ರಾಜ್ಯ ಶಿಕ್ಷಣ ನೀತಿ ಸಿದ್ದಪಡಿಸಲು ಪ್ರೊ. ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ
ಬೆಂಗಳೂರು, ಅಕ್ಟೋಬರ್ 11: ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.
ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ. ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ಅವರು ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ತಮ್ಮದೇ ರಾಜ್ಯ ಶಿಕ್ಷಣ ನೀತಿಯನ್ನು ತರುತ್ತೇವೆ ಎಂದು ಆರಂಭದಲ್ಲೇ ತಿಳಿಸಲಾಗಿತ್ತು.
ಕಳೆದ ಆಗಸ್ಟ್‌ನಲ್ಲಿ ಕರ್ನಾಟಕದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ (2024ರಿಂದ) ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ (NEP) ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.
ಅದರಂತೆ ಈಗ ಹೊಸ ರಾಜ್ಯ ಶಿಕ್ಷಣ ನೀತಿ ಜಾರಿ ಮಾಡಲು ಶಿಕ್ಷಣ ತಜ್ಞ ಪ್ರೊ. ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿಯಲ್ಲಿ ಸದಸ್ಯರಾಗಿ ನಿವೃತ್ತ ಐಎಎಸ್ ಅಧಿಕಾರಿ ಸಂಜಯ್ ಕೌಲ್, ಬೆಂಗಳೂರು ಮಾಜಿ ಉಪ ಕುಲಪತಿ ಪ್ರೊ. ಎಸ್. ಜೊಸೆಫ್, ಕುವೆಂಪು ವಿಶ್ವವಿದ್ಯಾನಿಲಯದ ಮಾಜಿ ಉಪ ಕುಲಪತಿ ಪ್ರೊ. ಜೋಗನ್ ಶಂಕರ್, ಬೆಂಗಳೂರು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯದ ಉಪ ಕುಲಪತಿ ಸುಧೀರ್ ಕೃಷ್ಣಸ್ವಾಮಿ.
ಅಲ್ಲದೆ ನಿವೃತ್ತ ಪ್ರಾಧ್ಯಾಪಕ ರಾಜೇಂದ್ರ ಚೆನ್ನಿ, ನಿವೃತ್ತ ಪ್ರಾಧ್ಯಾಪಕ ನಟರಾಜ್ ಬೂದಾಳು, ಪ್ರೊ. ಸುಧಾಂಶು ಭೂಷಣ್, ಪ್ರೊ. ಪ್ರಣತಿ ಪಾಂದಾ, ಪ್ರೊ. ಫುರ್ಕಾನ್ ಕಮರ್, ಪ್ರೊ. ಶರತ್ ಅನಂತಮೂರ್ತಿ, ಪ್ರೊ. ಎ. ನಾರಾಯಣ, ಡಾ. ವಿಪಿ ನಿರಂಜನರಾಧ್ಯ, ಡಾ. ಎಂಎಸ್ ತಳವಾರ್, ಡಾ. ಸಂತೋಷ್ ನಾಯಕ್, ಪ್ರೊ. ವಿನಿಯ ಒಕ್ಕುಂದ ಸಮಿತಿಯಲ್ಲಿ ಇದ್ದಾರೆ
ಆಗಸ್ಟ್‌ನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ರದ್ದುಗೊಳಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರವನ್ನು ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಸಂಘ ವಿರೋಧಿಸಿದ್ದು, ಅದನ್ನು ತೆಗೆದುಹಾಕುವ ಬದಲು ನೀತಿಯಲ್ಲಿ ಬದಲಾವಣೆ ತರುವಂತೆ ಸಂಘದ ಸದಸ್ಯರು ಒತ್ತಾಯಿಸಿದ್ದರು.
ಸಿಎಂ ಸಿದ್ದರಾಮಯ್ಯ ಅವರು ಆಗಸ್ಟ್ 21ರಂದು ಉಪಕುಲಪತಿಗಳು ಹಾಗೂ ತಜ್ಞರೊಂದಿಗೆ ಸಭೆ ನಡೆಸಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಜಾರಿಗೆ ತರಲಿರುವ ಕರ್ನಾಟಕ ಶಿಕ್ಷಣ ನೀತಿಯನ್ನು ಸಿದ್ಧಪಡಿಸಲು ಶೀಘ್ರವೇ ಸಮಿತಿ ರಚಿಸುವುದಾಗಿ ಘೋಷಿಸಿದ್ದರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಿ.ಟಿ.ರವಿ ಮತ್ತು ಅಶ್ವಥ್ ನಾರಾಯಣ ಸೇರಿದಂತೆ ಹಲವು ರಾಜ್ಯ ಬಿಜೆಪಿ ನಾಯಕರು ಎನ್‌ಇಪಿ ರದ್ದುಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.












Click it and Unblock the Notifications