CM Siddaramaiah: ಬಟ್ಟೆ ಬಿಚ್ಚಿ ದೇವಸ್ಥಾನ ಪ್ರವೇಶಿಸುವುದು ದೇವರಿಗೆ ಮಾಡುವ ಅವಮಾನ; ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 06: ನನಗೆ ಒಮ್ಮೆ ದೇವಸ್ಥಾನಕ್ಕೆ ಬರುವಾಗ ಬಟ್ಟೆ ಬಿಚ್ಚಿ ಎಂದು ಹೇಳಿದ್ದರು, ನಾನು ದೇವಸ್ಥಾನ ಪ್ರವೇಶಿಸುವುದಿಲ್ಲ. ಬಟ್ಟೆ ಬಿಚ್ಚಿ ದೇವಸ್ಥಾನ ಪ್ರವೇಶಿಸುವುದು ದೇವರಿಗೆ ಮಾಡುವ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು, ಜಾತಿ ವ್ಯವಸ್ಥೆ ಅಳಿಸಲು ಬಸವಣ್ಣನವರು ದಲಿತ ಮತ್ತು ಬ್ರಾಹ್ಮಣರ ನಡುವೆ ಅಂತರ್ಜಾತಿ ವಿವಾಹ ಮಾಡಿಸಿದರು ಎಂದು ಹೇಳಿದರು.

ಜಾತಿ, ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಶಕ್ತಿಗಳು ನಾರಾಯಣಗುರುಗಳ ಅವಧಿಯಲ್ಲೂ ಇದ್ದವು. ಈಗಲೂ ಇವೆ. ನಾರಾಯಣಗುರುಗಳು ಸಂಘರ್ಷಕ್ಕೆ ಕಾರಣ ಆಗದಂತೆ ಸಮಾಜದಲ್ಲಿ ವ್ಯಾಪಕ ಬದಲಾವಣೆ ತಂದರು.
ದೇವರ ದೃಷ್ಟಿಯಲ್ಲಿ ಎಲ್ಲರೂ ಒಂದೆ. ಬಟ್ಟೆ ಬಿಚ್ಚಿ ದೇವಾಲಯಕ್ಕೆ ಬನ್ನಿ ಎನ್ನುವುದು ದೇವರ ದೃಷ್ಟಿಯಲ್ಲಿ ಅಮಾನವೀಯ. ದೇವರನ್ನು ಮುಂದಿಟ್ಟುಕೊಂಡು ತಾರತಮ್ಯ ಆಚರಿಸುವುದು ದೇವರಿಗೆ ಮಾಡುವ ಅವಮಾನ. ದೇವರನ್ನೇ ಮುಂದಿಟ್ಟುಕೊಂಡು ಜಾತಿ, ಧರ್ಮ ಸಂಘರ್ಷ ಸೃಷ್ಟಿಸುವ ವಿಕೃತಿಯನ್ನು ಈಗಲೂ ಆಚರಿಸಲಾಗುತ್ತಿದೆ. ಈ ತಾರತಮ್ಯಕ್ಕೆ ನಾರಾಯಣಗುರುಗಳು ಭಿನ್ನವಾದ ಆಚರಣೆ ಕಂಡುಕೊಂಡರು.
ನಿಮಗೆ ಪ್ರವೇಶವಿಲ್ಲದ ದೇವಸ್ಥಾನಗಳಿಗೆ ಹೋಗಲೇಬೇಡಿ. ನೀವೇ ನಿಮ್ಮ ದೇವರುಗಳಿಗೆ ದೇವಸ್ಥಾನ ಕಟ್ಟಿ ಪೂಜೆ ಮಾಡಿ ಎಂದರು. ಈ ಸಮಾಜ ಸುಧಾರಣೆಯ ಕ್ರಾಂತಿಕಾರಕ ಧಾರ್ಮಿಕ ಚಳವಳಿ ಪರಿಣಾಮವಾಗಿ ಕೇರಳದಲ್ಲಿ 60 ದೇವಸ್ಥಾನಗಳನ್ನು ನಿರ್ಮಿಸಿದರು. ಉಳಿದ ದೇವಸ್ಥಾನಗಳಿಗೆ ಪ್ರವೇಶ ಇಲ್ಲದ ಶೂದ್ರ ಮತ್ತು ದಲಿತ ಸಮುದಾಯವನ್ನು ತಾವೇ ಕಟ್ಟಿಸಿದ ದೇವಸ್ಥಾನಗಳಿಗೆ ಪ್ರವೇಶಿಸುವಂತೆ ಕ್ರಾಂತಿ ಮಾಡಿದರು ಎಂದು ಹಲವು ನಿದರ್ಶನಗಳನ್ನು ಉದಾಹರಿಸಿದರು. ವಿದ್ಯೆ ಕಲಿತು ಸ್ವತಂತ್ರರಾಗಿ, ಸಂಘಟಿತರಾಗಿ ಬಲಯುತರಾಗಿ ಎನ್ನುವುದು ನಾರಾಯಣಗುರುಗಳು ಶೂದ್ರ-ದಲಿತ ಸಮುದಾಯಕ್ಕೆ ನೀಡಿದ ಅತ್ಯುನ್ನತ ಧ್ಯೇಯ ಎಂದರು.
ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಮತ್ತು ನಾರಾಯಣಗುರು ಭವನ ನಿರ್ಮಿಸಬೇಕು ಎನ್ನುವ ಸಮುದಾಯದ ಬೇಡಿಕೆಗೆ ಒಪ್ಪಿದ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಎರಡು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು. ನಾರಾಯಣಗುರುಗಳು ಒಂದು ಜಾತಿ, ಧರ್ಮಕ್ಕೆ ಸೇರಿದವರಲ್ಲ. ಅವರು ಜಾತಿ-ಧರ್ಮದ ತಾರತಮ್ಯಗಳನ್ನು ಮೀರಿದ ವಿಶ್ವಮಾನವ. ಹೀಗಾಗಿ ವಿಶ್ವ ಮಾನವ ನಾರಾಯಣಗುರುಗಳ ಜಯಂತಿಯನ್ನು ಸರ್ಕಾರವೇ ಆಚರಿಸಬೇಕು ಎಂದು ಆದೇಶ ಮಾಡಿದೆ.












Click it and Unblock the Notifications