Micro Finance: ಮೈಕ್ರೋ ಫೈನಾನ್ಸ್‌ಗಳ ನಿಯಂತ್ರಣ ಡಿಸಿ, ಎಸ್‌ಪಿಗಳಿಗೆ ಖಡಕ್ ಸೂಚನೆ
ಬೆಂಗಳೂರು, ಫೆಬ್ರವರಿ 16: "ಮೈಕ್ರೋಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ಕುರಿತ ಸುಗ್ರೀವಾಜ್ಞೆ ಅನುಷ್ಠಾನದಲ್ಲಿ ಜಿಲ್ಲಾಧಿಕಾರಿಗಳು, ಎಸ್‍ಪಿಗಳ ಪಾತ್ರ ಮುಖ್ಯವಾಗಿದೆ. ಸಾಲಗಾರರಿಗೆ ಕಿರುಕುಳ ಆಗದಂತೆ ಮತ್ತು ಸಾಲ ಕೊಡುವವರಿಗೂ ತೊಂದರೆಯಾಗದಂತೆ ಮುನ್ನೆಚ್ಚರಿಗೆ ವಹಿಸಬೇಕು" ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಕ್ರೋ ಫೈನಾನ್ಸ್‌ಗಳ ನಿಯಂತ್ರಣ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು, ಹಲವು ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಮುಖ್ಯಮಂತ್ರಿಗಳು, "ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತರದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ-2025 ಸುಗ್ರೀವಾಜ್ಞೆಯನ್ನು ಜಾರಿಗೊಳ್ಳಿಸಿದ್ದು, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ಕುರಿತು ಅನುಷ್ಠಾನದಲ್ಲಿರುವ ಸುಗ್ರೀವಾಜ್ಞೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹೆಚ್ಚು ಅಧಿಕಾರಗಳನ್ನು ನೀಡಿದ್ದು, ಸಾಲಗಾರರಿಗೆ ಯಾವುದೇ ರೀತಿಯ ಕಿರುಕುಳ ಆಗದಂತೆ ಮುನ್ನೆಚ್ಚರಿಗೆ ವಹಿಸಬೇಕು" ಎಂದರು.

"ನಿಯಮಾನುಸಾರ ಸಾಲಕೊಡುವವರಿಗೂ ತೊಂದರೆಯಾಗದಂತೆ ಗಮನಹರಿಸಬೇಕು. ಈ ಸುಗ್ರೀವಾಜ್ಞೆಯಿಂದ ನಿಯಮಾನುಸಾರ ಸಾಲ ನೀಡುವ ಲೇವಾದೇವಿಗಾರರಿಗೆ ಹಾಗೂ ಮನಿಲ್ಯಾಂಡರ್ ಅವರಿಗೆ ತೊಂದರೆ, ಕಿರುಕುಳ ಆಗದಂತೆ ಅಧಿಕಾರಿಗಳು ಗಮನ ಹರಿಸಬೇಕು. ಬಡವರು, ಮಹಿಳೆಯರು ಮತ್ತು ರೈತರಿಗೆ ಸಾಲ ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್‌ನವರಿಂದ ಯಾವುದೇ ಕಿರುಕುಳ, ತೊಂದರೆ ಆಗದಂತೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಈ ಸುಗ್ರೀವಾಜ್ಞೆ ಜಾರಿಗೆ ತರಲಾಗಿದೆ" ಎಂದುತಿಳಿಸಿದರು.
ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು
* ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಪ್ರತಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ನಿರಂತರ ನಿಗಾ ಇರಿಸಬೇಕು. ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು. ಬಲವಂತದ ವಸೂಲಾತಿ ಮಾಡುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು.
* ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸಹಾಯವಾಣಿ ಪ್ರಾರಂಭಿಸಲು ಸೂಚಿಸಲಾಗಿದ್ದು, ಬಲವಂತದ ಸಾಲ ವಸೂಲಾತಿ ಮಾಡುವ ಪ್ರಕರಣಗಳಲ್ಲಿ ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಬೇಕು. ಸಾಲ ನೀಡುವವರಿಗೆ ತೊಂದರೆ ಉಂಟು ಮಾಡುವ ಯಾವುದೇ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಿಲ್ಲ. ಆದರೆ ಬಲವಂತದ ವಸೂಲಾತಿ, ಮಾನಹಾನಿ, ಕಿರುಕುಳದ ಮೂಲಕ ಸಾಲ ವಸೂಲಾತಿಯನ್ನು ತಡೆಯುವ ಉದ್ದೇಶದಿಂದ ಜಾರಿಗೆ ತರಲಾಗಿದೆ.
* ಯಾವುದೇ ಜಿಲ್ಲೆಗಳಲ್ಲಿ ಸಾಲಗಾರರ ಕಿರುಕುಳ ಮುಂದುವರೆದಿರುವುದು ಗಮನಕ್ಕೆ ಬಂದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಕಾಯ್ದೆ ಜಾರಿಗೊಳಿಸಿದ ಬಳಿಕ ಹಲವು ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖವಾಗಿದ್ದು, ಕಟ್ಟುನಿಟ್ಟಿನಿಂದ ಕಾಯ್ದೆಯ ಅಂಶಗಳನ್ನು ಜಾರಿಗೊಳಿಸುವ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು.
* ಬೆಳಗ್ಗೆ 9 ಗಂಟೆಗೆ ಮೊದಲು ಮತ್ತು ಸಂಜೆ 6 ಗಂಟೆಯ ನಂತರ ಸಾಲಗಾರರ ಮನೆಗೆ ಸಾಲ ವಸೂಲಾತಿಗಾಗಿ ಹೋಗಬಾರದು. ಬಲವಂತದ ವಸೂಲಾತಿಯನ್ನು ತಡೆಯಲು ಈ ಕಾನೂನು ಜಾರಿ ಮಾಡಲಾಗಿದೆ. ರಾಜ್ಯದಲ್ಲಿ 2022 ರಿಂದ 2025ರವರೆಗೆ ಇಂತಹ ಪ್ರಕರಣಗಳನ್ನು ಗಮನಸಿದಾಗ ಕಳೆದ 2 ತಿಂಗಳಲ್ಲಿ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗಿವೆ. ಮೈಕ್ರೋ ಫೈನಾನ್ಸ್‌ಗಳಿಂದ ಸಾಲ ಪಡೆದವರಿಗೆ ಆಗುವ ಕಿರುಕುಳವನ್ನು ತಪ್ಪಿಸಲು ಸುಗ್ರೀವಾಜ್ಞೆ ಜಾರಿಗೆ ತರಲಾಗಿದೆ. ಅಧಿಕಾರಿಗಳು ಸರಿಯಾಗಿ ಅಧ್ಯಯನ ಮಾಡಿ, ಇದನ್ನು ಜಾರಿ ಮಾಡಬೇಕು.
* ದೂರುದಾರರಿಂದ ದಾಖಲಿಸಿಕೊಂಡಿರುವ ದೂರುಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮಹಾನಗರ ಪೊಲೀಸ್ ಆಯುಕ್ತರ ಮೂಲಕ ಸಂಬಂಧಿಸಿದ ಪೊಲೀಸ್ ಠಾಣೆಗಳಿಗೆ ರವಾನಿಸಿ, ಸಾಲಗಾರರಿಗೆ ಕಿರುಕುಳ, ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು.












Click it and Unblock the Notifications