ಬಿಜೆಪಿ ನಾಯಕರು ಕೂಲಿ ಮಾಡಿ ಹಣ ತಂದು ಆಪರೇಷನ್ ಕಮಲ ಮಾಡಿದ್ರಾ?
ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೇಳಲು ಹೋಗಿದ್ದ ಸಿಎಂ ಸಿದ್ದರಾಮಯ್ಯ, ದೆಹಲಿಯಿಂದ ಬೆಂಗಳೂರಿಗೆ ಬರುವಾಗ ಐಷಾರಾಮಿ ಚಾರ್ಟೆಡ್ ವಿಮಾನದಲ್ಲಿ ಬಂದಿದ್ದರು. ಸಚಿವ ಜಮೀರ್ ಅಹಮದ್ ಸಿದ್ದರಾಮಯ್ಯ ಜೊತೆಗೆ ವಿಮಾನ ಪ್ರಯಾಣದ ವಿಡಿಯೋವನ್ನು ಹಂಚಿಕೊಂಡಿದ್ದರು.
ಜಮೀರ್ ಅಹಮದ್ ಟ್ವಿಟರ್ ನಲ್ಲಿ ವಿಡಿಯೋ ಹಂಚಿಕೊಂಡ ನಂತರ ರಾಜ್ಯ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಅವರನ್ನು ಸ'ಮಜಾವಾದಿ' ಎಂದು ಕರೆದಿದ್ದರು. ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಸಿದ್ದರಾಮಯ್ಯ ಅವರು ಐಷಾರಾಮಿ ವಿಮಾನದಲ್ಲಿ ಮಜಾ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದರು. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಕೂಡ ಟ್ವೀಟ್ ಮಾಡಿ ಸಿದ್ದರಾಮಯ್ಯರನ್ನು ಟೀಕಿಸಿದ್ದರು.

ಇನ್ನು ಇದೇ ವಿಚಾರವನ್ನು ಹಲವು ಮಾಧ್ಯಮ ಪ್ರತಿನಿಧಿಗಳು ಸಿಎಂ ಸಿದ್ದರಾಮಯ್ಯ ಬಳಿ ಪ್ರಶ್ನೆ ಮಾಡಿದಾಗ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಯಾವುದರಲ್ಲಿ ಓಡಾಡುತ್ತಾರೆ ಎಂದು ಮರುಪ್ರಶ್ನೆ ಮಾಡಿದ್ದಾರೆ. ಅಲ್ಲದೆ ಹೋಗಿ ಇದೇ ಪ್ರಶ್ನೆಯನ್ನು ಪ್ರಧಾನಿ ಮೋದಿಯನ್ನು ಕೇಳಿ ಎಂದು ಪ್ರಶ್ನೆ ಕೇಳಿದವರಿಗೆ ಹೇಳಿದ್ದಾರೆ.
ಬಿಜೆಪಿ ನಾಯಕರಿಗೆ ನೈತಿಕತೆ ಇಲ್ಲ
ಬಳಿಕ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ನಾಯಕರ ಟೀಕೆಗಳಿಗೆ ಉತ್ತರ ನೀಡಿದ್ದಾರೆ. "ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿದ, ಐಷಾರಾಮಿ ಹೋಟೆಲ್‌ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು ಮಸ್ತಿಗಾಗಿ ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ." ಎಂದು ಬಿಜೆಪಿ ನಾಯಕರ ಇತಿಹಾಸವನ್ನು ನೆನಪಿಸಿದ್ದಾರೆ.
ರಾಜ್ಯದ ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.
2014ರ ಜೂನ್ 15ರಿಂದ 2023ರ ಸೆಪ್ಟೆಂಬರ್‍ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 74 ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಪ್ರಧಾನಿಗಳ ಅಧಿಕೃತ ಜಾಲ ತಾಣದ ಅಂಕಿ ಅಂಶಗಳ ಪ್ರಕಾರ ಪ್ರತಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ ರೂಪಾಯಿ ಆಗಿದೆ ಎಂದು ಅವರು ಲೆಕ್ಕ ನೀಡಿದ್ದಾರೆ.
ದೇಶ ಹಸಿವಿನ ಸೂಚ್ಯಂಕದಲ್ಲಿ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ? ಎಂದು ಬಿಜೆಪಿ ನಾಯಕರನ್ನು ಪ್ರಶ್ನೆ ಮಾಡಿದ್ದಾರೆ.












Click it and Unblock the Notifications