ಕರ್ನಾಟಕದಲ್ಲಿ ಕಬ್ಬು ಬೆಳಗಾರರ ಸಮಸ್ಯೆಗೆ ಇದೇ ಕಾರಣ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ?
ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ಶುಕ್ರವಾರ ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ. ಕಬ್ಬು ಬೆಳೆಗಾರರಿಗೆ ನೆರವಾಗುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕೆಲಸ ಎಂದಿದ್ದಾರೆ.
ಕೇಂದ್ರ ಸರ್ಕಾರ ದಿನಾಂಕ 6-05-2025ರಲ್ಲಿ ಎಫ್ಆರ್‌ಪಿ ನಿಗದಿಪಡಿಸಿದೆ. ಈ ಎಫ್ಆರ್‌ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್‌ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಇದೀಗ ಕೇಂದ್ರ ಸರ್ಕಾರ ಸಮಸ್ಯೆ ಹುಟ್ಟು ಹಾಕಿದೆ. ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್‌ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಲಾಗುವುದು ಎಂದಿದ್ದಾರೆ.

ಕೇಂದ್ರ ಸರ್ಕಾರ ಎಫ್‌ಆರ್‌ಪಿ ದರಕ್ಕೆ ಪೂರಕವಾಗಿ ಎಂಎಸ್‌ಪಿ ದರ ಏರಿಸುತ್ತಿಲ್ಲ. 2019 ರಿಂದ ಕೇಂದ್ರ ಎಂಎಸ್‌ಪಿ ದರ ಏರಿಸಿಲ್ಲ. ಎಥೆನಾಲ್ ದರವನ್ನೂ ಏರಿಸಿಲ್ಲ. ನಮ್ಮ ಈ ಸಮಸ್ಯೆ ಬಗ್ಗೆಯೂ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸಬೇಕು ಎಂದು ಕಾರ್ಖಾನೆ ಮಾಲೀಕರು ಒತ್ತಾಯಿಸಿದ್ದಾರೆ. ಎಂಎಸ್‌ಪಿ ದರ ಹೆಚ್ಚಿಸುವಂತೆ ಬಹಳ ಹಿಂದೆಯೇ ಕೇಂದ್ರಕ್ಕೆ, ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಇಲ್ಲಿಯವರೆಗೂ ಕೇಂದ್ರ ಸರ್ಕಾರ ಎಂಎಸ್‌ಪಿ ದರ ಹೆಚ್ಚಿಸಿಲ್ಲ. ರಾಜ್ಯ ಪ್ರತಿನಿಧಿಸುವ ಕೇಂದ್ರ ಮಂತ್ರಿಗಳೂ ಕಬ್ಬು ಬೆಳೆಗಾರರಿಗೆ ಎಂಎಸ್‌ಪಿ ದರ ಹೆಚ್ಚಿಸುವುದಕ್ಕೆ ಸಹಕರಿಸಲಿಲ್ಲ, ಪ್ರಧಾನಿ ಅವರ ಜೊತೆ ಮಾತಾಡುತ್ತಿಲ್ಲ ಎಂದು ದೂರಿದ್ದಾರೆ.
ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದೆ. ಪ್ರಸ್ತುತ ಕಬ್ಬು ಬೆಳೆಗಾರರು ಬೀದಿಗಿಳಿದಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ರೂ.3,200 ರೂ. ನಿಗದಿಪಡಿಸಿದ್ದು, (ಕಟಾವು ಮತ್ತು ಸಾಗಾಟ ಹೊರತುಪಡಿಸಿ) ಇದಕ್ಕೆ ಕಾರ್ಖಾನೆಗಳು ಒಪ್ಪಿಕೊಂಡರೆ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬಹುದಾಗಿದೆ. ಆಯಾ ಪ್ರದೇಶದ ಇಳುವರಿ ರಿಕವರಿ ಪ್ರಮಾಣದ ಆಧಾರದಲ್ಲಿ ದರವನ್ನು ಹೆಚ್ಚಳ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಸಹಕಾರಿ ರಂಗದ ಇಐಡಿ ಪ್ಯಾರಿ ಶುಗರ್ ಕಾರ್ಖಾನೆಯವರು ಕಬ್ಬು ಬೆಳೆಗಾರರಿಗೆ ಪ್ರಸ್ತುತ ರೂ.3,211ಪಾವತಿಸುತ್ತಿದೆ. ಇದೇ ಮಾದರಿಯಲ್ಲಿ ಉಳಿದ ಕಾರ್ಖಾನೆಗಳು ರೈತರಿಗೆ ಪಾವತಿಸಿದರೆ ಅನುಕೂಲ ಆಗಲಿದೆ. ಸಕ್ಕರೆ ಕಾರ್ಖಾನೆಗಳ ಸಮಸ್ಯೆಗಳನ್ನು ಆಲಿಸಲು ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿಯೇ, ಸಕ್ಕರೆಯ ಎಂಎಸ್‌ಪಿ ರೂ.41ಕ್ಕೆ ನಿಗದಿಪಡಿಸಲು ಕೋರಿ ಪ್ರಧಾನಿಯವರಿಗೆ ಈಗಾಗಲೇ ಪತ್ರ ಬರೆಯಲಾಗಿದ್ದು, ಅವರು ಸಮಯ ನೀಡಿದರೆ ನಾಳೆಯೇ ನಿಯೋಗ ಕರೆದುಕೊಂಡು ಹೋಗಲು ಸಿದ್ಧರಿದ್ದೇವೆ. ಅವಧಿಗಿಂತ ಮೊದಲು ಕಬ್ಬು ಕಟಾವು ಮಾಡದಿರುವುದು ಸೇರಿದಂತೆ ಕಬ್ಬಿನ ಇಳವರಿ ರಿಕವರಿ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳುವ ಕುರಿತು ರೈತರಿಗೆ ಜಾಗೃತಿ ಮೂಡಿಸುವುದು ಸಕ್ಕರೆ ಕಾರ್ಖಾನೆಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.
ಪ್ರತಿಭಟನಾ ನಿರತ ರಾಜ್ಯದ ಕಬ್ಬು ಬೆಳೆಗಾರ ಸಂಘಟನೆಗಳ ಮುಖಂಡ ಜೊತೆ ಸಭೆ
ಪ್ರತಿಭಟನಾ ನಿರತ ರಾಜ್ಯದ ಕಬ್ಬು ಬೆಳೆಗಾರ ಸಂಘಟನೆಗಳ ಮುಖಂಡ ಜೊತೆ ಸಭೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆ ಬಗೆಹರಿಸಲು ನಾವು ಸಿದ್ಧರಿದ್ದೇವೆ. ಕೇಂದ್ರ ಸರ್ಕಾರ ಪರಿಹರಿಸಬೇಕಾದ ಸಮಸ್ಯೆಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ? ರೈತರು ಕೇಂದ್ರದ ಮೇಲೆ ಒತ್ತಡ ಹೇರಿ ಸಮಸ್ಯೆ ಬಗೆಹರಿಯಬೇಕು ಎಂದು ಆಗ್ರಹಿಸಿದ್ದಾರೆ.
ಸಕ್ಕರೆಗೆ ಎಂಎಸ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರ. ಇದೇ ರೀತಿ ಕಬ್ಬಿಗೆ ಎಫ್ಆರ್‌ಪಿ ನಿಗದಿಪಡಿಸುವವರು ಕೂಡ ಅವರೇ. ಎಥೆನಾಲ್ ಹಂಚಿಕೆ ನಿಗದಿಪಡಿಸುವವರು ಕೇಂದ್ರ ಸರ್ಕಾರವೇ. ಸಕ್ಕರೆ ರಫ್ತು ಮಿತಿ ನಿಗದಿಪಡಿಸುವವರು ಸಹ ಕೇಂದ್ರ ಸರ್ಕಾರ ಎಂದು ನೀವೇ ಹೇಳುತ್ತಿದ್ದೀರಿ, ಅವರಿಂದ ಆಗಿರುವ ಸಮಸ್ಯೆಗೆ ರಾಜ್ಯ ಸರ್ಕಾರದಿಂದ ಪರಿಹಾರ ಕೇಳಿದರೆ ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.
ಕೇಂದ್ರ ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್ಆರ್‌ಪಿ ವೈಜ್ಞಾನಿಕವಾಗಿಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ರಿಕವರಿ ಕಡಿಮೆ ತೋರಿಸುತ್ತಿವೆ. ಇದನ್ನು ತಪ್ಪಿಸಲು ಪ್ರತಿ ಕಾರ್ಖಾನೆ ಎದುರು ಸರ್ಕಾರದ ವತಿಯಿಂದ ಪ್ರಯೋಗಾಲಯ ತೆರೆಯಬೇಕು. ಕೆಲವು ಕಾರ್ಖಾನೆಗಳು ಹಳೆಯ ಬಾಕಿಯನ್ನು ಉಳಿಸಿಕೊಂಡಿದ್ದು, ಇದರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರಾದ ನೀವೆಲ್ಲಾ ಮನವಿ ಮಾಡಿದ್ದೀರಿ. ಸಕ್ಕರೆ ಕಾರ್ಖಾನೆಗಳ ಕುರಿತು ಕಬ್ಬು ಬೆಳೆಗಾರರಿಗೆ ಇರುವ ಎಲ್ಲಾ ಅಹವಾಲುಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.












Click it and Unblock the Notifications