ಪ್ರಿಯಾಂಕ್ ಖರ್ಗೆ ಇಲಾಖೆಗೆ ಮೇಜರ್ ಸರ್ಜರಿ : ನೂರಾರು ನೌಕರರ ವಜಾ- ಮಹತ್ವದ ಆದೇಶ ಹೊರಡಿಸಿದ ಸಿದ್ದರಾಮಯ್ಯ
ಬೆಂಗಳೂರು, ಜನವರಿ 24: ಕಾಂಗ್ರೆಸ್ ಸರ್ಕಾರ ರಚನೆಯಾಗಿ ಎಂಟು ತಿಂಗಳು ಪೂರೈಸಿದೆ. ಇತ್ತ ಸಚಿವ ಪ್ರಿಯಾಂಕ್ ಖರ್ಗೆಯವರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಜರ್ ಸರ್ಜರಿಯನ್ನು ಮಾಡಿದ್ದಾರೆ.
ಹೌದು, ರಾಜ್ಯದಲ್ಲಿ ಪ್ರಿಯಾಂಕ್ ಖರ್ಗೆ ಅವರ ಇಲಾಖೆಯಲ್ಲಿ ಸುಖಾಸುಮ್ಮನೆ ಅಸ್ತಿತ್ವದಲ್ಲಿದ್ದ ಹುದ್ದೆಗಳನ್ನು ಸೃಜಿಸಿ, ನಿವೃತ್ತ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು.ಆದ್ದರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ನಿವೃತ್ತ ಅಧಿಕಾರಿಗಳದ್ದೇ ಕಾರುಬಾರು ಆಗಿತ್ತು. ಇದರಿಂದ ಇಲಾಖೆಯ ಹಾಲಿ ಸರ್ಕಾರಿ ನೌಕರರು ಬೇಸತ್ತು ಹೋಗಿದ್ದರು. ಜೊತೆಗೆ, ಸರ್ಕಾರಕ್ಕೆ ಭಾರಿ ನಷ್ಟವಾಗುತ್ತಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ತರಲಾಗಿತ್ತು.

ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ/ ಸಚಿವಾಲಯದಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಅಧಿಕಾರಿ/ನೌಕರರನ್ನು ಸಂವಿಧಾನದಲ್ಲಿರದ ಅನಗತ್ಯ ಹುದ್ದೆಗಳನ್ನು ಸೃಜಿಸಿ ಸಮಾಲೋಚಕರು/ ವಿಶೇಷ ಸಂಪನ್ಮೂಲ ವ್ಯಕ್ತಿಯೆಂದು ಗ್ರೂಪ್-ಎ ಹಾಗೂ ಇತರೆ ಹುದ್ದೆಗಳಿಗೆ ಗುತ್ತಿಗೆ/ ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ನಿವೃತ್ತ ನೌಕರರಿಗೆ ಹೆಚ್ಚು ವೇತನ, ವಾಹನ ಸೇರಿ ಇತರೆ ಸೌಲಭ್ಯ ನೀಡುತ್ತಿದ್ದು, ಸರ್ಕಾರಕ್ಕೆ ಭಾರಿ ಪ್ರಮಾಣದ ಆರ್ಥಿಕ ನಷ್ಟ ಉಂಟಾಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶಗೊಂಡಿದ್ದಾರೆ.
ನಿವೃತ್ತ ನೌಕರರಿಂದ ಸರ್ಕಾರಕ್ಕೆ ಆರ್ಥಿಕ ನಷ್ಟ ಜೊತೆಗೆ ಕಾರ್ಯಕ್ಷಮತೆ ಗುಣಮಟ್ಟ ಹಾಗೂ ಉತ್ತರದಾಯಿತ್ವದ ಕೊರತೆಯೂ ಎದ್ದು ಕಾಣುತ್ತಿದೆ. ಆದ್ದರಿಂದ ಪ್ರಿಯಾಂಕ್ ಖರ್ಗೆ ಅವರ ಇಲಾಖೆಯಲ್ಲಿನ ಅನಗತ್ಯ ಹುದ್ದೆಗಳನ್ನು ತೆರವುಗೊಳಿಸಿ ಹಾಲಿ ಸರ್ಕಾರಿ ನೌಕರರನ್ನು ನಿಯೋಜನೆ ಮಾಡಬೇಕು. ಜೊತೆಗೆ, ಹಾಲಿ ಗುತ್ತಿಗೆ/ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ಅಧಿಕಾರಿ/ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆ ಮಾಡಬೇಕು ಎಂದು ಆದೇಶ ಹೊರಡಿಸಿದ್ದಾರೆ.
ಆದ್ದರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ/ ಸಚಿವಾಲಯ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಲಿ ಗುತ್ತಿಗೆ/ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ಅಧಿಕಾರಿ/ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಲಾಗುತ್ತದೆ. ಜೊತೆಗೆ, ಆಯಾ ಸ್ಥಾನಗಳಿಗೆ ಹಾಲಿ ನೌಕರರನ್ನು ನಿಯೋಜನೆ ಮಾಡಿ ಅಗತ್ಯ ಕ್ರಮಗಳನ್ನು ಕೈಗೊಂಡು, ಕ್ರಮದ ವರದಿಯನ್ನು ಕೂಡಲೇ ಮುಖ್ಯ ಕಾರ್ಯದರ್ಶಿ ಕಚೇರಿಗೆ ಕಳುಹಿಸುವಂತೆ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಅವರು ಆದೇಶ ಹೊರಡಿಸಿದ್ದಾರೆ.

ಸಿಎಂ ಆದೇಶ ಪತ್ರದಲ್ಲಿ ಏನಿದೆ?
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ರಾಜ್ಯ ಸರ್ಕಾರದ ಕೆಲವು ಇಲಾಖೆಗಳಲ್ಲಿ ಸಚಿವಾಲಯದಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಅಧಿಕಾರಿ/ ನೌಕರರನ್ನು ಅನಗತ್ಯವಾಗಿ ಹುದ್ದೆಗಳನ್ನು ಸೃಜಿಸಿ ಸಮಾಲೋಚಕರು/ ವಿಶೇಷ ಸಂಪನ್ಮೂಲ ವ್ಯಕ್ತಿಗಳನ್ನಾಗಿ ಹಾಗೂ ಕೆಲವು ಗ್ರೂಪ್-ಎ ವೃಂದದ ಹುದ್ದೆಗಳಿಗೂ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿರುತ್ತದೆ. ಸದರಿ ನಿವೃತ್ತ ನೌಕರರಿಗೆ ವೇತನ, ವಾಹನ ಸೌಲಭ್ಯ ಇನ್ನಿತರೆ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಲ್ಲದೆ, ಕಾರ್ಯಕ್ಷಮತೆಯ ಗುಣಮಟ್ಟ ಹಾಗೂ ಉತ್ತರದಾಯಿತ್ಯದ ಕೊರತೆಯೂ ಎದ್ದು ಕಾಣುತ್ತಿದೆ.
ಆದ್ದರಿಂದ, ಸದರಿ ಹುದ್ದೆಗಳಿಗೆ ಹಾಲಿ ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿ/ ನೌಕರರುಗಳನ್ನು ನಿಯೋಜನೆ ಮಾಡಲು ಹಾಗೂ ವಿವಿಧ ಇಲಾಖೆಗಳಲ್ಲಿ ಹಾಲಿ ಗುತ್ತಿಗೆ/ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದೆ.












Click it and Unblock the Notifications