ಸಿಎಂ ಸಿದ್ದರಾಮಯ್ಯ ಸಹಿ ಮಾಡುವುದು ಯಾವ ಭಾಷೆಯಲ್ಲಿ ಗೊತ್ತಾ?
ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ. ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ ಎಲ್ಲವೂ ಕನ್ನಡಮಯವಾಗಲಿ. ಇಲ್ಲಿ ನೆಲೆಸಿರುವ ಎಲ್ಲರೂ ಕನ್ನಡಿಗರೇ. ಮನೆ ಭಾಷೆ ಯಾವುದೇ ಇದ್ದರೂ ವ್ಯಾವಹಾರಿಕ ಭಾಷೆ ಕನ್ನಡವಾಗಲಿ. ಕನ್ನಡ ಅಗ್ರ ಭಾಷೆಯಾಗಲಿ, ಕನ್ನಡ ಮೊದಲ ಭಾಷೆಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕರ್ನಾಟಕ ಸುವರ್ಣ ಸಂಭ್ರಮ 50ರ ಅಂಗವಾಗಿ ಆಯೋಜಿಸಿದ್ದ ಗೋಕಾಕ್ ಚಳವಳಿ: ಹಿನ್ನೋಟ-ಮುನ್ನೋಟ ಬೃಹತ್ ಸಮಾವೇಶದಲ್ಲಿ ಸಿಎಂ ಮಾತನಾಡಿದರು. ಕನ್ನಡ ಕಾವಲು ಸಮಿತಿಯ ಅಧ್ಯಕ್ಷನಾಗಿ ರಾಜಕೀಯ ಜೀವನ ಆರಂಭಿಸಿದ ನಾನು, ಅಂದಿನಿಂದ ಇಂದಿನವರೆಗೂ ಸರ್ಕಾರದ ಕಡತಗಳಿಗೆ ಕನ್ನಡ ಬಿಟ್ಟು ಬೇರೆ ಭಾಷೆಯಲ್ಲಿ ಸಹಿಯನ್ನೇ ಮಾಡಿಲ್ಲ. ಕನ್ನಡಿಗನಾಗಿ ಹುಟ್ಟಿರುವುದೇ ನನಗೆ ಹೆಮ್ಮೆಯ ಸಂಗತಿ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇಂದು ಕನ್ನಡದ ಹಿರಿಯ ಚಳವಳಿಗಾರರನ್ನು, ಗೋಕಾಕ್ ಹೋರಾಟಗಾರರನ್ನು ಸನ್ಮಾನಿಸಿದ್ದು ಅತ್ಯಂತ ಖುಷಿ ಕೊಟ್ಟಿದೆ. ಗೋಕಾಕ್ ಚಳವಳಿಯ ಪರಿಣಾಮ ರಾಜ್ಯದಲ್ಲಿ ಕನ್ನಡದ ವಾತಾವರಣ ವಿಸ್ತರಿಸಲು ಕನ್ನಡ ಕಾವಲು ಸಮಿತಿಯನ್ನು ರಚಿಸಲಾಯಿತು. ಬಳಿಕ ಇದೇ ಸಮಿತಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯಿತು. ಪ್ರತಿಯೊಂದು ಭಾಷೆಯನ್ನೂ ಕಲಿಯಿರಿ, ಆದರೆ ಆಡಳಿತ ಭಾಷೆ ಕನ್ನಡ ಆಗಿರಲಿ ಎಂದಿದ್ದಾರೆ.
ಕನ್ನಡ ನೆಲದಲ್ಲಿ ನಡೆದ ಕನ್ನಡ ಭಾಷಾ ಚಳವಳಿ ಅತ್ಯಂತ ಚಾರಿತ್ರಿಕವಾದದ್ದು. ನಾನು ಕಾವಲು ಸಮಿತಿ ಅಧ್ಯಕ್ಷನಾಗಿದ್ದಾಗ ಇಂಗ್ಲಿಷ್ ಟೈಪ್ ರೈಟರ್ ಗಳನ್ನು ಕಿತ್ತುಕೊಂಡು ಕನ್ನಡ ಟೈಪ್ ರೈಟರ್ ಗಳನ್ನು ಕೊಡ್ತಿದ್ದೆ ಎಂದು ನೆನೆದಿದ್ದಾರೆ. ಎಲ್ಲ ಭಾಷೆಗಳ ಬಗ್ಗೆ ಗೌರವ ಇರಲಿ, ಎಷ್ಟು ಭಾಷೆಗಳನ್ನಾದರೂ ಕಲಿಯಿರಿ. ಆದರೆ ಈ ನೆಲದ ಭಾಷೆ ಕನ್ನಡವನ್ನು ಬಿಟ್ಟು ಕೊಡುವಷ್ಟು ದಾರಾಳತನ ಬೇಡ ಎಂದು ಕಿವಿಮಾತು ಹೇಳಿದ್ದಾರೆ.

ರಾಜೀನಾಮೆ ಕೇಳುವವರಿಗೆ ಕೌಂಟರ್: ಮುಡಾ ಕೇಸ್ ಬಳಿಕ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಂದ ತೀವ್ರ ಒತ್ತಾಯ ಕೇಳಿಬಂದಿದೆ. ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ಪಟ್ಟು ಹಿಡಿದಿವೆ. ಈ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ, ಕಾರಣವೇ ಇಲ್ಲದೆ ರಾಜೀನಾಮೆ ಕೊಡಿ, ರಾಜೀನಾಮೆ ಕೊಡಿ ಎನ್ನುತ್ತಿದ್ದಾರೆ. ನನಗೂ ಬೇಸರ ಆಗಿದೆ. ಸಾಕಾಗಿದೆ. ಆದರೆ, ನಿಮಗಾಗಿ ನಾನು ಹೋರಾಟ ಮುಂದುವರೆಸಿದ್ದೇನೆ ಎಂದು ಹೇಳಿದ್ದಾರೆ.
ಮಾನ್ವಿಯಲ್ಲಿ ಶೋಷಿತ-ದಮನಿತ-ಶೂದ್ರ ಜನ ಸಮುದಾಯಗಳ ಸ್ವಾಭಿಮಾನಿ ಸಮಾವೇಶದಲ್ಲಿ ಮಾತನಾಡುತ್ತಾ ನಾನು ಅವರ ಬೆದರಿಕೆಗಳಿಗೆ ಜಗ್ಗೋನೂ ಅಲ್ಲ, ಬಗ್ಗೋನೂ ಅಲ್ಲ. ಇಲ್ಲಿಯೇ ಇದ್ದು ಹೋರಾಟ ಮುಂದುವರೆಸುತ್ತೇನೆ. ನನ್ನನ್ನು ಕೆಳಗೆ ಇಳಿಸುವ ಬಿಜೆಪಿ-ಜೆಡಿಎಸ್ ಷಡ್ಯಂತ್ರ ಸೋಲಿಸುತ್ತೇನೆ. ನಿಮ್ಮ ಆಶೀರ್ವಾದ ನನ್ನ ಮೇಲಿರಲಿ. ಬಿಜೆಪಿಗೆ ನೀವೂ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದ್ದಾರೆ.
ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆಗೆ ಮುಖಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ದ್ವೇಷ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸುತ್ತೀರ? ಎಂದು ಜನರನ್ನು ಪ್ರಶ್ನಿಸಿದ್ದಾರೆ. ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಐದೈದು ಗ್ಯಾರಂಟಿಗಳನ್ನು, ಹತ್ತಾರು ಭಾಗ್ಯಗಳನ್ನು ಜಾರಿಗೆ ತಂದಿದ್ದೇ ತಪ್ಪಾ? ನನ್ನ ಮೇಲಿನ ಹೊಟ್ಟೆಕಿಚ್ಚಿಗೆ ನನ್ನ ಪತ್ನಿಯನ್ನು ರಾಜಕೀಯಕ್ಕೆ ಎಳೆದು ತರಬೇಕಿತ್ತಾ? ಅವರು ಏನು ತಾನೆ ತಪ್ಪು ಮಾಡಿದ್ದರು? ಎಂದು ಬೇಸರ ವ್ಯಕ್ತಪಡಿಸಿದ್ದಾರೆ.












Click it and Unblock the Notifications