'ಹೌದು ಮಿಸ್ಟರ್ ಮೋದಿ ಇದು ನಿಮ್ದೆ ಓದಿ': ಗುಜರಾತ್ ಭಿಕ್ಷುಕ ರಾಜ್ಯವೇ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದೇಕೆ?
ಬೆಂಗಳೂರು, ಫೆಬ್ರವರಿ 08: ಗುಜರಾತ್ ಭಿಕ್ಷಕ ರಾಜ್ಯವೇ?, ಗುಜರಾತಿಗಳು ಭಿಕ್ಷುಕರೆ? ನಾವು ದಿಲ್ಲಿಯ ಅನುಕಂಪದಡಿ ಬದುಕಬೇಕೆ? ಎಂದು ತಿಳಿಸಿದ್ದ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಕಟುವಾಗಿ ಪ್ರಶ್ನಿಸಿದ್ದಾರೆ.
ತೆರಿಗೆ ಹಂಚಿಕೆ ವಿಚಾರ ಕುರಿತು ಗುರುವಾರ ಸರಣಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಿಎಂ ಮೋದಿ ಟ್ವೀಟ್ ಗಳ ಪೋಸ್ಟ್ ಅನ್ನು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, 'ಹೌದು ಮಿಸ್ಟರ್ ಮೋದಿ ಇದು ನಿಮ್ದೆ ಓದಿ' ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿಯವರು ಗುಜರಾತ್ ಸಿಎಂ ಆಗಿದ್ದಾಗ ತಮ್ಮ ಜ್ಯಕ್ಕೆ ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಧ್ವನಿ ಎತ್ತಿದ್ದಾಗ ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಎದುರಾಗಲಿಲ್ಲ. ಹಾಗಾದರೆ ಈಗ ನಾವು ಕನ್ನಡಿಗರಿಗೆ ನ್ಯಾಯಯುತ ಪಾಲು ಕೊಡಿ ಎಂದು ಕೇಳುವಾಗ ಯಾಕೆ ಎದುರಾಗುತ್ತದೆ? ಎಂದು ಸಿದ್ದರಾಮಯ್ಯನವರು ಪ್ರಶ್ನೆ ಮಾಡಿದ್ದಾರೆ.
ಸಾಕ್ಷಿ, ಫೋಟೊ ಸಮೇತ ಸಿಎಂ ಕಿಡಿ
ಇದೀಗ ನಾಡಿಗೆ ಅನ್ಯಾಯ ಆಗುತ್ತಿಲ್ಲ ಎಂದು ಮಾತನಾಡುತ್ತಿರುವ ಬೊಮ್ಮಾಯಿ ಅವರು ಹಾಗೂ ಹೆಚ್.ಡಿ ಕುಮಾರಸ್ವಾಮಿ ಅವರು ಹಿಂದೆ ಆಡಿದ ಮಾತುಗಳ ಪುರಾವೆ ನೀಡಿ ಅವುಗಳನ್ನು ಒಮ್ಮೆ ನೋಡಿ ಎಂದು ಮಾಜಿ ಸಿಎಂಗಳ ಫೋಟೊ ಮತ್ತು ಸಾಕ್ಷಿ ಸಮೇತ ಅವರು ಗುಡುಗಿದ್ದಾರೆ.
ತೆರಿಗೆ ಹಂಚಿಕೆಯೂ ಸೇರಿದಂತೆ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ನಮ್ಮ ಸರ್ಕಾರ ನಡೆಸಿದ್ದ 'ದೆಹಲಿ ಚಲೋ' ಹೋರಾಟ ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಅಚ್ಚರಿ ಉಂಟು ಮಾಡಿದೆ.
ಪ್ರಧಾನಿಗೆ ಸಿದ್ದರಾಮಯ್ಯ ಕೇಳಿದ ಪ್ರಶ್ನೆಗಳು
ಇದೇ ಪ್ರಧಾನಿ ಮೋದಿಯವರು ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರದ ವಿರುದ್ಧ ಪುಂಖಾನುಪುಂಖವಾಗಿ ನೀಡಿದ್ದ ಹೇಳಿಕೆಗಳನ್ನು ಅವರ ಗಮನಕ್ಕೆ ತರುತ್ತೇನೆ. ಮೋದಿಯವರೇ, ನಿಮ್ಮ ಹೇಳಿಕೆಗಳು ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿರಲಿಲ್ಲವೇ? ದಯವಿಟ್ಟು ಉತ್ತರ ಕೊಡಿ ಎಂದರು.

ಕೇಂದ್ರ ಹಣಕಾಸು ಆಯೋಗದ ವಿರುದ್ಧ ಮೊದಲು ಮಾತನಾಡಿದ್ದೇ ನರೇಂದ್ರ ಮೋದಿಯವರು. 2012ರಲ್ಲಿ ಅವರು ಗುಜರಾತ್ ರಾಜ್ಯ ಕೇಂದ್ರ ಸರ್ಕಾರಕ್ಕೆ ರೂ.60,000 ಕೋಟಿ ನೀಡುತ್ತಿದೆ. ಇದರಲ್ಲಿ ನಮಗೆ ವಾಪಸ್ ಬಂದದ್ದು ಎಷ್ಟು? ಗುಜರಾತ್ ಭಿಕ್ಷುಕ ರಾಜ್ಯವೇ? ಎಂದಿದ್ದರು.
ಪ್ರಧಾನಿಗೆ ಹಳೆಯದೆಲ್ಲ ನೆನಪಿಸಿದ ಸಿದ್ದರಾಮಯ್ಯ
ಗುಜರಾತ್ ರಾಜ್ಯ ಪ್ರತಿವರ್ಷ ರೂ.40,000 ಕೋಟಿ ರೂ.ಗಳನ್ನು ತೆರಿಗೆ ರೂಪದಲ್ಲಿ ಕೇಂದ್ರ ಪಾವತಿಸುತ್ತಿದೆ. ಅದರಲ್ಲಿ ಕೇವಲ ಶೇಕಡಾ 2.5ರಷ್ಟು ಮಾತ್ರ ರಾಜ್ಯಕ್ಕೆ ವಾಪಸು ನೀಡಲಾಗುತ್ತದೆ. ಇಷ್ಟು ಜುಜುಬಿ ಮೊತ್ತವನ್ನು ವಾಪಸು ನೀಡುವ ಬದಲಿಗೆ ಒಂದು ವರ್ಷದ ಅವಧಿಗೆ ನಮ್ಮ ತೆರಿಗೆಯನ್ನು ನಾವೇ ಬಳಸಿಕೊಳ್ಳಲು ಅವಕಾಶ ನೀಡಬಾರದೇಕೆ? ಎಂದು ಪ್ರಧಾನಿ ಅಂದು ಪ್ರಶ್ನೆ ಮಾಡಿದ್ದರು ಎಂದು ಸಿಎಂ ವಿವರಿಸಿದರು.
ಕೇಂದ್ರ ಸರ್ಕಾರ ರಾಜ್ಯದಿಂದ ಸಂಗ್ರಹಿಸುವ ತೆರಿಗೆಯಲ್ಲಿ ಕನಿಷ್ಠ ಶೇಕಡಾ 32 ರಿಂದ 50ರ ವರೆಗೆ ರಾಜ್ಯಕ್ಕೆ ಪಾಲು ನೀಡಬೇಕು ಎಂದು ಆಗ ವಾದಿಸಿದ್ದರು. ತೆರಿಗೆ ಹಂಚಿಕೆಗೆ ಅನುಸರಿಸಲಾಗುತ್ತಿರುವ ಮಾನದಂಡವನ್ನು ಹಣಕಾಸು ಆಯೋಗ ಬದಲಾವಣೆ ಮಾಡಬೇಕು. ಉತ್ತಮ ರೀತಿಯಲ್ಲಿ ಹಣಕಾಸು ನಿರ್ವಹಣೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ನಡೆಸುವ ರಾಜ್ಯಗಳಿಗೆ ಹೆಚ್ಚಿನ ಪ್ರೊತ್ಸಾಹ ನೀಡಬೇಕು.
ಅಂದು ಮೋದಿಯದ್ದು ಕೇಂದ್ರ ವಿರುದ್ಧ ನಿಲುವು?
ಹಣಕಾಸು ನಿರ್ವಹಣೆಯಲ್ಲಿ ಸೋತಿರುವ ರಾಜ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಿ ಉತ್ತಮ ರೀತಿಯಲ್ಲಿ ಹಣಕಾಸು ನಿರ್ವಹಣೆ ಮಾಡುತ್ತಿರುವ ರಾಜ್ಯಗಳನ್ನು ನಿರ್ಲಕ್ಷಿಸುವ ಈಗಿನ ತೆರಿಗೆ ಹಂಚಿಕೆ ವಿಧಾನವನ್ನು ಬದಲಿಸಬೇಕಾಗಿದೆ. ಮೂಲಸೌಕರ್ಯಗಳ ಸುಧಾರಣೆ ಮತ್ತು ದೇಶದ ಅಭಿವೃದ್ಧಿಗೆ ಗಣನೀಯ ಕೊಡುಗೆಗಳನ್ನು ನೀಡುವ ರಾಜ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಬೇಕು ಎಂದು ಪ್ರಧಾನಿಯವರು ಹೇಳಿದ್ದರು. ಹಾಗಾದರೆ ಇದು ಕೇಂದ್ರ ಸರ್ಕಾರದ ವಿರುದ್ಧದ ನಿಲುವಲ್ಲವೇ ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಇನ್ನೂ ಕೇಂದ್ರ ಸರ್ಕಾರ ತನ್ನನ್ನು ರಕ್ಷಿಸಿಕೊಳ್ಳಲು ಮತ್ತು ವಿರೋಧಿಗಳನ್ನು ಹಣಿಯಲು ಸಿಬಿಐ ಸಂಸ್ಥೆ ದುರುಪಯೋಗ ಮಾಡುತ್ತಿದೆ. ಈ ಬಗ್ಗೆ ಗುಜರಾತ್ ಸಿಎಂ ಆಗಿದ್ದ ಪ್ರಧಾನಿ ಮೋದಿಯವರು ಹೇಳಿದ್ದರು. ಈಗ ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆಯ ಪ್ರಾಮಾಣಿಕತೆಯನ್ನು ಪ್ರಶ್ನಿಸಿದವರನ್ನು ದೇಶದ್ರೊಹಿಗಳೆಂದು ದೂರುತ್ತಿದ್ದಾರೆ.
ಕಚ್ಚಾ ತೈಲ ಬೆಲೆ ಇಳಿದರೂ ಇಂಧನ ಬೆಲೆ ಏರಿಸಿದ್ದೇಕೆ?
ಯುಪಿಎ ಸರ್ಕಾರ ವಿದೇಶಿ ನೇರ ಬಂಡವಾಳ ಹೂಡಿಕೆಯ ಕಾನೂನನ್ನು ಜಾರಿಗೆ ತಂದಾಗ ಅದನ್ನು ವಿರೋಧಿಸಿದ್ದ ನರೇಂದ್ರ ಮೋದಿಯವರು 'ಇನ್ನು ಮುಂದೆ ನಿತ್ಯ ಬಳಕೆಯ ಉಪ್ಪು', ಸಾಂಬಾರ ಪದಾರ್ಥಗಳನ್ನೂ ವಿದೇಶಿಯರೇ ಮಾರುತ್ತಾರೆ' ಎಂದು ವ್ಯಂಗ್ಯವಾಡಿದ್ದರು.
ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯತ್ತಿದ್ದಾಗ ನರೇಂದ್ರ ಮೋದಿಯವರು 'ಯುಪಿಎ ಸರ್ಕಾರ ಮತ್ತು ರೂಪಾಯಿ ಉರುಳಿ ಕೆಳಗೆ ಬೀಳುವುದರದಲ್ಲಿ ಪೈಪೋಟಿ ನಡೆಸುವಂತಿದೆ'. ಪೆಟ್ರೋಲ್ ಬೆಲೆ ಏರಿಕೆಯಿಂದಾಗಿ ಗುಜರಾತ್ ಜನ ಬವಣೆ ಪಡುವಂತಾಗಿದೆ ಎಂದು ಗೋಳಿಟ್ಟಿದ್ದ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾದ ನಂತರದ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಇಳಿಯುತ್ತಿದ್ದರೂ ಪೆಟ್ರೋಲ್ ಬೆಲೆ ಏರಿಸುತ್ತಲೇ ಹೋದರು. ಇದರಿಂದ ಗುಜರಾತಿಗಳು ಮಾತ್ರವಲ್ಲ ಇಡೀ ದೇಶದ ಜನತೆ ಗೋಳಾಡಬೇಕಾಯಿತು ಎಂದು ಅವರು ವಿವರಿಸಿದರು.
ಆಧಾರ್ ಕಾರ್ಡ್ ವಿಚಾರದಲ್ಲಿ ನಿಲುವು ಬದಲಿಸಿದ ಮೋದಿ
ತಾವು ಸಿಎಂ ಆಗಿದ್ದಾಗ ಆಧಾರ್ ಗುರುತಿನ ಚೀಟಿಯ ಪ್ರಬಲ ವಿರೋಧಿಯಾಗಿದ್ದ ಪ್ರಧಾನಿಯವರು 'ಆಧಾರ್ ಕಾರ್ಡ್ ಗೆ ಭವಿಷ್ಯದ ಮುನ್ನೋಟವೇ ಇಲ್ಲ, ಇದು ಕೇವಲ ರಾಜಕೀಯ ಗಿಮಿಕ್ ಎಂದು ಟೀಕಿಸಿದ್ದರು. ಅದೇ ಮೋದಿಯವರು ಪ್ರಧಾನಿಯಾದ ನಂತರ ತಮ್ಮ ನಿಲುವು ಬದಲಿಸಿದ್ದಾರೆ.
2022ರ ಡಿಸೆಂಬರ್ ತಿಂಗಳಲ್ಲಿ ವಿಧಾನಸಭೆಯಲ್ಲಿಯೇ ನಾನು ಮಾತನಾಡುತ್ತಾ “15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದಾಗ ಆಗ ಮುಖ್ಯಮಂತ್ರಿಗಳಾಗಿದ್ದ @BSBommai ಅವರು ಅನ್ಯಾಯವಾಗಿರುವುದು ನಿಜ ಎಂದು ಒಪ್ಪಿಕೊಂಡಿರುವುದು ಸದನದ ದಾಖಲೆಯಲ್ಲಿದೆ, ಪತ್ರಿಕೆಗಳಲ್ಲಿಯೂ ಪ್ರಕಟವಾಗಿದೆ.
— CM of Karnataka (@CMofKarnataka) February 8, 2024
ಇದೇ ಬೊಮ್ಮಾಯಿಯವರು ಹಣಕಾಸು… pic.twitter.com/BHAlMEH78z
ಇಂತಹ ಹತ್ತಾರು ಯೂ ಟರ್ನ್ ಗಳನ್ನು ನಾನು ಪಟ್ಟಿ ಮಾಡಿಕೊಡಬಹುದು. ಆ ದಿನಗಳಲ್ಲಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದ, ಟೀಕಿಸಿದ್ದ ನರೇಂದ್ರ ಮೋದಿ ಅವರ ಹೇಳಿಕೆಗಳಿಂದ ದೇಶದ ಏಕತೆ ಮತ್ತು ಭದ್ರತೆಗೆ ಎದುರಾಗದ ಬೆದರಿಕೆ ಈಗ ನಮ್ಮ ಪ್ರತಿಭಟನೆಯಿಂದ ಹೇಗೆ ಎದುರಾಯಿತು ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿಯವರೇ ವಿವರಿಸಬೇಕು ಎಂದು ಹೇಳಿದರು.
ಅನ್ಯಾಯದ ಬಗ್ಗೆ ಒಪ್ಪಿಕೊಂಡಿದ್ದ ಬೊಮ್ಮಾಯಿ: ವಾಗ್ದಾಳಿ
15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ? ಎಂದಾಗ ಹೌದು ಎಂದು ಅನ್ಯಾಯವಾಗುತ್ತದೆ ಎಂದು ಮಾಜಿ ಸಿಎಂ ಬೊಮ್ಮಾಯಿಯವರು ಒಪ್ಪಿಕೊಂಡಿರುವುದು ಸದನದ ದಾಖಲೆಯಲ್ಲಿದೆ. ಪತ್ರಿಕೆಗಳಲ್ಲಿಯೂ ಪ್ರಕಟವಾಗಿದೆ. ಇದೇ ಬೊಮ್ಮಾಯಿಯವರು ಹಣಕಾಸು ಆಯೋಗದಿಂದ ಅನ್ಯಾಯವೇ ಆಗಿಲ್ಲ ಎಂದು ಕೂಗಾಡುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.
ಇನ್ನೂ ಹೆಚ್ ಡಿ.ಕುಮಾರಸ್ವಾಮಿ ಅವರಿಗೆ ಸತ್ಯ ಮಾತನಾಡಿಯೇ ಗೊತ್ತಿಲ್ಲ. ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ ಮಾಡುವಾಗ ಗುಜರಾತ್ ರಾಜ್ಯಕ್ಕೆ ಹೆಚ್ಚಿನ ಪಾಲು ನೀಡಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ್ದರು. ಈಗ ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದು ಹೇಳುತ್ತಿರುವ ಕುಮಾರಸ್ವಾಮಿ ಗುಜರಾತ್ ರಾಜ್ಯದ ಹೆಸರೇ ಎತ್ತುತ್ತಿಲ್ಲ ಎಂದು ಸಿದ್ದರಾಮಯ್ಯ ಅವರು ತಿರುಗೇಟು ಕೊಟ್ಟರು.












Click it and Unblock the Notifications