ಉಪ ಚುನಾವಣೆ : ಕುಂದಗೋಳಕ್ಕೆ ಡಿ.ಕೆ.ಶಿವಕುಮಾರ್ ಉಸ್ತುವಾರಿ
ಬೆಂಗಳೂರು, ಏಪ್ರಿಲ್ 28 : ಎರಡು ಕ್ಷೇತ್ರಗಳ ಉಪ ಚುನಾವಣೆ ಗೆಲ್ಲಲು ತಂತ್ರ ರೂಪಿಸಿರುವ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಮೇ 19ರಂದು ಚಿಂಚೋಳಿ ಮತ್ತು ಕುಂದಗೋಲ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ.
ಕೆಪಿಸಿಸಿ ಕಚೇರಿಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಹಾಗೆಯೇ ಉಸ್ತುವಾರಿಗಳನ್ನು ನೇಮಿಸಲಾಗಿದೆ.
ಸಿ.ಎಸ್.ಶಿವಳ್ಳಿ ಅವರ ನಿಧನದಿಂದ ತೆರವಾದ ಕುಂದಗೋಳ ಕ್ಷೇತ್ರ, ಡಾ.ಉಮೇಶ್ ಜಾಧವ್ ಅವರ ರಾಜೀನಾಮೆಯಿಂದ ತೆರವಾದ ಚಿಂಚೋಳಿ ಕ್ಷೇತ್ರದ ಉಪ ಚುನಾವಣೆ ಮೇ 19ರಂದು ನಡೆಯಲಿದೆ, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.
ಕುಂದಗೋಳ ಕ್ಷೇತ್ರದಲ್ಲಿ ಸಿ.ಎಸ್.ಶಿವಳ್ಳಿ ಅವರ ಪತ್ನಿ ಕುಸುಮಾ ಶಿವಳ್ಳಿ, ಚಿಂಚೋಳಿ ಕ್ಷೇತ್ರದಲ್ಲಿ ಸುಭಾಷ್ ರಾಥೋಡ್ ಅವರಿಗೆ ಟಿಕೆಟ್ ನೀಡಲಾಗಿದೆ. ನಾಮಪತ್ರಗಳನ್ನು ಸಲ್ಲಿಸಲು ಏಪ್ರಿಲ್ 29 ಕೊನೆಯ ದಿನವಾಗಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿತ್ತು. ಆದ್ದರಿಂದ, ಪಕ್ಷಕ್ಕೆ ಉಪ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ...

ಕುಂದಗೋಳ ಕ್ಷೇತ್ರ
ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಂಪೂರ್ಣ ಜವಾಬ್ದಾರಿಯನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ನೀಡಲಾಗಿದೆ. ಸಚಿವರಾದ ಎಂಟಿಬಿ ನಾಗರಾಜು, ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್ ಅವರು ಸಹ ಉಸ್ತುವಾರಿಗಳಾಗಿದ್ದಾರೆ.

ಚಿಂಚೋಳಿ ಕ್ಷೇತ್ರ
ಚಿಂಚೋಳಿ ವಿಧಾನಸಭಾ ಕ್ಷೇತ್ರದ ಜವಾಬ್ದಾರಿಯನ್ನು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರಿಗೆ ನೀಡಲಾಗಿದೆ. ಸಚಿವರಾದ ಪ್ರಿಯಾಂಕ್ ಖರ್ಗೆ, ರಾಜಶೇಖರ್ ಪಾಟೀಲ್, ತುಕಾರಾಂ, ಈಶ್ವರ ಖಂಡ್ರೆ, ಪಿ.ಟಿ.ಪರಮೇಶ್ವರ್ ನಾಯಕ್, ರಹೀಂಖಾನ್ ಅವರು ಸಹ ಉಸ್ತುವಾರಿಗಳಾಗಿದ್ದಾರೆ.

ಎರಡೂ ಕಾಂಗ್ರೆಸ್ ಗೆದ್ದಿದ್ದ ಕ್ಷೇತ್ರ
ಚಿಂಚೋಳಿ ಮತ್ತು ಕುಂದಗೋಳ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯಾಗಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದರು. ಆದ್ದರಿಂದ, ಉಪ ಚುನಾವಣೆ ಗೆದ್ದು ಕ್ಷೇತ್ರವನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ.

ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ
ಬಿಜೆಪಿ ಈಗಾಗಲೇ ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕುಂದಗೋಳ ಕ್ಷೇತ್ರಕ್ಕೆ ಚಿಕ್ಕನಗೌಡ ಸಿದ್ದನಗೌಡ ಈಶ್ವರ ಗೌಡ ಹಾಗೂ ಚಿಂಚೋಳಿ ಕ್ಷೇತ್ರಕ್ಕೆ ಡಾ.ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಅಭ್ಯರ್ಥಿಯಾಗಿದ್ದಾರೆ.












Click it and Unblock the Notifications