ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ

ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) 3ನೇ ಹಂತದ ಭೂಸ್ವಾಧೀನ ಪ್ರಕ್ರಿಯೆಗೆ ಪೂರಕ ಬಜೆಟ್‌ನಲ್ಲಿ 5,000 ಕೋಟಿ ರೂ.ಗಳ ಹೆಚ್ಚುವರಿ ಅನುದಾನ ಮೀಸಲಿಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಬಾಗಲಕೋಟೆ ನವನಗರದಲ್ಲಿ ನೂತನ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ (ಮೆಡಿಕಲ್ ಕಾಲೇಜು) ಹಾಗೂ ಸಂಶೋಧನಾ ಸಂಸ್ಥೆಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ, ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) 3ನೇ ಹಂತದಡಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಚೆಕ್‌ ವಿತರಿಸಿ ಅವರು ಮಾತನಾಡಿದರು. ಈ ವೇಳೆ, ಬಾಗಲಕೋಟೆಗೆ ಮೆಡಿಕಲ್ ಕಾಲೇಜು ಮಂಜೂರಾಗುವಲ್ಲಿ ದಿವಂಗತ ಶಾಸಕ ಹೆಚ್.ವೈ. ಮೇಟಿಯವರ ಪಾತ್ರವನ್ನು ಸಿಎಂ ಸ್ಮರಿಸಿದರು.

CM Siddaramaiah

ಉಪಚುನಾವಣೆ ಗಿಮಿಕ್ ಅಲ್ಲ

ಬಾಗಲಕೋಟೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಕೇವಲ ಉಪಚುನಾವಣೆಯ ಗಿಮಿಕ್ ಅಲ್ಲ. ಇದನ್ನು 2025ರ ಬಜೆಟ್‌ನಲ್ಲೇ ಘೋಷಣೆ ಮಾಡಲಾಗಿತ್ತು. ಪ್ರತಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಹಾಗೂ ಟ್ರಾಮಾ ಸೆಂಟರ್ ಸ್ಥಾಪಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ 25 ಜಿಲ್ಲೆಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ವರ್ಷ ಬಾಗಲಕೋಟೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನೂ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿಗೆ ಹಣವಿಲ್ಲ ಎಂಬ ವಿಪಕ್ಷಗಳ ಆರೋಪವನ್ನು ತಳ್ಳಿಹಾಕಿದ ಅವರು, "ಪ್ರತಿ ವರ್ಷ ಗ್ಯಾರಂಟಿಗಳಿಗೆ 50 ಸಾವಿರ ಕೋಟಿ ರೂ. ವ್ಯಯಿಸಲಾಗುತ್ತಿದೆ. ಇದುವರೆಗೆ 1.22 ಲಕ್ಷ ಕೋಟಿ ರೂ. ಖರ್ಚು ಮಾಡಿದ್ದರೂ, ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ. 4 ವರ್ಷ ಅಧಿಕಾರದಲ್ಲಿದ್ದರೂ ಬಿಜೆಪಿ ಇಲ್ಲಿ ಮೆಡಿಕಲ್ ಕಾಲೇಜು ತರಲಿಲ್ಲ," ಎಂದು ವಾಗ್ದಾಳಿ ನಡೆಸಿದರು.

ಯುಕೆಪಿ ಸಂತ್ರಸ್ತರಿಗೆ 5 ಸಾವಿರ ಕೋಟಿ ರೂ ಅನುದಾನ

ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) 3ನೇ ಹಂತದ ಭೂಸ್ವಾಧೀನ ಪ್ರಕ್ರಿಯೆಗೆ ಪೂರಕ ಬಜೆಟ್‌ನಲ್ಲಿ 5,000 ಕೋಟಿ ರೂ.ಗಳ ಹೆಚ್ಚುವರಿ ಅನುದಾನ ಮೀಸಲಿಡುವುದಾಗಿ ಸಿಎಂ ಘೋಷಿಸಿದ್ದಾರೆ. ಈಗಾಗಲೇ ಬಜೆಟ್‌ನಲ್ಲಿ 3,000 ಕೋಟಿ ರೂ. ನೀಡಲಾಗಿದ್ದು, ಇದು ಕಡಿಮೆಯಾಗಲಿದೆ ಎಂಬ ಕಾರಣಕ್ಕೆ ಹೆಚ್ಚುವರಿ ಅನುದಾನ ನೀಡಲು ಸರ್ಕಾರ ನಿರ್ಧರಿಸಿದೆ. ಸ್ವಯಂಪ್ರೇರಣೆಯಿಂದ ಭೂಮಿ ನೀಡುವ ರೈತರಿಗೆ ನೀರಾವರಿ ಜಮೀನಿಗೆ 40 ಲಕ್ಷ ರೂ. ಹಾಗೂ ಖುಷ್ಕಿ ಜಮೀನಿಗೆ 30 ಲಕ್ಷ ರೂ. ಪರಿಹಾರವನ್ನು ಒಂದೇ ಬಾರಿಗೆ ನೀಡಲಾಗುತ್ತಿದೆ. ಯುಕೆಪಿ ವ್ಯಾಪ್ತಿಯ 8 ಗ್ರಾಮಗಳ 900 ಎಕರೆ ಜಮೀನಿಗೆ 446 ಕೋಟಿ ರೂ.ಗಳ ಪರಿಹಾರವನ್ನು ವಿತರಿಸಲಾಗುತ್ತಿದೆ ಎಂದು ವಿವರಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ಸಿಡಿಮಿಡಿ

ಯುಕೆಪಿ ಹಾಗೂ ಮಹದಾಯಿ ಯೋಜನೆಗಳ ವಿಚಾರದಲ್ಲಿ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. "ಯುಕೆಪಿ ವಿಚಾರದಲ್ಲಿ 13 ವರ್ಷ ಕಳೆದರೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿಲ್ಲ. ಗುಜರಾತ್‌ನಲ್ಲಿ ನದಿ ನೀರಿನ ವ್ಯಾಜ್ಯವಿದ್ದರೂ ಗೆಜೆಟ್ ನೋಟಿಫಿಕೇಶನ್ ಮಾಡಲಾಯಿತು. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ತಮ್ಮ ತವರು ರಾಜ್ಯಕ್ಕೆ ನೀಡುವ ಆದ್ಯತೆಯನ್ನು ಕರ್ನಾಟಕಕ್ಕೆ ಏಕೆ ನೀಡುತ್ತಿಲ್ಲ?" ಎಂದು ಅವರು ಖಾರವಾಗಿ ಪ್ರಶ್ನಿಸಿದರು. ಮಹದಾಯಿ ವಿಚಾರದಲ್ಲಿ ಯಾವುದೇ ಕಾನೂನು ತೊಡಕುಗಳಿಲ್ಲದಿದ್ದರೂ ಕೇಂದ್ರ ಅನುಮತಿ ನೀಡುತ್ತಿಲ್ಲ ಎಂದು ದೂರಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಅಧಿಕಾರಿಗಳು ಹಾಗೂ ನೂರಾರು ಸಂಖ್ಯೆಯಲ್ಲಿ ರೈತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+