2028ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ: ಸಾಧನಾ ಸಮಾವೇಶದಲ್ಲಿ ಭವಿಷ್ಯ ನುಡಿದ ಸಿಎಂ ಸಿದ್ದರಾಮಯ್ಯ
ತುಮಕೂರು: "ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ನಾವು ನುಡಿದಂತೆ ನಡೆದಿದ್ದೇವೆ. ಹೀಗಾಗಿ 2028ರ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ರಾಜ್ಯಾದ್ಯಂತ ಜನ ಬೆಂಬಲದೊಂದಿಗೆ ನಾವೇ ಮತ್ತೆ ಅಧಿಕಾರಕ್ಕೆ ಬರುವುದು ಶತಸಿದ್ಧ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಲ್ಪತರು ನಾಡು ತುಮಕೂರಿನಲ್ಲಿ ಆಯೋಜಿಸಲಾಗಿದ್ದ "ಮೂರು ವರ್ಷಗಳ ಸಾಧನಾ ಸಮರ್ಪಣಾ" ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಲಾದಾಯದಲ್ಲಿ ಕರ್ನಾಟಕ ನಂಬರ್ ಒನ್
ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯಂತೆ ಅಧಿಕಾರಕ್ಕೆ ಬಂದ ಒಂದೇ ವರ್ಷದೊಳಗೆ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುನ್ನಡೆಸಿದ್ದೇವೆ ಎಂದು ಸಿಎಂ ತಿಳಿಸಿದರು. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕತೆ ದಿವಾಳಿಯಾಗುತ್ತದೆ ಎಂದವರ ಮಾತು ಸುಳ್ಳಾಗಿದೆ. ಇಂದು ದೇಶದ ಜಿಎಸ್‌ಟಿ (GST) ಸಂಗ್ರಹಕ್ಕೆ ಕರ್ನಾಟಕದ ಕೊಡುಗೆ ಅಪಾರವಾಗಿದ್ದು, ತಲಾ ಆದಾಯದಲ್ಲಿ ಕನ್ನಡಿಗರು ಇಡೀ ದೇಶದಲ್ಲೇ ನಂಬರ್ ಒನ್ ಸ್ಥಾನ ತಲುಪಿದ್ದಾರೆ. ಕುವೆಂಪು ಅವರ 'ಸರ್ವ ಜನಾಂಗದ ಶಾಂತಿಯ ತೋಟ' ಎಂಬ ಆಶಯದಂತೆ ಸಂವಿಧಾನಬದ್ಧ ಅಭಿವೃದ್ಧಿ ಮಾರ್ಗದಲ್ಲಿ ನಾವು ನಾಡನ್ನು ಮುನ್ನಡೆಸುತ್ತಿದ್ದೇವೆ ಎಂದರು.

ಅಧಿಕಾರದ 1095 ದಿನಗಳ ಸಾರ್ಥಕ ಸಂದರ್ಭದಲ್ಲಿ ತುಮಕೂರು ಜಿಲ್ಲಾ ವ್ಯಾಪ್ತಿಯ ಒಟ್ಟು ₹682 ಕೋಟಿ ಮೊತ್ತದ ಬೃಹತ್ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇದಿಕೆಯಲ್ಲಿ ಕಾಲಾನುಕಾಲದಿಂದ ಸೂರಿಲ್ಲದೆ ಅತಂತ್ರರಾಗಿದ್ದ ಸುಮಾರು 1.52 ಲಕ್ಷ ಫಲಾನುಭವಿಗಳಿಗೆ ಅಧಿಕೃತ ಹಕ್ಕುಪತ್ರಗಳನ್ನು ಹಾಗೂ ವಿವಿಧ ಇಲಾಖೆಗಳ ನೇಮಕಾತಿ ಪತ್ರಗಳನ್ನು ವಿತರಿಸಿದರು.
ಕಳೆದ 36 ತಿಂಗಳುಗಳಲ್ಲಿ ₹1,707.37 ಕೋಟಿ ವೆಚ್ಚದಲ್ಲಿ 28 ಪ್ರಮುಖ ಕಾಮಗಾರಿಗಳು ಪೂರ್ಣಗೊಂಡಿದ್ದು, 8519.33 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಕಲ್ಪಿಸಲಾಗಿದೆ. ಪಶ್ಚಿಮ ವಾಹಿನಿ ಯೋಜನೆಯಡಿ ₹142.39 ಕೋಟಿ ವೆಚ್ಚದಲ್ಲಿ 22 ಹೊಸ ಕೆರೆಗಳನ್ನು ನಿರ್ಮಿಸಲಾಗಿದೆ ಹಾಗೂ ₹1035.57 ಕೋಟಿ ವೆಚ್ಚದಲ್ಲಿ 568 ಹಳೇ ಕೆರೆಗಳನ್ನು ಆಧುನೀಕರಿಸಲಾಗಿದೆ. ₹3070.93 ಕೋಟಿ ವೆಚ್ಚದಲ್ಲಿ ಒಟ್ಟು 391 ಏತ ನೀರಾವರಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದ್ದು, ₹1976.13 ಕೋಟಿ ವೆಚ್ಚದಲ್ಲಿ 1021 ಅಣೆಕಟ್ಟು ಪಿಕಪ್ ಹಾಗೂ ಬಾಂದಾರಗಳನ್ನು ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದರು.
ಗ್ಯಾರಂಟಿಗಳ ಗೆಲುವು ಕನ್ನಡಿಗರಿಗೆ ಅರ್ಪಣೆ
ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಗೆಲುವು ಪ್ರತಿ ಕನ್ನಡಿಗನಿಗೂ ಸಲ್ಲುತ್ತದೆ. ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸುತ್ತಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ. ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. ಸಶಕ್ತ, ಸಮೃದ್ಧ, ಸ್ವಾಭಿಮಾನಿ ಕರ್ನಾಟಕದ ಮರುನಿರ್ಮಾಣ ಕಾರ್ಯದಲ್ಲಿ ಬಹಳಷ್ಟು ದೂರ ಕ್ರಮಿಸಿದ್ದೇವೆ, ನಮ್ಮ ಈ ಪ್ರಯತ್ನ ಮುಂದೆ ಇನ್ನಷ್ಟು ಶೀಘ್ರ ಹಾಗೂ ಪರಿಣಾಮಕಾರಿಯಾಗಿರಲಿದೆ ಎಂದರು.
ಚುನಾವಣಾ ಪೂರ್ವದಲ್ಲಿ ನಾವು ರಾಜ್ಯದ ಜನತೆಗೆ ನೀಡಿದ್ದ ವಚನದಂತೆ ಅಧಿಕಾರಕ್ಕೆ ಬಂದ ಒಂದೇ ವರ್ಷದೊಳಗೆ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ನುಡಿದಂತೆ ನಡೆದಿದ್ದೇವೆ. ಗ್ಯಾರಂಟಿ ಯೋಜನೆಗಳು ನಾಡಿನ ಆರ್ಥಿಕತೆಗೆ ಅಪಾಯವಾಗಲಿವೆ ಎಂಬ ಹಲವರ ಮಾತುಗಳು ಹುಸಿಯಾಗಿ, ಕರ್ನಾಟಕ ಇಂದು ದೇಶದ ತಲಾದಾಯದಲ್ಲಿ ನಂಬರ್ ಒನ್ ಸ್ಥಾನಕ್ಕೆ ತಲುಪಿದೆ. ಕಳೆದ ಮೂರು ವರ್ಷಗಳಲ್ಲಿ ನಾವು ಗ್ಯಾರಂಟಿಗಳ ಮೂಲಕ ನವ ಕರ್ನಾಟಕ ಕಟ್ಟಿದ್ದೇವೆ ಎಂದು ಬೆನ್ನುತಟ್ಟಿಕೊಂಡರು.













Click it and Unblock the Notifications