ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳಗಾವಿಗೆ ಜಿಲ್ಲೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ಕಾಕತಾಳೀಯವಾ?

|
Google Oneindia Kannada News

ಬೆಂಗಳೂರು, ಜು. 25: ರಾಜಕೀಯ ಗೊಂದಲಗಳ ಮಧ್ಯೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತವಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವವರೊಂದಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ನಾಳೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷಗಳಾಗುತ್ತಿವೆ. ಇದೇ ಸಂದರ್ಭದಲ್ಲಿ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಗೊಂದಲಗಳು ಎದ್ದಿವೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ಮಾಹಿತಿಯಿದೆ. ಸ್ವತಃ ಯಡಿಯೂರಪ್ಪ ಅವರು ಕೂಡ ಹೈಕಮಾಂಡ್ ಸಂದೇಶದ ನಿರೀಕಷ್ಎಯಲ್ಲಿದ್ದೇನೆ ಎಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕೊಟ್ಟಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳ ಹಿಂದೆ ಇದೇ ಜುಲೈ 26ಕ್ಕೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿದ್ದರು. ಆಗಲೂ ಕೂಡ ರಾಜ್ಯದಲ್ಲಿ ಅತಿವೃಷ್ಟಿಯಿಂದ ಪ್ರವಾಹ ಸ್ಥಿತಿ ನಿರ್ಮಾಣವಾಗಿತ್ತು. ಆಗಲೂ ಹೈಕಮಾಂಡ್ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಯಡಿಯೂರಪ್ಪ ಅವರಿಗೆ ಅನುಮತಿ ಕೊಟ್ಟಿರಲಿಲ್ಲ. ಹೀಗಾಗಿ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಏಕವ್ಯಕ್ತಿ ಸಂಪುಟದ ಮುಖ್ಯಮಂತ್ರಿಯಾಗಿ ಬೆಳಗಾವಿ ಜಿಲ್ಲೆಗೆ ಯಡಿಯೂರಪ್ಪ ಭೇಟಿ ನೀಡಿದ್ದರು. ಈಗ ಮತ್ತೆ ಎರಡು ವರ್ಷಗಳ ಬಳಿಕ ರಾಜಕೀಯ ಅಸ್ಥಿರತೆ ತಲೆದೋರಿದ್ದು, ಕಾಕತಾಳಿಯ ಎಂಬಂತೆ ಮತ್ತೆ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಯಡಿಯಹೂರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹಿರಣ್ಯಕೇಶಿ ನದಿಪಾತ್ರದ ಸ್ಥಳಗಳಿಗೆ ಭೇಟಿ

ಹಿರಣ್ಯಕೇಶಿ ನದಿಪಾತ್ರದ ಸ್ಥಳಗಳಿಗೆ ಭೇಟಿ

ಕಳೆದು ಒಂದು‌ ವಾರದಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಪ್ರವಾಹದಿಂದ ಬಾಧಿತಗೊಂಡಿರುವ ಹಿರಣ್ಯಕೇಶಿ ನದಿಪಾತ್ರದ ವಿವಿಧ ಸ್ಥಳಗಳಿಗೆ ಮುಖ್ಯಮಂತ್ರಿ ಬಿ‌.ಎಸ್. ಯಡಿಯೂರಪ್ಪ ಅವರು ಭೇಟಿ ನೀಡಿ ಪರಿಶೀಲಿಸಿದರು. ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣಕ್ಕೆ ಭೇಟಿ ನೀಡಿದ ಅವರು, ಪ್ರವಾಹದಿಂದ ಬಾಧಿತರಾಗಿರುವ ಸಂತ್ರಸ್ತರ ಅಹವಾಲುಗಳನ್ನು ಆಲಿಸಿದರು.

ನೆರೆಯ ಮಹಾರಾಷ್ಟ್ರ ರಾಜ್ಯ ಹಾಗೂ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ವ್ಯಾಪಕ ಮಳೆಯಾದ ಪರಿಣಾಮ ಹಿರಣ್ಯಕೇಶಿ, ಕೃಷ್ಣಾ, ವೇದಗಂಗಾ, ಘಟಪ್ರಭಾ, ಮಲಪ್ರಭಾ ಸೇರಿದಂತೆ ಜಿಲ್ಲೆಯ ಸಪ್ತ ನದಿಗಳಲ್ಲಿ ಹಾಗೂ ಬೆಳಗಾವಿ ಸಮೀಪದ ಬಳ್ಳಾರಿ ನಾಲಾಗಳಲ್ಲಿ ನೀರಿನ ಹರಿವು ಹೆಚ್ಚಳಗೊಂಡು ಅಕ್ಕಪಕ್ಕದ ಕೆಲ ಗ್ರಾಮಗಳು ಜಲಾವೃತಗೊಂಡಿವೆ.

ಶಾಶ್ವತ ಸ್ಥಳಾಂತರದ ಭರವಸೆ ಕೊಟ್ಟ ಸಿಎಂ

ಶಾಶ್ವತ ಸ್ಥಳಾಂತರದ ಭರವಸೆ ಕೊಟ್ಟ ಸಿಎಂ

ಹಿರಣ್ಯಕೇಶಿ ನದಿತೀರದಲ್ಲಿರುವ ಸಂಕೇಶ್ವರ ಪಟ್ಟಣದ ಮಠಗಲ್ಲಿ, ಕುಂಬಾರ ಓಣಿ ಹಾಗೂ ನದಿಗಲ್ಲಿಯ ಬಳಿಯ ಮುಳುಗಡೆ ಪ್ರದೇಶಗಳನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕಂದಾಯ ಸಚಿವ ಆರ್. ಅಶೋಕ್ ಹಾಗೂ ಸಚಿವರಾದ ಗೋವಿಂದ ಕಾರಜೋಳ, ಉಮೇಶ್ ಕತ್ತಿ, ಲಕ್ಷ್ಮಣ ಸವದಿ ಅವರೊಂದಿಗೆ ವೀಕ್ಷಣೆ ಮಾಡಿದರು. ಅದಾದ ಬಳಿಕ ಶಂಕರಲಿಂಗ ಕಾರ್ಯಾಲಯದಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದರು.

ಶಂಕರಲಿಂಗ ಕಾರ್ಯಾಲಯದಲ್ಲಿ ಸಂತ್ರಸ್ತರ ಜತೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, "ಸಂಕೇಶ್ವರ ಪಟ್ಟಣದಲ್ಲಿ ಪ್ರತಿವರ್ಷ ಪ್ರವಾಹದಿಂದ ಬಾಧಿತಗೊಳ್ಳುವ ಮನೆಗಳ ಶಾಶ್ವತ ಸ್ಥಳಾಂತರಕ್ಕೆ ಐವತ್ತು ಎಕರೆ ಭೂಮಿ‌ ಲಭ್ಯವಿದೆ. ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಡಲು ನಿರ್ಧರಿಸಲಾಗಿದೆ. ಸಂತ್ರಸ್ತರು ಸಹಕರಿಸಿದರೆ ಐವತ್ತು ಎಕರೆ ಜಾಗೆಯಲ್ಲಿ ಮನೆಗಳನ್ನು ಒದಗಿಸಲಾಗುತ್ತದೆ. ಮೂರ್ನಾಲ್ಕು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿದು ಜನರಿಗೆ ಸಂಕಷ್ಟ. ಸಂಕಷ್ಟಕ್ಕೆ ಒಳಗಾದ ಜನರಿಗೆ ಸೂಕ್ತ ಪರಿಹಾರ ವ್ಯವಸ್ಥೆ ಮಾಡಲಾಗುವುದು" ಎಂದು ಭರವಸೆ ನೀಡಿದರು.

ಹಾನಿ ಸಮೀಕ್ಷೆ ಬಳಿಕ ಪರಿಹಾರ

ಹಾನಿ ಸಮೀಕ್ಷೆ ಬಳಿಕ ಪರಿಹಾರ

ಇದೇ ಸಂದರ್ಭದಲ್ಲಿ ಮಳೆ ಹಾನಿಗೆ ಪರಿಹಾರದ ಭರವಸೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸಂತ್ರಸ್ತರಿಗೆ ಕೊಟ್ಟಿದ್ದಾರೆ. "ಮಳೆ ನಿಂತ ಬಳಿಕ ಮನೆ ಮನೆ ಸಮೀಕ್ಷೆ ಕೈಗೊಂಡು ನಂತರ ಸೂಕ್ತ ಪರಿಹಾರವನ್ನು ನೀಡಲಾಗುವುದು. ತಾತ್ಕಾಲಿಕವಾಗಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಗಳಲ್ಲಿ ಊಟೋಪಹಾರ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಜನರು ಭಯ ಪಡುವ ಅಗತ್ಯವಿಲ್ಲ. ಸರ್ಕಾರ ನಿಮ್ಮ ಜತೆಗಿದೆ" ಎಂದು ಯಡಿಯೂರಪ್ಪ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ ಅವರು, "ಸಂತ್ರಸ್ತರಿಗೆ ಎನ್.ಡಿ.ಆರ್.ಎಫ್.‌ಅಡಿ‌ ಪರಿಹಾರ ವಿತರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಎಲ್ಲರಿಗೂ ಪರಿಹಾರ ನೀಡಲಾಗುವುದು" ಎಂದು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ

ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ

ನಂತರ ನಿಪ್ಪಾಣಿ ತಾಲ್ಲೂಕಿನ ಯಮಗರ್ಣಿ ಗ್ರಾಮದ ಬಳಿ ಅತಿವೃಷ್ಟಿಯಿಂದ ಮುಳುಗಡೆಯಾಗಿರುವ ರಾಷ್ಟ್ರೀಯ ಹೆದ್ದಾರಿ 4 ಅನ್ನು ಸಿಎಂ ಯಡಿಯೂರಪ್ಪ ಹಾಗೂ ಇತರ ಸಚಿವರು ಪರಿಶೀಲಿಸಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು, "ಮಳೆ ಹಾಗೂ ಪ್ರವಾಹದಿಂದ 630 ಕುಟುಂಬಗಳಿಗೆ ತೊಂದರೆಯಾಗಿದ್ದು, ಐದು ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಊಟೋಪಹಾರ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಲಾಗಿದೆ" ಎಂದು ವಿವರಿಸಿದರು.

ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಹುಕ್ಕೇರಿ ಕ್ಷೇತ್ರದ ಶಾಸಕರೂ ಆಗಿರುವ ಆಹಾರ ಸಚಿವ ಉಮೇಶ್ ಕತ್ತಿ ಮತ್ತಿತರರು ಉಪಸ್ಥಿತರಿದ್ದರು.

English summary
Chief Minister BS Yediyurappa visited and inspected flood affected areas in Belagavi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X