ಸಿಜೆಐ ಗವಾಯಿ ಒಬ್ಬಂಟಿಯಲ್ಲ: ಶೂ ಎಸೆದ ಘಟನೆ ಖಂಡಿಸಿದ ಸಿದ್ದರಾಮಯ್ಯ
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಈ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ, ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿ ಎಂದು ಆಕ್ರೋಶ ಹೊರಹಾಕಿದ್ದಾರೆ.

ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಇಲ್ಲವೇ ಧರ್ಮಕ್ಕೆ ಸೇರಿದವರಲ್ಲ. ಈ ದೃಷ್ಟಿಯಿಂದ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್‌ನಲ್ಲಿ ಇಂದು ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕೆಂದು ಮನವಿ ಮಾಡಿದ್ದಾರೆ.
ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆದುಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟುಹಾಕಿರುವ ಕಾರಣಕ್ಕಾಗಿಯೇ ರಾಕೇಶ್ ಕಿಶೋರ್‌ನಂತಹ ಮನುವಾದಿ ಮನಸ್ಸುಗಳು ಸಮಾಜದಲ್ಲಿ ಹುಟ್ಟಿಕೊಂಡಿವೆ ಎನ್ನುವುದನ್ನು ನಾವು ಮರೆಯಬಾರದು. ನಾಥೂರಾಮ್ ಗೋಡ್ಸೆಯಂತಹ ಒಬ್ಬ ಕೊಲೆಗಡುಕನನ್ನು ದೇಶಪ್ರೇಮಿ ಎಂದು ಮೆರೆಸಲು ಹೊರಟಿರುವ ರೀತಿಯಲ್ಲಿಯೇ ಕೆಲವು ಪುಂಡರು ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ ಎಂದಿದ್ದಾರೆ.
ಪ್ರಜಾಪ್ರಭುತ್ವದ ತತ್ವಗಳ ಮೇಲಿನ ದಾಳಿ
ಡಿಸಿಎಂ ಡಿಕೆ ಶಿವಕುಮಾರ್ ಕೂಡ ಈ ಘಟನೆಯನ್ನು ಖಂಡಿಸಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಹಾನಿ ಮಾಡುವ ಪ್ರಯತ್ನ ತೀವ್ರ ಕಳವಳಕಾರಿ ಮತ್ತು ಸ್ವೀಕಾರಾರ್ಹವಲ್ಲ ಎಂದಿದ್ದಾರೆ. ಇಂತಹ ಕೃತ್ಯವು ಕೇವಲ ವ್ಯಕ್ತಿಯ ಮೇಲಿನ ದಾಳಿಯಲ್ಲ, ಬದಲಾಗಿ ಅತ್ಯುನ್ನತ ನ್ಯಾಯಾಂಗ ಕಚೇರಿ ಮತ್ತು ನಮ್ಮ ಪ್ರಜಾಪ್ರಭುತ್ವದ ತತ್ವಗಳ ಮೇಲಿನ ದಾಳಿ. ಯಾವುದೇ ದೂರು ಬೆದರಿಕೆ ಅಥವಾ ಹಿಂಸೆಯನ್ನು ಆಶ್ರಯಿಸುವುದನ್ನು ಸಮರ್ಥಿಸುವುದಿಲ್ಲ. ನಮ್ಮ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ನಾವು ಗೌರವವನ್ನು ಎತ್ತಿಹಿಡಿಯುವುದು, ನ್ಯಾಯಕ್ಕೆ ಭಯ ಅಥವಾ ಹಗೆತನದಿಂದ ಎಂದಿಗೂ ಬೆದರಿಕೆ ಬರದಂತೆ ನೋಡಿಕೊಳ್ಳುವುದು ಕಡ್ಡಾಯವಾಗಿದೆ. ನಾನು ಈ ಕೃತ್ಯವನ್ನು ಬಲವಾಗಿ ಖಂಡಿಸುತ್ತೇನೆ. ಕಾನೂನು ಮತ್ತು ನ್ಯಾಯದ ನಿಯಮವನ್ನು ಕಾಪಾಡುವಲ್ಲಿ ನ್ಯಾಯಾಂಗದ ಜೊತೆ ನಿಲ್ಲುತ್ತೇನೆ ಎಂದಿದ್ದಾರೆ.












Click it and Unblock the Notifications