ಜಾತಿಗಣತಿ ವರದಿ ಸದ್ಯಕ್ಕೆ ಮಂಡಿಸಲ್ಲ ಎಂದ ಸಿಎಂ, ದಿಢೀರ್ ಯೂಟರ್ನ್ ಹೊಡೆದಿದ್ದೇಕೆ?
ರಾಜ್ಯವೇ ಎದುರು ನೋಡುತ್ತಿದ್ದ ಜಾತಿ ಗಣತಿ ವರದಿ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಹುತೇಕ ಈ ಜಾತಿ ಗಣತಿ ವರದಿ ಮಂಡನೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಅಪ್‌ಡೇಟ್ ನೀಡಿದ್ದಾರೆ. ಸದ್ಯಕ್ಕೆ ಈ ವರದಿ ಮಂಡನೆಯಾಗುವುದಿಲ್ಲ ಎಂಬ ಸಂದೇಶವನ್ನೂ ಅವರು ರವಾನಿಸಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಅವರು ಜಾತಿಗಣತಿ ವರದಿಯಲ್ಲಿರುವ ಅಂಕಿ-ಅಂಶ ಇನ್ನೂ ಸಾರ್ವಜನಿಕವಾಗದೇ ಇದ್ದು, ಈಗ ಕೇಳಿಬರುತ್ತಿರುವ ವಿಚಾರಗಳು ಬರೀ ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನಾವಶ್ಯಕ ಎಂದು ಹೇಳಿದ್ದಾರೆ.

ಈ ಹಿನ್ನೆಲೆ ನಾಳೆ (ಗುರುವಾರ) ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದೂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಜಾತಿ ಗಣತಿ ವರದಿ ಜಾರಿಗೆ ವಿಪಕ್ಷಗಳು ಮಾತ್ರವಲ್ಲದೆ ಸ್ವಪಕ್ಷದಿಂದಲೂ ವಿರೋಧ ಕೇಳಿಬಂದಿದೆ. ಈ ಹಿನ್ನೆಲೆ ವರದಿ ಮಂಡನೆಯನ್ನು ಮತ್ತೆ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ. ಜಾತಿ ವರದಿ ಜಾರಿ ನಿರೀಕ್ಷೆಯಲ್ಲಿದ್ದವರಿಗೆ ಸಿದ್ದರಾಮಯ್ಯ ಮತ್ತೆ ಕಹಿಸುದ್ದಿ
ಜಾತಿಗಣತಿ ವರದಿ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಕೂಡ ವಾಗ್ದಾಳಿ ನಡೆಸಿದ್ದಾರೆ. ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲ ಜಾತಿ ಜನಗಣತಿ ನೆನಪಾಗುತ್ತದೆ ಎಂದು ಲೇವಡಿ ಮಾಡಿದ್ದಾರೆ.

ಜಾತಿ ಜನಗಣತಿ ಬಗ್ಗೆ ಬಿಜೆಪಿ ಪಕ್ಷಕ್ಕಾಗಲಿ, ವೈಯಕ್ತಿಕವಾಗಿ ನನಗಾಗಲಿ ಯಾವುದೇ ತಕರಾರಿಲ್ಲ, ವಿರೋಧವೂ ಇಲ್ಲ. ಬಿಜೆಪಿಯ ಮೂಲಸಿದ್ಧಾಂತವಾದ 'ಅಂತ್ಯೋದಯ'ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನ ಸಾಕಾರಗೊಳಿಸುವ ಯಾವ ಪ್ರಾಮಾಣಿಕ ಪ್ರಯತ್ನಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದಿದ್ದಾರೆ.
ಆದರೆ, ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೆದ್ದು ಬರಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ. ನಾಳಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಚರ್ಚೆಯಾಗುತ್ತಿದೆ ಎಂಬ ಸುದ್ದಿಗಳು ಹರಿದಾಡುತ್ತಿರುವ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆತ್ಮಸಾಕ್ಷಿಗೆ ಕೆಲವು ಪ್ರಶ್ನೆಗಳನ್ನ ಸಹ ಕೇಳಿದ್ದಾರೆ.
ತಮಗೆ ನಿಜವಾಗಿಯೂ ಜಾತಿಗಣತಿಯ ಬಗ್ಗೆ ಬದ್ಧತೆ ಇದ್ದಿದ್ದರೆ, 2018ರಲ್ಲೇ ಕಾಂತರಾಜು ವರದಿಯನ್ನ ಯಾಕೆ ಜಾರಿ ಮಾಡಲಿಲ್ಲ? ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ, ಅನೇಕ ಜನರ ಮನೆಗಳಿಗೆ ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನು ಈಗ ಮುನ್ನೆಲೆಗೆ ತರುವ ತರಾತುರಿ ಏಕೆ? ಎಂದು ಪ್ರಶ್ನಿಸಿದ್ದಾರೆ.
ಈ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ಇದನ್ನ ಬೆಂಬಲಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಸಹಿ ಮಾಡಿದ್ದಾರೆ. ತಮ್ಮದೇ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪನವರೂ ಸಹ ಇದಕ್ಕೆ ವಿರೋಧಿಸಿದ್ದಾರೆ. ಅನೇಕ ಮಠಾಧೀಶರು, ಧಾರ್ಮಿಕ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ.
ಹೀಗಿರುವಾಗ ಕಳೆದ 20 ತಿಂಗಳಿನಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸರ್ವಸಮ್ಮತವಾದ ನಿಲುವಿಗೆ ಬರುವ ಬದಲು ಈಗ ದಿಢೀರನೆ ಏಕಾಏಕಿ ವರದಿಯನ್ನ ಸಂಪುಟ ಸಭೆಯಲ್ಲಿ ಚರ್ಚೆಗೆ ಎತ್ತಿಕೊಳ್ಳುತ್ತಿರುವುದು ಯಾವ ಕಾರಣಕ್ಕೆ? ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದವನ್ನ ಹೇಗಾದರೂ ಮಾಡಿ ಮುಂದೂಡಲು, ಅಧಿಕಾರ ಹಂಚಿಕೆ ಒಪ್ಪಂದದಿಂದ ತಪ್ಪಿಸಿಕೊಳ್ಳಲು ಜಾತಿ ಜನಗಣತಿ ವರದಿಯನ್ನು ತಂತ್ರವಾಗಿ ಬಳಸಿಕೊಳ್ಳಲಾಗುತ್ತಿದೆಯೇ? ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.












Click it and Unblock the Notifications