ಕರ್ನಾಟಕದಲ್ಲಿ ಹಿಜಾಬ್ ನಿಷೇಧ ವಾಪಸ್
ಮೈಸೂರು, ಡಿಸೆಂಬರ್ 22 : ಹಿಂದೆ ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಕೋಲಾಹಲ ಸೃಷ್ಟಿಸಿದ್ದ ಹಿಜಾಬ್ ವಿವಾದ ಇದೀಗ ಲೋಕಸಭಾ ಚುನಾವಣೆ ಹೊತ್ತಲಿ ಮತ್ತೆ ಮುನ್ನಲೆಗೆ ಬಂದಿದೆ.
ಹೌದು, ರಾಜ್ಯದಲ್ಲಿ ಹಿಜಾಬ್ ನಿಷೇಧಿಸಿದ್ದ ಬಿಜೆಪಿ ಸರ್ಕಾರದ ಆದೇಶವನ್ನು ಇದೀಗ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆಯಲು ನಿರ್ಧರಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದು, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಈ ಕುರಿತು ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿದ್ದರಾಮಯ್ಯ, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ. ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ನೋ ಹಿಜಾಬ್, ಎಲ್ಲರು ಹಿಜಾಬ್ ಹಾಕಿಕೊಂಡು ಹೋಗಬಹುದು. ಆದೇಶ ಹಿಂಪಡೆಯಲು ಹೇಳಿದ್ದೇನೆ. ಡ್ರೆಸ್, ಊಟ ಮಾಡುವುದು ನಿಮಗೆ ಸೇರಿದ್ದು. ನಾನೇಕೆ ನಿಮಗೆ ಅಡ್ಡಿ ಪಡಿಸಲಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ನೀನು ಯಾವ ಊಟ ಮಾಡುತ್ತೀಯಾ ಮಾಡು. ನೀನು ಊಟ ಮಾಡುವುದು ನಿನ್ನ ಹಕ್ಕು. ನೀನು ಯಾವ್ ಡ್ರೆಸ್ ಹಾಕಿಕೊಳ್ಳುತ್ತೀಯಾ ಹಾಕಿಕೋ. ನಾನು ಊಟ ಮಾಡುವುದು ನನ್ನ ಹಕ್ಕು. ನಾನು ದೋತಿ ಮತ್ತು ಜುಬ್ಬ ಹಾಕಿಕೊಳ್ಳುತ್ತೇನೆ. ನೀನು ಪ್ಯಾಂಟ್ ಶರ್ಟ್ ಹಾಕಿಕೊಂಡರೆ ಹಾಕಿಕೋ, ಇದರಲ್ಲಿ ತಪ್ಪೇನಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮತಕ್ಕಾಗಿ ರಾಜಕಾರಣ ಮಾಡುವುದು ತಪ್ಪು. ಬಡವರಿಗಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತೆ. ಇದರಿಂದ ವಿಚಲಿತರಾಗುವ ಪ್ರಶ್ನೆ ಇಲ್ಲ. ರಾಜೀ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ಸುಳ್ಳು, ಮೋಸ ಮಾಡುವವರ ಜೊತೆ ಇರಬೇಡಿ ಎಂದು ಪರೋಕ್ಷವಾಗಿ ವಿಪಕ್ಷಗಳ ವಿರುದ್ದ ಕಿಡಿಕಾರಿದರು.
ಹಣವಂತರು, ಬಲಾಡ್ಯರು ಈಗಲೂ ದೌರ್ಜನ್ಯ ನಡೆಸುತ್ತಿದ್ದಾರೆ. ಇವರು ಹಣ ಬಲದಿಂದ ಪೊಲೀಸರನ್ನು ಖರೀದಿಸಬಹುದು ಎನ್ನುವ ಭ್ರಮೆಯಲ್ಲಿರುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದರು.
ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ.
ಜನರೇ ನಮ್ಮ ಮಾಲೀಕರು ಎನ್ನುವ ಭಾವನೆ ಎಲ್ಲಾ ಅಧಿಕಾರಿಗಳಲ್ಲೂ ಇರಬೇಕು ಎಂದು ಕಿವಿಮಾತು ಹೇಳಿದರು. ನಾಗರಿಕ ಹಕ್ಕುಗಳ ರಕ್ಷಣೆ ಪೊಲೀಸ್ ಇಲಾಖೆಯ ಕರ್ತವ್ಯ. ಕಾನೂನು ಉಲ್ಲಂಘಿಸಲು ಕೆಲವರು ಚಾಪೆ ಕೆಳಗೆ ನುಸುಳುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದರು.
ಗುಪ್ತಚರ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿದ್ದರೆ ಅಪರಾಧ ಘಟಿಸುವುದಕ್ಕಿಂತ ಮೊದಲೇ ತಡೆಯುವುದು ಸಾಧ್ಯ. ಠಾಣೆಯ ಅಧಿಕಾರಿಗಳಿಗೆ ಗೊತ್ತಿಲ್ಲದೆ ಯಾವ ಕಾನೂನು ಬಾಹಿರ ಚಟುವಟಿಕೆಗಳೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಠಾಣೆಯಲ್ಲೇ ಕುಳಿತು ಮಹಜರ್ ಬರೆಯಬಾರದು. ಸ್ಥಳಕ್ಕೆ ಹೋಗಿ ಮಹಜರ್ ಮಾಡಬೇಕು ಎಂದರು.
ಚಾಳಿಬಿದ್ದ ಅಪರಾಧಿಗಳ ಮೇಲೆ ತೀವ್ರ ನಿಗಾ ಇಡಬೇಕು. ರೌಡಿಗಳ ಚಲನ ವಲನದ ಬಗ್ಗೆ ಠಾಣಾಧಿಕಾರಿಗಳಿಗೆ, ಠಾಣೆಯ ಸಿಬ್ಬಂದಿಗೆ ಮಾಹಿತಿ ಇರಬೇಕು ಎಂದು ಸೂಚಿಸಿದರು.












Click it and Unblock the Notifications