Government Employee: OPS ಬಗ್ಗೆ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ಭರವಸೆ
ಬೆಂಗಳೂರು, ಆಗಸ್ಟ್ 17: "ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ. ಸರ್ಕಾರ ಅಂದರೆ ಎಲ್ಲಾ ಸರ್ಕಾರಿ ನೌಕರರೂ ಸೇರಿರುತ್ತಾರೆ. ನೀವೆಲ್ಲಾ ಒಟ್ಟು ಸೇರಿದರೆನೇ ಸರ್ಕಾರ. ಇದು ನಿಮ್ಮೆಲ್ಲರ ಸರ್ಕಾರ, ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸಚಿವ ಸಂಪುಟ ಸದಾ ಸಿದ್ಧವಿದೆ" ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸು ಜಾರಿಗೊಳಿಸಿದೆ. ಈ ಹಿನ್ನಲೆಯಲ್ಲಿ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಶನಿವಾರ 'ನಮ್ಮಭಿಮಾನದ ಅಭಿನಂದನಾ ಸಮಾರಂಭ' ಆಯೋಜನೆ ಮಾಡಿತ್ತು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಯನ್ನು ಕರ್ನಾಟಕದ ರಾಜ್ಯಪಾಲರು ನೀಡಿದ್ದಾರೆ. ಈ ಟೆಕ್ಷನ್ ನಡುವೆಯೂ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದರು.
ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಮುಖ್ಯಮಂತ್ರಿಗಳಿಗೆ ನಮ್ಮಭಿಮಾನದ ಅಭಿನಂದನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡು, ಸನ್ಮಾನ ಸ್ವೀಕರಿಸಿ ಮಾತನಾಡಿದರು. "ಅಂಬೇಡ್ಕರ್, ಗಾಂಧಿ, ಬಸವಾದಿ ಶರಣರು ಸಮಸಮಾಜದ ಕನಸು ಕಂಡಿದ್ದರು. ಇವರೆಲ್ಲರ ಕನಸನ್ನು ನನಸು ಮಾಡುವ ಜವಾಬ್ದಾರಿ ನಿಮ್ಮೆಲ್ಲರ ಮೇಲೂ ಇದೆ. ಇದಕ್ಕಾಗಿ ಶ್ರಮಿಸೋಣ" ಎಂದು ಕರೆ ನೀಡಿದರು.
"ಸಮ ಸಮಾಜದ ಆಶಯದಿಂದ ಸರ್ಕಾರ ಜಾರಿ ಮಾಡುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ನಿಮ್ಮಗಳ ಮೇಲಿದೆ. ಶೋಷಿತ ಸಮುದಾಯಗಳ ಮನೆ ಬಾಗಿಲಿಗೆ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸಿದಾಗ ಮಾತ್ರ ನಮ್ಮ ನಿಮ್ಮ ಶ್ರಮ ಸಾರ್ಥಕವಾಗುತ್ತದೆ. ಹೀಗೆ ನಾವು ನೀವು ಸೇರಿ ಸ್ವಸ್ಥ ಸಮಾಜ ರೂಪಿಸಬೇಕಿದೆ" ಎಂದರು.
"ನಿಮ್ಮೆಲ್ಲರ ಬೇಡಿಕೆಯಂತೆ ಹಳೆ ಪಿಂಚಣಿ ಪದ್ಧತಿ ಮತ್ತು ಆರೋಗ್ಯ ಸಂಜೀವಿನಿ ಕಾರ್ಯಕ್ರಮದ ಬಗ್ಗೆಯೂ ಸರ್ಕಾರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತದೆ. ಇದು ನಿಮ್ಮೆಲ್ಲರ ಸರ್ಕಾರ. ನಾನು ನಿಮ್ಮ ಜೊತೆ ಇರುತ್ತೇನೆ. ನಾವು-ನೀವು ಒಟ್ಟಾಗಿ ಜನರ ಜೊತೆ ಇದ್ದು, ಜನರ ಋಣ ತೀರಿಸೋಣ" ಎಂದು ಸಿದ್ದರಾಮಯ್ಯ ಹೇಳಿದರು.
7ನೇ ರಾಜ್ಯ ವೇತನ ಆಯೋಗದ ವರದಿ ಜಾರಿ ಬಳಿಕ ರಾಷ್ಟ್ರೀಯ ಪಿಂಚಣಿ ಯೋಜನೆ (ಹೊಸ ಪಿಂಚಣಿ) ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು ಎಂಬುದು ಕರ್ನಾಟಕದ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾಗಿದೆ. ಹಲವು ರಾಜ್ಯಗಳಲ್ಲಿ ಈಗಾಗಲೇ ಎನ್‌ಪಿಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಲಾಗಿದೆ. ಇದೇ ಮಾದರಿಯಲ್ಲಿ ಕರ್ನಾಟಕ ಸರ್ಕಾರವೂ ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗುತ್ತಿದೆ.
ಸರ್ಕಾರ ಈಗಾಗಲೇ ಎನ್‌ಪಿಎಸ್ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಭಾಗವಾಗಿ ಸರ್ಕಾರದ ಉನ್ನತ ಅಧಿಕಾರಿಗಳ ತಂಡ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿರುವ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸೂಚಿಸಿದೆ. ಶೀಘ್ರದಲ್ಲೇ ವರದಿ ಪಡೆದು ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ.
ಕೆ. ಸುಧಾಕರ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ ಸಹ ತನ್ನ ವರದಿಯಲ್ಲಿ ಸರ್ಕಾರಿ ನೌಕರರಿಗೆ ಓಪಿಎಸ್ ಮರುಜಾರಿಗೊಳಿಸುವ ವಿಷಯವನ್ನು ಅಧ್ಯಯನ ಮಾಡುವುದಕ್ಕೆ ಕರ್ನಾಟಕ ಸರ್ಕಾರವು ಪ್ರತ್ಯೇಕ ಸಮಿತಿಯೊಂದನ್ನು ರಚಿಸಿದೆ. ಇದನ್ನು ಗಮನಿಸಿರುವ ಆಯೋಗ ಈ ವಿಷಯದ ಮೇಲೆ ಯಾವುದೇ ಶಿಫಾರಸ್ಸುಗಳನ್ನು ಮಾಡುವುದು ಸೂಕ್ತವಲ್ಲ ಎಂದು ಭಾವಿಸುತ್ತದೆ ಎಂದು ತಿಳಿಸಿದೆ.
ರಾಜ್ಯ ಸರ್ಕಾರ ಈ ವಿಷಯವನ್ನು ಪರಿಶೀಲಿಸುವ ಮತ್ತು ಸಾಧ್ಯವಾದಷ್ಟು ಬೇಗ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳುವ ಅಗತ್ಯವಿರುತ್ತದೆ ಎಂಬ ಅಭಿಪ್ರಾಯದೊಂದಿಗೆ ಎನ್‌ಪಿಎಸ್‌ಗೆ ಸಂಬಂಧಿಸಿದ ಎಲ್ಲಾ ಮನವಿಗಳನ್ನು ರಾಜ್ಯ ಹಣಕಾಸು ಇಲಾಖೆಗೆ ಕಳುಹಿಸಿದೆ ಎಂದು ರಾಜ್ಯ 7ನೇ ವೇತನ ಆಯೋಗದ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಕರ್ನಾಟಕ ಸರ್ಕಾರದ ಮಾಹಿತಿಯಂತೆ ರಾಜ್ಯದಲ್ಲಿ 5,09,384 ಸರ್ಕಾರಿ ನೌಕರರು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಹಳೆ ಪಿಂಚಣಿ ಯೋಜನೆಗೆ 2,41,260 ನೌಕರರು ಒಳಪಟ್ಟಿದ್ದಾರೆ. ರಾಷ್ಟ್ರೀಯ ಪಿಂಚಣಿ ಯೋಜನೆಗೆ 2,68,124 ನೌಕರರು ಒಳಪಟಿದ್ದಾರೆ. ಎಲ್ಲಾ ನೌಕರರನ್ನು ಹಳೆಯ ಪಿಂಚಣಿ ಯೋಜನೆಗೆ ಒಳಪಡಿಸಬೇಕು ಎಂಬುದು ಸರ್ಕಾರಿ ನೌಕರರ ಪ್ರಮುಖ ಬೇಡಿಕೆ.












Click it and Unblock the Notifications