Wayanad landslide: ಕೇರಳ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ 5 ಲಕ್ಷ ಪರಿಹಾರ
ಬೆಂಗಳೂರು, ಜುಲೈ 31: ಪ್ರಕೃತಿ ಮುನಿದರೆ ಏನು ಬೇಕಾದರೂ ಆಗಬಹುದು ಎನ್ನುವುದಕ್ಕೆ ಇಂದು ಸಾಲು ಸಾಲು ಉದಾಹರಣೆಗಳು ನಮ್ಮ ಕಣ್ಣಮುಂದಿದೆ. ಭಾರೀ ಮಳೆಯಿಂದ ಕರ್ನಾಟಕ ಸೇರಿಂದತೆ ಕೇರಳ ಕೂಡ ತತ್ತರಿಸಿದ್ದು, ಕೇರಳದ ವಯನಾಡಿನಲ್ಲಿ ಮಧ್ಯರಾತ್ರಿ ಸಂಭವಿಸಿದ ಭೂಕುಸಿತದ ದುರಂತದಲ್ಲಿ ಮೃತರ ಸಂಖ್ಯೆ 172ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಕೂಡ ಇದೆ.
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ದುರಂತದಲ್ಲಿ 200ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಒಂದೇ ಕುಟುಂಬದ 25 ಮಂದಿ ಕಣ್ಮರೆಯಾಗಿದ್ದಾರೆ. ಈ ದುರಂತದಲ್ಲಿ ಕನ್ನಡಿಗರು ಕೂಡ ಸಾವನ್ನಪ್ಪಿದ್ದು, ಇನ್ನು ಕೆಲವರು ಅಪಾಯದಲ್ಲಿ ಸಿಲುಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಸರ್ಕಾರ ಕಳುಹಿಸಿಕೊಟ್ಟಿದೆ.

ಈ ಘಟನೆ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಮೃತಪಟ್ಟ ಕನ್ನಡಿಗರಿಗೆ ಪರಿಹಾರ ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ.
ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ.
ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ತಿಳಿಸಿದ್ದಾರೆ.
ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟದಲ್ಲಿರುವ ಕನ್ನಡಿಗರ ನೆರವಿಗೆ ಧಾವಿಸಲು ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಗಡಿ ಜಿಲ್ಲೆ ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ, ಹೆಚ್.ಡಿ ಕೋಟೆಯಲ್ಲಿ ಗಾಯಾಳುಗಳನ್ನು ಕರೆತಂದು ಅಗತ್ಯ ಚಿಕಿತ್ಸೆ ಕೊಡಿಸಲು ಬಸ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈಗಾಗಲೇ ಅಗತ್ಯ ಸಲಕರಣೆಗಳನ್ನು ಹೊತ್ತ ಬೆಂಗಳೂರಿನಲ್ಲಿರುವ ಎನ್.ಡಿ.ಆರ್.ಎಫ್ ಹಾಗೂ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಸೇನಾಪಡೆಯ ತಂಡಗಳು ವಯನಾಡು ತಲುಪಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿವೆ. ವಯನಾಡು ದುರಂತವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ಕರ್ನಾಟಕದ ಯಾವುದೇ ಮೂಲೆಯಲ್ಲಿ ಪ್ರವಾಹ, ಭೂಕುಸಿತ ಅಥವಾ ಇತರೇ ಯಾವುದೇ ನೈಸರ್ಗಿಕ ವಿಕೋಪಗಳು ಸಂಭವಿಸಿದರೆ ಅದನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿರಲು ಜಿಲ್ಲಾಡಳಿತಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.












Click it and Unblock the Notifications