ರಾಹುಲ್ ಗಾಂಧಿ ಜೊತೆ ನಾನಿದ್ದೇನೆ, ಕೋಟ್ಯಂತರ ಭಾರತೀಯರಿದ್ದಾರೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜನವರಿ 23: ಅಸ್ಸಾಂನಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆ ವೇಳೆ ಬಿಜೆಪಿ ಕಾರ್ಯಕರ್ತರು ಬಾವುಟಗಳನ್ನು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ರಾಹುಲ್ ಗಾಂಧಿ ಅವರ ಜೊತೆ ನಾನಿದ್ದೇನೆ, ನನ್ನಂತಹ ಕೋಟ್ಯಂತರ ಭಾರತೀಯರಿದ್ದಾರೆ ಎಂದಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ ಎಂದಿದ್ದಾರೆ.

ರಾಹುಲ್ ಗಾಂಧಿ ಅವರ ಭಾರತ ಐಕ್ಯತಾ ನ್ಯಾಯ ಯಾತ್ರೆ ವೇಳೆ ಗೂಂಡಾಗಳನ್ನು ಬಿಟ್ಟು ಕಲ್ಲು ಹೊಡೆಸಿ, ಬೆದರಿಕೆ ಒಡ್ಡುವ ಮೂಲಕ ಭಾರತೀಯರ ನ್ಯಾಯದ ಕೂಗನ್ನು ಅಡಗಿಸಬಹುದು ಎಂದು ಭಾವಿಸಿದ್ದರೆ, ಅದು ನಿಮ್ಮ ಭ್ರಮೆ ಎಂದು ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
ರಾಹುಲ್ ಗಾಂಧಿ ಅವರ ಜೊತೆ ನಾನಿದ್ದೇನೆ, ನನ್ನಂತಹ ಕೋಟ್ಯಂತರ ಭಾರತೀಯರಿದ್ದಾರೆ. ಅನ್ಯಾಯದ ಕಾಡ್ಗಿಚ್ಚನ್ನು ಆರಿಸಿ, ನ್ಯಾಯದ ಹಣತೆ ಬೆಳಗುವವರೆಗೆ ನಾವು ವಿರಮಿಸುವುದಿಲ್ಲ ಎಂದಿದ್ದಾರೆ.
ದ್ವೇಷ, ಹಿಂಸೆ, ಅಧರ್ಮ, ಅಸತ್ಯಗಳನ್ನು ತಿರಸ್ಕರಿಸಿರುವ, ಸೌಹಾರ್ದ ಭಾರತ ಬಯಸುವ ಕೋಟ್ಯಂತರ ಮನಸುಗಳು ನಮ್ಮ ಜೊತೆಗಿವೆ. ಬುದ್ಧ, ಬಸವ, ಅಂಬೇಡ್ಕರರು ನಡೆದಾಡಿದ ಈ ನೆಲದಲ್ಲಿ ಪ್ರೀತಿ, ಬಾಂಧವ್ಯಕ್ಕೆ ಸಾವಿಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಭಾರತ ಐಕ್ಯತಾ ನ್ಯಾಯ ಯಾತ್ರೆಗೆ ಜನರಿಂದ ದೊರೆತ ಅಭೂತಪೂರ್ವ ಸ್ಪಂದನೆ ಭಾರತದ ಭವಿಷ್ಯದ ಸೂಚಕದಂತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ಗೂಂಡಾಗಳು ಕೈಯಲ್ಲಿ ಮಂತ್ರಾಕ್ಷತೆ ಹಿಡಿದಿದ್ದರೆ, ಬಗಲಲ್ಲಿ ದೊಣ್ಣೆ ಹಿಡಿದಿದ್ದಾರೆ-ಡಿ.ಕೆ ಶಿವಕುಮಾರ್
ಇನ್ನು ಈ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೂಡ ಪ್ರತಿಕ್ರಿಯಿಸಿದ್ದು, ಬಿಜೆಪಿ ಗೂಂಡಾಗಳು ಕೈಯಲ್ಲಿ ಮಂತ್ರಾಕ್ಷತೆ ಹಿಡಿದಿದ್ದರೆ, ಬಗಲಲ್ಲಿ ದೊಣ್ಣೆ ಹಿಡಿದಿದ್ದಾರೆ. ಈ ಗೂಂಡಾಗಳ ಗೊಡ್ಡು ಬೆದರಿಕೆಗೆ ಯಾವುದೇ ಕಾಂಗ್ರೆಸಿಗರು ಹೆದರುವುದಿಲ್ಲ. ಅಸ್ಸಾಂನಲ್ಲಿ ಕಳೆದೆರಡು ದಿನಗಳಿಂದ ಈ ಯಾತ್ರೆಯನ್ನು ತಡೆಯಲಾಗಿದೆ. ಇಂದು ಗುವಾಹಟಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಆ ಮೂಲಕ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬದುಕಿದೆಯೋ ಸತ್ತಿದೆಯೋ ಎಂಬ ಪ್ರಶ್ನೆ ಉದ್ಭವಿಸಿದೆ. ಅಸ್ಸಾಂ ಸರ್ಕಾರದ ಈ ನಡೆಯನ್ನು ನಾವೆಲ್ಲರೂ ಖಂಡಿಸುತ್ತೇವೆ.

ರಾಹುಲ್ ಗಾಂಧಿ ಅವರು ದೇಶದ ಮನಸ್ಸುಗಳನ್ನು ಒಗ್ಗೂಡಿಸಲು, ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿ, ಅವರಿಗೆ ನ್ಯಾಯ ಒದಗಿಸಲು ಮಣಿಪುರದಿಂದ ಮುಂಬೈವರೆಗೂ ಎರಡನೇ ಹಂತದ ಭಾರತ ಜೋಡೋ ನ್ಯಾಯ ಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಯಾತ್ರೆಯಿಂದ ಬಿಜೆಪಿ ನಾಯಕರಲ್ಲಿ ನಡುಕ ಹುಟ್ಟಿದೆ. ಹೀಗಾಗಿ ಅವರ ಯಾತ್ರೆಯನ್ನು ತಡೆಯುತ್ತಿದ್ದಾರೆ ಎಂದರು.












Click it and Unblock the Notifications