ಕರ್ನಾಟಕದಲ್ಲಿ ಕೊರೊನಾವೈರಸ್ ನಿಯಂತ್ರಣಕ್ಕೆ ಸಿಎಂ ಸಭೆ
ಬೆಂಗಳೂರು, ಮಾರ್ಚ್ 15: ಕರ್ನಾಟಕದಲ್ಲಿ ಏರಿಕೆಯಾಗುತ್ತಿರುವ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ನಿಯಂತ್ರಣದ ಕುರಿತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಮಹತ್ವದ ಸಭೆ ಕರೆದಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವುದಕ್ಕೆ ಯಾವ ರೀತಿ ಕ್ರಮಗಳನ್ನು ಜಾರಿಗೊಳಿಸಬೇಕು ಎನ್ನುವುದಕ್ಕೆ ಸಂಬಂಧಿಸಿದಂತೆ ಸಿಎಂ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.
ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಹಿನ್ನೆಲೆ ನೆರೆಯ ಮಹಾರಾಷ್ಟ್ರ, ಕೇರಳದಿಂದ ಆಗಮಿಸುವವರಿಗೆ ಕೊವಿಡ್-19 ನೆಗೆಟಿವ್ ವರದಿ ಕಡ್ಡಾಯಗೊಳಿಸಿ ಈಗಾಗಲೇ ಸರ್ಕಾರ ಆದೇಶಿಸಿದೆ. ಇದರ ಹೊರತಾಗಿ ಯಾವೆಲ್ಲ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಬೇಕು ಎನ್ನುವುದರ ಬಗ್ಗೆ ಇಂದಿನ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.

ರಾಜ್ಯದಲ್ಲಿ 1000 ಸನ್ನಿಹಿತಕ್ಕೆ ಕೊರೊನಾವೈರಸ್:
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1 ಸಾವಿರದ ಸನ್ನಿಹಿತಕ್ಕೆ ಬಂದಿದೆ. ಒಂದೇ ದಿನ 934 ಹೊಸ ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 628 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 960272ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಂದೇ ದಿನ 609 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 939499 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ ಮೂವರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 12390ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ರಾಜ್ಯದಲ್ಲಿ 8364 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.












Click it and Unblock the Notifications