ಹಗರಣದಲ್ಲಿ ನಾವು 84.63 ಕೋಟಿ ಹಗರಣವಾಗಿದೆ ಎನ್ನುವುದು ನಿಜ. ಎಸ್.ಐ.ಟಿ ರಚನೆಯಾಗಿದ್ದು ತನಿಖೆಯಾಗುತ್ತಿದೆ. ಅವರೂ ಕೂಡ ಸಿಬಿಐ, ಇಡಿ ಯಾವರೂ ತನಿಖೆ ಮಾಡುತ್ತಿದ್ದಾರೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+