ಸಚಿವ ಸಂಪುಟ ವಿಸ್ತರಣೆ, ಅಸಮಾಧಾನ ಸ್ಫೋಟ

ಬೆಂಗಳೂರು, ಜ. 1 : ಹೊಸ ವರ್ಷದ ಮೊದಲ ದಿನವನ್ನು ಸಂಪುಟ ವಿಸ್ತರಣೆ ಮಾಡುವ ಮೂಲಕ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಬುಧವಾರ ಸಂಜೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಮತ್ತು ರೋಷನ್ ಬೇಗ್ ಸಿದ್ದರಾಮಯ್ಯ ಸಂಪುಟ ಸೇರಲಿದ್ದು, ಯಾರಿಗೆ ಯಾವ ಖಾತೆ? ಎಂಬುದು ಇನ್ನೂ ನಿಗೂಢವಾಗಿದೆ.

ಮಂಗಳವಾರ ರಾಜ್ಯಪಾಲರನ್ನು ಭೇಟಿ ಮಾಡಿದ್ದ ಸಿಎಂ ಸಿದ್ದರಾಮಯ್ಯ ಸಂಪುಟ ವಿಸ್ತರಣೆ ಮಾಡುವ ಕುರಿತು ಮಾಹಿತಿ ನೀಡಿದರು. ಬುಧವಾರ ಸಂಜೆ 5.15 ಕ್ಕೆ ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಬ್ಬರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಬ್ಬರು ಸಂಪುಟ ಸೇರುವುದು ಖಚಿತವಾಗುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. [ಶಿವಕುಮಾರ್, ಬೇಗ್ ಗೆ ಸಚಿವ ಪಟ್ಟ, ಸಿಎಂ ಮೌನ]

Siddaramaiah

ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ಸಿಎಂ ಸಿದ್ದರಾಮಯ್ಯ ಯಾವುದೇ ಮಾಹಿತಿ ನೀಡಿಲ್ಲ. ಆದರೆ, ಕನಕಪುರ ಶಾಸಕ ಡಿಕೆ ಶಿವಕುಮಾರ್ ಮತ್ತು ಶಿವಾಜಿ ನಗರ ಶಾಸಕ ರೋಷನ್ ಬೇಗ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಹೈ ಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ಮಂಗಳವಾರ ದೂರವಾಣಿ ಮೂಲಕ ತಿಳಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. [ಡಿಕೆಶಿ, ಬೇಗ್ ಮೇಲಿನ ಆರೋಪಗಳಿಗೆ ಸಿಬಲ್ ಕ್ಲೀನ್ ಚಿಟ್]

ಇಬ್ಬರು ನಾಯಕರ ಮೇಲೆ ಹಲವಾರು ಆರೋಪಗಳಿಗೆ ಎಂಬ ಕಾರಣಕ್ಕೆ ಸರ್ಕಾರ ಅಧಿಕಾರಕ್ಕೆ ಬಂದಾಗ ಸಚಿವ ಸ್ಥಾನ ನೀಡಿರಲಿಲ್ಲ. ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಸೇರಿದಂತೆ ಹಲವಾರು ಚಿಂತಕರು ಸಿಎಂಗೆ ಪತ್ರ ಬರೆದು ಡಿಕೆ ಶಿವಕುಮಾರ್ ಮತ್ತು ರೋಷನ್ ಬೇಗ್ ಅವರಿಗೆ ಸಚಿವ ಸ್ಥಾನ ನೀಡಬಾರದು ಎಂದು ಒತ್ತಾಯಿಸಿದ್ದರು.

ಅಸಮಾಧಾನ ಸ್ಫೋಟ : ಗರಿಷ್ಠ 34 ಸದಸ್ಯ ಬಲದ ರಾಜ್ಯ ಸಚಿವ ಸಂಪುಟದಲ್ಲಿ 5 ಸ್ಥಾನಗಳು ಮಾತ್ರ ಖಾಲಿ ಇವೆ. ಸದ್ಯ ಎರಡು ಸ್ಥಾನಗಳನ್ನು ಮಾತ್ರ ಸಿಎಂ ಭರ್ತಿ ಮಾಡಲು ಆಲೋಚಿಸಿದ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನದ ಹೊಗೆ ಎದ್ದಿದೆ. ಉತ್ತರ ಕರ್ನಾಟಕದ ಭಾಗದ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ಸಿಗಬೇಕು ಎಂದು ಯಲಬುರ್ಗಾ ಶಾಸಕ ಬಸವರಾಜ್ ರಾಯರೆಡ್ಡಿ ಒತ್ತಾಯಿಸಿದ್ದಾರೆ.

ಇನ್ನೊಂದು ಕಡೆ ರಾಣೆ ಬೆನ್ನೂರು ಶಾಸಕ ಕೆ.ಬಿ.ಕೋಳಿವಾಡ ತಮಗೆ ಅವಕಾಶ ನೀಡದಿದ್ದರೆ ಅದು ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದು ಪರೋಕ್ಷ ಎಚ್ಚರಿಕೆ ನೀಡಿದ್ದಾರೆ. ರಮೇಶ್ ಕುಮಾರ್, ಮೋಟಮ್ಮ, ವೀರಣ್ಣ ಮತ್ತೀಕಟ್ಟಿ, ಎಚ್.ವೈ.ಮೇಟಿ, ಮನೋಹರ ತಹಶೀಲ್ದಾರ್ ಮುಂತಾದವರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಸ್ವತಃ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಹ ಹಲವಾರು ಬಾರಿ ಸಚಿವ ಸ್ಥಾನದ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಹಿರೇಮಠ್ ಪ್ರತಿಕ್ರಿಯೆ : ಡಿಕೆ ಶಿವಕುಮಾರ್ ಮತ್ತು ರೋಷನ್ ಬೇಗ್ ಅವರ ಅಕ್ರಮಗಳ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿ, ಅವರಿಗೆ ಸಚಿವ ಸ್ಥಾನ ನೀಡಬಾರದು ಎಂದು ಒತ್ತಾಯಿಸುತ್ತಿದ್ದ ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್.ಹಿರೇಮಠ್ ಇಬ್ಬರು ಇಂದಲ್ಲ ನಾಳೆ ಜೈಲು ಸೇರುತ್ತಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನು ಪ್ರತಿಭಟಿಸುತ್ತೇವೆ ಜೋಶಿ : ಕಳಂಕಿತ ಶಾಸಕ ಡಿಕೆ ಶಿವಕುಮಾರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಡಿಕೆಶಿ ಸಂಪುಟ ಸೇರ್ಪಡೆಗೆ ಕಾಂಗ್ರೆಸ್‌ನಲ್ಲಿ ಒತ್ತಡವಿತ್ತು. ವರಿಷ್ಠರ ಮಾತಿನಂತೆ ಸಿದ್ದರಾಮಯ್ಯ ಸಂಪುಟಕ್ಕೆ ಸೇರಿಸಿಕೊಳ್ಳಲು ಮುಂದಾಗಿದ್ದಾರೆ ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+