ಕೆರೆ ಒತ್ತುವರಿದಾರರಿಗೆ ಸಿಎಂ ಸಿದ್ದರಾಮಯ್ಯ ಶಾಕ್, ಅಧಿಕಾರಿಗಳಿಗೆ ಮಹತ್ವದ ಸೂಚನೆ
ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಮುಖ್ಯವಾಗಿ ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಅಂದಾಜು 10,710 ಕೆರೆಗಳ ಅಳತೆ ಬಾಕಿ ಇದ್ದು, ಎರಡು ತಿಂಗಳೊಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಬೇಕು ಎಂದು ಸೂಚಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ, ಬಿಬಿಎಂಪಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೃಹತ್ ನೀರಾವರಿ ಇಲಾಖೆ, ಅರಣ್ಯ, ಕಂದಾಯ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಾಜ್ಯದಲ್ಲಿರುವ 41,875 ಕೆರೆಗಳ ಪೈಕಿ 31,033 ಕೆರೆಗಳು ಅಳತೆ ಯಾಗಿವೆ. 11,212 ಒತ್ತುವರಿಗಳನ್ನು ಗುರುತಿಸಲಾಗಿದೆ. 5,967 ಕೆರೆಗಳ ಒತ್ತುವರಿ ತೆರವು ಗೊಳಿಸಲಾಗಿದೆ. ಸುಮಾರು 5,245 ಕೆರೆಗಳು ತೆರವುಗೊಳಿಸಲು ಬಾಕಿ ಇದ್ದು, ಆದಷ್ಟು ಬೇಗ ಇವುಗಳ ತೆರವು ಪೂರ್ಣಗೊಳಿಸಬೇಕು ಎಂದು ಹೇಳಿದ್ದಾರೆ.

ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 3,778 ಕೆರೆಗಳಿದ್ದು, 166 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಬೆಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ 202 ಕೆರೆಗಳಿದ್ದು 167 ಕೆರೆಗಳು ಅಳತೆಯಾಗಿವೆ. ಸುಮಾರು 96 ಕೆರೆಗಳ ಒತ್ತುವರಿ ತೆರವು ಬಾಕಿ ಇದೆ ಎಂದು ಮಾಹಿತಿ ನೀಡಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿಯು ಆದ್ಯತೆ ಮೇರೆಗೆ ಕೆರೆಗಳು ಮಲಿನವಾಗದಂತೆ ತಡೆಯಲು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವ ಸಂಬಂಧ ಕಾರ್ಯಯೋಜನೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಬೇಕು. ಕೆರೆಗಳಲ್ಲಿ ಮೀನುಗಾರಿಕೆ ಚಟುವಟಿಕೆಗಳಿಂದ ಆದಾಯ ಗಳಿಸಲು ಸಾಧ್ಯವಾಗುವಂತೆ ಆನ್ಲೈನ್ ಟೆಂಡರ್ ಕರೆಯಲು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ವ್ಯವಸ್ಥೆ ಮಾಡಬೇಕು. ಕೆರೆಗಳ ಸುತ್ತ ಬಫರ್ ಜೋನ್ ಅನ್ನು ನಿಗದಿ ಪಡಿಸಲು ತಾಂತ್ರಿಕ ಸಮಿತಿ ರಚಿಸಿ, ಕೆರೆ ಸಂರಕ್ಷಣೆಯ ನಿಟ್ಟಿನಲ್ಲಿ ಹೆಚ್ಚು ಶ್ರಮಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಬೈರತಿ ಸುರೇಶ್, ಕೆ.ಎನ್.ರಾಜಣ್ಣ, ಬೋಸ್‌ರಾಜು, , ಮಂಕಾಳ ವೈದ್ಯ, ರಹೀಂ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಯಶಸ್ವಿನಿ ಯೋಜನೆ ಚಿಕಿತ್ಸೆ ಇನ್ನು ದುಬಾರಿ!
ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಎನ್.ಟಿ.ಶ್ರೀನಿವಾಸ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಶಿಫಾರಸ್ಸುಗಳನ್ನು ಸಲ್ಲಿಸಿದೆ. ಸಮಿತಿಯಲ್ಲಿ ಆಸ್ಪತ್ರೆಗಳ 8 ತಜ್ಞ ವೈದ್ಯರ ಜೊತೆಗೆ ವಿವಿಧ ವೈದ್ಯಕೀಯ ವಿಭಾಗಗಳ 11 ವಿಶೇಷ ಆಹ್ವಾನಿತ ತಜ್ಞ ವೈದ್ಯರನ್ನು ಆಹ್ವಾನಿಸಿ 13 ಸಭೆಗಳನ್ನು ನಡೆಸಲಾಗಿದೆ. ಅವರ ಸಲಹೆ ಸೂಚನೆಗಳನ್ನು ಪಡೆದು ಯಶಸ್ವಿನಿ ಆರೋಗ್ಯ ಯೋಜನೆ ಚಿಕಿತ್ಸೆ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.












Click it and Unblock the Notifications