ರೈತ ಸಾಂತ್ವನ ಯಾತ್ರೆ ಘೋಷಿಸಿದ ಎಚ್‌ಡಿಕೆ, ಸ್ವಾಗತಿಸಿದ ಸಿದ್ದರಾಮಯ್ಯ!
ಬೆಂಗಳೂರು, ನವೆಂಬರ್ 05: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ 'ರೈತ ಸಾಂತ್ವನ ಯಾತ್ರೆ' ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ವಿಧಾನಸಭೆ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡ ಬಳಿಕ ರಾಜ್ಯದ 31 ಜಿಲ್ಲೆಗಳಲ್ಲಿ ಈ ಯಾತ್ರೆ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಎಚ್. ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ 'ರೈತ ಸಾಂತ್ವನ ಯಾತ್ರೆ'ಯನ್ನು ಸ್ವಾಗತ ಮಾಡಿದ್ದಾರೆ. 'ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ' ಎಂದು ಭರವಸೆ ನೀಡಿದ್ದಾರೆ.

ಸಿದ್ದರಾಮಯ್ಯ ಪೋಸ್ಟ್; ಜಾತ್ಯತೀತ ಜನತಾದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ 'ರೈತ ಸಾಂತ್ವನ ಯಾತ್ರೆ' ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರೈತ ಸಾಂತ್ವನ ಯಾತ್ರೆಯ ನಂತರ ತಮ್ಮ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ ಮಾತ್ರವಲ್ಲ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾಗಬಹುದು. ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೆಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ ಎಂದು ಸಿದ್ದರಾಮಯ್ಯ ಪೋಸ್ಟ್‌ನಲ್ಲಿ ಹೇಳಿದ್ದಾರೆ.
ಹೊಸ ಬೆಳವಣಿಗೆಯಲ್ಲಿ ಸನ್ಮಾನ್ಯ ಹೆಚ್. ಡಿ. ಕುಮಾರಸ್ವಾಮಿ ಅವರು ಈಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷದ ಜೊತೆ ತಮ್ಮ ಪಕ್ಷದ ಮೈತ್ರಿಗೆ ಮುಂದಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರನ್ನು ದೂರ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಜೊತೆ ಆತ್ಮೀಯವಾಗಿ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸೌಹಾರ್ದ ಸಂಬಂಧವನ್ನು ಬಳಸಿಕೊಂಡು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ ಎಂದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರವನ್ನು ಸಿದ್ದರಾಮಯ್ಯ ಪ್ರಸ್ತಾಪ ಮಾಡಿದ್ದಾರೆ.
ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಒಟ್ಟು ರೂ. 33,710 ಕೋಟಿ ಮೌಲ್ಯದ ಬೆಳೆಹಾನಿಯಾಗಿದೆ. ಕೇಂದ್ರದಿಂದ ರೂ. 17,901 ಕೋಟಿ ಪರಿಹಾರಕ್ಕೆ ಮನವಿ ನೀಡಲಾಗಿದೆ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿದ್ದ ಸಂದರ್ಭದಲ್ಲಿ ಹಸಿರು ಬರವೂ ಸೇರಿದಂತೆ ಬರ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಹೀಗಿದ್ದರೂ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯೂ ಇಲ್ಲ, ಅನುದಾನವೂ ಇಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಬರಪರಿಹಾರಕ್ಕಾಗಿ ಪ್ರಧಾನಮಂತ್ರಿ ಅವರಿಗೆ ಮನವಿ ಮಾಡಲು ನಮ್ಮ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲು ಸಿದ್ಧ ಇದೆ. ತಮ್ಮದೇ ಪಕ್ಷಕ್ಕೆ ಸೇರಿರುವ ಪ್ರಧಾನಮಂತ್ರಿಯವರನ್ನು ಭೇಟಿ ಮಾಡುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಲ್ಲಿ ಇಲ್ಲ, ಕೇಂದ್ರದ ಬಿಜೆಪಿ ನಾಯಕರು ಕೂಡಾ ರಾಜ್ಯದ ಬಿಜೆಪಿ ನಾಯಕರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಈ ವಿಷಯದಲ್ಲಿ ಸನ್ಮಾನ್ಯ ಹೆಚ್. ಡಿ. ದೇವೇಗೌಡರು ಮತ್ತು ಅವರ ಪಕ್ಷ ಹೆಚ್ಚಿನ ಮುತುವರ್ಜಿ ವಹಿಸಿದರೆ ಇದು ಸಾಧ್ಯವಾಗಬಹುದು ಎಂದು ಕರ್ನಾಟಕದ ಪ್ರತಿಪಕ್ಷ ಬಿಜೆಪಿಯನ್ನು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಎಚ್. ಡಿ. ಕುಮಾರಸ್ವಾಮಿ, ಬರ ಮತ್ತು ವಿದ್ಯುತ್ ಕೊರತೆಯಿಂದ ಬಳಲುತ್ತಿರುವ ರೈತರಲ್ಲಿ ಧೈರ್ಯ ಮತ್ತು ಭರವಸೆ ಮೂಡಿಸಲು ರಾಜ್ಯಾದ್ಯಂತ ರೈತ ಸಾಂತ್ವನ ಯಾತ್ರೆ ನಡೆಸುವುದಾಗಿ ಘೋಷಣೆ ಮಾಡಿದರು.












Click it and Unblock the Notifications