Siddaramaiah: ಪ್ರತಿಪಕ್ಷ ನಾಯಕ ಅಶೋಕ ಕಿವಿ ಹಿಂಡಿದ ಸಿದ್ದರಾಮಯ್ಯ!
ಬೆಂಗಳೂರು, ಆಗಸ್ಟ್ 19: ಕರ್ನಾಟಕದ ರಾಜಕೀಯದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕು ಎಂದು ಪ್ರತಿಪಕ್ಷ ಬಿಜೆಪಿ ಒತ್ತಾಯಿಸುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರಚಂದ್ ಗೆಹ್ಲೇಟ್ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ವಿಚಾರಣೆಗೆ ಅನುಮತಿ ನೀಡಿದ್ದಾರೆ. ಸದ್ಯ ಕರ್ನಾಟಕ ಹೈಕೋರ್ಟ್ ಆಗಸ್ಟ್ 29ರ ತನಕ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ನೀಡಿದೆ.

ಅಶೋಕ ಕಿವಿ ಹಿಡಿದ ಸಿದ್ದರಾಮಯ್ಯ: ಪ್ರತಿಪಕ್ಷ ನಾಯಕ ಆರ್. ಅಶೋಕ, ಭ್ರಷ್ಟಾಚಾರದ ಕಳಂಕ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಸ್ವಾಗತಾರ್ಹವಾಗಿದ್ದು, ಸಿದ್ದರಾಮಯ್ಯನವರು ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾರದರ್ಶಕ ಮತ್ತು ನಿಷ್ಪಕ್ಷವಾತದ ನ್ಯಾಯಾಂಗ ಪ್ರಕ್ರಿಯೆಗೆ ಸಹಕರಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಪೋಸ್ಟ್‌ಗೆ ಸಿದ್ದರಾಮಯ್ಯ ಖಡಕ್ ಉತ್ತರ ನೀಡಿದ್ದಾರೆ. ಸಿದ್ದರಾಮಯ್ಯ ತಮ್ಮ ಟ್ವೀಟ್‌ನಲ್ಲಿ, 'ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾಗ ಬಿ. ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲವೇ?. ಈಗ ಸಿದ್ದರಾಮಯ್ಯನವರು ಯಾಕೆ ರಾಜೀನಾಮೆ ನೀಡುತ್ತಿಲ್ಲ?' ಎಂದು ವಿರೋಧಪಕ್ಷದ ನಾಯಕರಾದ ಆರ್. ಅಶೋಕ್ ಅವರು ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ. ಆರ್. ಅಶೋಕ ಅವರೇ, ಈ ರೀತಿ ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶವನ್ನು ಪರಿಶೀಲಿಸಿಕೊಂಡು ಮಾತನಾಡಿ' ಎಂದು ಸಲಹೆ ನೀಡಿದ್ದಾರೆ.
'ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, 2011ರ ಜನವರಿ 21ರಂದು. ಅವರ ವಿರುದ್ಧ ಅರ್ಜಿದಾರರು ನೀಡಿದ್ದ 1600 ಪುಟಗಳ ಪ್ರಬಲ ದಾಖಲೆಗಳ ಸಾಕ್ಷ ಕೂಡಾ ಇತ್ತು. ಹಾಗಿದ್ದರೂ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. ಅಶೋಕ್ ಅವರೇ, ಆ ಕಾಲದಲ್ಲಿ ನೀವೇ ಅಲ್ಲವೇ ಯಡಿಯೂರಪ್ಪನವರು ರಾಜೀನಾಮೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದವರು. ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ?' ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಸಿದ್ದರಾಮಯ್ಯ ತಮ್ಮ ಟ್ವೀಟ್‌ನಲ್ಲಿ, ಬಿ. ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು 2011ರ ಆಗಸ್ಟ್ ನಾಲ್ಕರಂದು. ಅದು ನ್ಯಾ. ಸಂತೋಷ್ ಹೆಗ್ಡೆ ಅವರ ನೇತೃತ್ವದ ಲೋಕಾಯುಕ್ತವು ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ಸಲ್ಲಿಸಿದ ನಂತರ. ಅಕ್ರಮ ಗಣಿಗಾರಿಕೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 16,500 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಹೇಳಿತ್ತು. ಆರ್. ಅಶೋಕ ಅವರೇ, ಹಳೆಯದ್ದನ್ನೆಲ್ಲವನ್ನೂ ನೆನಪಿಸಿಕೊಳ್ಳಿ, ಆಗ ನೀವೆಲ್ಲರೂ ಸೇರಿ ಯಡಿಯೂರಪ್ಪ ವಿರುದ್ಧವೇ ಏನೆಲ್ಲ ಕುತಂತ್ರ ಮಾಡಿದ್ದೀರಿ ಎನ್ನುವುದೂ ನೆನಪಾಗಬಹುದು' ಎಂದು ಹೇಳಿದ್ದಾರೆ.
'ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸಿದ್ದ ನ್ಯಾ.ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ಆರೋಪಗಳೆಲ್ಲವನ್ನು ಸಾಬೀತುಪಡಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರ ನ್ಯಾಯಯುತವಾಗಿತ್ತು ಎಂದು ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರೇ ದೃಡೀಕರಿಸಿದ್ದರಲ್ಲವೇ? ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಒಂದಲ್ಲ ಎರಡಲ್ಲ ಹದಿನೈದು ಡಿನೋಟಿಫಿಕೇಷನ್ ಹಗರಣಗಳ ತನಿಖೆಗೆ ಅನುಮತಿ ನೀಡಿದ್ದರು. ಹೆಚ್ಚಿನ ಮಾಹಿತಿಗೆ ನ್ಯಾ.ಸಂತೋಷ್ ಹೆಗ್ಡೆ ಅವರು ನೀಡಿದ್ದ ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ತೆಗೆದು ಓದಿಕೊಳ್ಳಿ' ಎಂದು ಸಿದ್ದರಾಮಯ್ಯ ಸಲಹೆ ಕೊಟ್ಟಿದ್ದಾರೆ.












Click it and Unblock the Notifications