ನಾಗಮಂಗಲ ಗಲಭೆ; ಜನತೆಗೆ ವಿಶೇಷ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ
ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಡೆದ ಕೋಮು ಗಲಭೆ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು ಗಲಭೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದು, ಸಾರ್ವಜನಿಕರು ಯಾವುದೇ ಪ್ರಚೋದನೆಗೆ ಒಳಗಾಗದೇ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ "ನಾಗಮಂಗಲದಲ್ಲಿ ನಡೆದಿರುವ ಕಲ್ಲುತೂರಾಟ ಘಟನೆ ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತರುವ ದುಷ್ಕೃತ್ಯ ಎನ್ನುವುದರಲ್ಲಿ ಸಂಶಯವೇ ಇಲ್ಲ. ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಘಟನೆಗೆ ಸಂಬಂಧಪಟ್ಟಂತೆ 50ಕ್ಕೂ ಹೆಚ್ಚಿನ ಜನರನ್ನು ಬಂಧಿಸಲಾಗಿದ್ದು, ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವುದು ನಮ್ಮ ಮೊದಲ ಆದ್ಯತೆ" ಎಂದು ಹೇಳಿದ್ದಾರೆ.

ಕಾಂಗ್ರಸ್ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾಗುತ್ತಿದ್ದು ರಾಜ್ಯದಲ್ಲಿ ಯಾವುದೇ ಗಲಾಟೆ, ಹಿಂಸಾಚಾರಗಳು ನಡೆಯಡೆ ಸರ್ವಜನಾಂಗದ ಶಾಂತಿಯ ತೋಟದಂತಿತ್ತು. ನಾಡನ್ನು ಧರ್ಮದ ಹೆಸರಿನಲ್ಲಿ ಒಡೆಯಲು ಯತ್ನಿಸುತ್ತಿರುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ…
— Siddaramaiah (@siddaramaiah) September 12, 2024
ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ಸರ್ಕಾರದ ಜೊತೆ ಸಹಕರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
52 ಜನರ ಬಂಧನ
ಗಲಭೆಗೆ ಸಂಬಂಧಪಟ್ಟಂತೆ ಈಗಾಗಲೇ ತನಿಖೆ ಮಾಡುತ್ತಿರುವ ಪೊಲೀಸರು ಇದುವರೆಗೂ 52 ಮಂದಿಯನ್ನು ಬಂಧಿಸಿದ್ದು, ಇನ್ನಷ್ಟು ಕಿಡಿಗೇಡಿಗಳನ್ನು ಬಂಧಿಸಲಿದ್ದಾರೆ. ವಿಪಕ್ಷಗಳು ಈಗಾಗಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು ಅಲ್ಪಸಂಖ್ಯಾತರನ್ನು ಅತಿಯಾಗಿ ಓಲೈಸಿದ್ದೇ ಘಟನೆಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿವೆ.
ಬಿಜೆಪಿ ನಿಯೋಗ ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದು, ಘಟನೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಲೆಹಾಕಲಿದೆ. ಬಳಿಕ ಬಿಜೆಪಿ ನಾಯಕರು ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಮಾಡುವ ಸಾಧ್ಯತೆ ಇದೆ.
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹಸಚಿವ ಜಿ. ಪರಮೇಶ್ವರ, ಇದೊಂದು ಪೂರ್ವ ನಿಯೋಜಿತ ಕೃತ್ಯವಲ್ಲಿ, ಆಕಸ್ಮಿಕ ಘಟನೆ ಎಂದು ಹೇಳಿದ್ದಾರೆ. ಇದು ವಿಪಕ್ಷಗಳನ್ನು ಮತ್ತಷ್ಟು ಕೆರಳಿಸಿದ್ದು, ಅಲ್ಪ ಸಂಖ್ಯಾತರನ್ನು ಇಷ್ಟೊಂದು ಓಲೈಸುವ ಅಗತ್ಯವೇನಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ಮಂಡ್ಯದ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರ ಪ್ರಕಾರ, ಗಣಪತಿ ಮೆರವಣಿಗೆ ನಿಲ್ಲಿಸಿ ಐದರಿಂದ ಏಳು ನಿಮಿಷಗಳ ಕಾಲ ದರ್ಗಾದ ಮುಂದೆ ನೃತ್ಯ ಮಾಡಲು ಪ್ರಾರಂಭಿಸಿದಾಗ ಈ ಘಟನೆ ನಡೆದಿದೆ. ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿಯಾಗಿದ್ದು, ಪೊಲೀಸರು ಎರಡು ಗುಂಪುಗಳ ನಡುವಿನ ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ ಎಂದು ಹೇಳಿದ್ದಾರೆ.












Click it and Unblock the Notifications