Hallikar: ಹಳ್ಳಿಕಾರ್ ಸಮುದಾಯಕ್ಕೆ ಸಿಎಂ ಸಿದ್ದರಾಮಯ್ಯ ಗುಡ್‌ನ್ಯೂಸ್
ಸಿಎಂ ಸಿದ್ದರಾಮಯ್ಯ ಅವರು ಹಳ್ಳಿಕಾರ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದಾರೆ. ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಖಂಡಿತಾ ಸಹಾಯ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎಗೆ ಸೇರಿಸಿದ್ದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ರಾಜ್ಯ ಹಳ್ಳಿಕಾರರ ಸಂಘ ಆಯೋಜಿಸಿದ್ದ ಹಳ್ಳಿಕಾರ ಸಮುದಾಯದ ಸಮಾವೇಶ ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಸಿದ್ದರಾಮಯ್ಯ ಮಾತನಾಡಿದರು. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ-1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಮೊದಲಿನಿಂದಲೂ ಇದೆ. ಈ ಬಗ್ಗೆ ವರದಿ ತರಿಸಿಕೊಂಡು ನಂತರ ಸೂಕ್ತ ತೀರ್ಮಾನ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3 ಎ ಯಿಂದ ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಇದೆ. ಸಮಾಜದಲ್ಲಿ ಯಾವ ಯಾವ ಜಾತಿಯ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯಲು ಜಾತಿ ಸಮೀಕ್ಷಾ ವರದಿಗಳು ಮುಖ್ಯ. ಆದರೆ ರಾಜ್ಯದಲ್ಲಿ 2011ರ ಜನಗಣತಿಯೇ ಕೊನೆಯ ಗಣತಿಯಾಗಿದೆ. ಈಗ ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ ಎಂದರು.
ಕೇಂದ್ರದ ನರೇಂದ್ರ ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರಷ್ಟು ಮೀಸಲಾತಿ ನೀಡಿದೆ. ಈ ವ್ಯಾಪ್ತಿಯೊಳಗೆ ಹಳ್ಳಿಕಾರ ಸಮುದಾಯ ಬರುತ್ತದೆಯಾ ಎನ್ನುವುದು ಪರಿಶೀಲಿಸಬೇಕಿದೆ. ಈ ಸಮುದಾಯವನ್ನು ಪ್ರವರ್ಗ 3ಎ ಗೆ ಸೇರಿಸಿರುವುದು ಸರಿಯಲ್ಲ ಎಂದು ಹೇಳಿದರು.
ಆದ್ದರಿಂದ ಶಾಶ್ವತ ಹಿಂದುಳಿದ ಆಯೋಗಕ್ಕೆ ನಿಮ್ಮ ಬೇಡಿಕೆ ಕಳುಹಿಸಿ, ಅಧ್ಯಯನ ಮಾಡಿಸಿ ಬಳಿಕ ವರದಿ ಪಡೆಯಲಾಗುವುದು. ನಂತರ ಸಮುದಾಯಕ್ಕೆ ನ್ಯಾಯಯುತವಾಗಿ ಏನು ಸಿಗಬೇಕು ಎನ್ನುವುದನ್ನು ಪರಿಶೀಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಹಳ್ಳಿಕಾರರ ಸಂಘದ ಉಪಾಧ್ಯಕ್ಷರಾದ ಕೆ.ಎಂ.ನಾಗರಾಜು ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಸಚಿವರುಗಳಾದ ರಾಮಲಿಂಗಾರೆಡ್ಡಿ, ಡಿ.ಸುಧಾಕರ್, ಶಾಸಕರಾದ ಎಸ್.ಟಿ.ಸೋಮಶೇಖರ್, ಪ್ರಿಯಕೃಷ್ಣ, ಹಳ್ಳಿಕಾರ ಸಮುದಾಯದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಭಾಗಿಯಾಗಿದ್ದರು.
ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಇದನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. 2013-18ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಸಾಕಷ್ಟು ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ. ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗಿ ಕಾಂತರಾಜು ತಿಳಿಸಿದ್ದಾರೆ. ನಾನು ಇಲ್ಲಿಯವರೆಗೂ ವರದಿಯನ್ನು ಪರಿಶೀಲಿಸಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು.
ಈ ಹಿಂದೆ ನಾನು ಸಿಎಂ ಆಗಿದ್ದಾಗ ಕಾಂತರಾಜು ವರದಿ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ನನ್ನ ಅವಧಿಯಲ್ಲಿ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಮತ್ತು ಜಾರಿಗೊಳಿಸಲು ಸಾಧ್ಯವಾಗಲಿಲ್ಲ. ಬಳಿಕ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕಾಂತುರಾಜು ಅವರು ವರದಿಯನ್ನು ಸಲ್ಲಿಸಲು ಸಜ್ಜಾಗಿದ್ದರು. ಆದರೆ ಕುಮಾರಸ್ವಾಮಿಯವರು ವರದಿ ಸ್ವೀಕರಿಸಲು ಒಪ್ಪಿರಲಿಲ್ಲ. ನಂತರ ಬಿಜೆಪಿ ಸರ್ಕಾರ ಬಂದರೂ, ವರದಿಯನ್ನು ಸ್ವೀಕರಿಸಲಿಲ್ಲ ಎಂದು ಸಿದ್ದರಾಮಯ್ಯ ಕಾರಣ ನೀಡಿದ್ದರು.












Click it and Unblock the Notifications