ಸರ್ಕಾರ ರಚಿಸಲು ಕಾಂಗ್ರೆಸ್ ಭರ್ಜರಿ ಸಿದ್ಧತೆ: ಶಾಸಕಾಂಗ ಸಭೆಯಲ್ಲಿ ಭವಿಷ್ಯದ ಸಿಎಂ ನಿರ್ಧಾರ
ಬೆಂಗಳೂರು, ಮೇ 14: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಈಗಾಗಲೇ ಕಾಂಗ್ರೆಸ್ ಬಹುಮತ ಸಾಧಿಸಿದೆ. ಈ ಬಾರಿಯ ಚುನಾವಣೆಯಲ್ಲಿ ದಿಗ್ವಿಜಯ ಸಾಧಿಸಿರುವ ಕಾಂಗ್ರೆಸ್ ಸದ್ಯ ಸರ್ಕಾರ ರಚನೆ ಸಿದ್ಧತೆಯಲ್ಲಿದೆ.
ಈಗಾಗಲೇ ಪಕ್ಷದ ಮುಖಂಡರು ಗೆದ್ದಿರುವ ಎಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಗಳೂರಿಗೆ ಬರುವಂತೆ ಸೂಚನೆ ನೀಡಿದ್ದು, ರಾಜ್ಯದಾದ್ಯಂತ ಗೆಲುವು ಸಾಧಿಸಿರುವ ಎಲ್ಲಾ ನಾಯಕರು ಬೆಂಗಳೂರಿನತ್ತ ಪ್ರಯಾಣ ಬೆಳೆಸುತ್ತಿದ್ದು, ಈಗಾಗಲೇ ಬಹುತೇಕರು ಶಾಸಕರು ಬೆಂಗಳೂರು ತಲುಪಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡುವ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಶಾಸಕಾಂಗ ಸಭೆ ಕರೆಯಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಂಜೆ 5.30ಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ. ಇಂದಿನ ಈ ಸಭೆಯಲ್ಲಿಮುಂದಿನ ಸಿಎಂ ಯಾರು ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ.
ಇನ್ನು ಬಹುಮತ ಸಾಧಿಸಿರುವ ಕಾಂಗ್ರೆಸ್ ತಮ್ಮ ಪಕ್ಷದ ಯಾವ ಮುಖಂಡನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲಿದೆ. ಈಗಾಗಲೇ ಕಾಂಗ್ರೆಸ್‌ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ಸಿಎಂ ರೇಸ್‌ನಲ್ಲಿದ್ದು, ಇದೀಗ ಪ್ರಿಯಾಂಕ್ ಖರ್ಗೆ ಕೂಡ ಈ ಸಾಲಿನಲ್ಲಿ ಸೇರಿದ್ದಾರೆ.
ನಮ್ಮ ಸಿಎಂ ಪ್ರಿಯಾಂಕ್ ಖರ್ಗೆ ಎಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಚಿತ್ತಾರಪುರ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಪ್ರಿಯಾಂಕ್ ಖರ್ಗೆಯವರಿಗೆ ಮುಖ್ಯಮಂತ್ರಿ ಮಾಡಬೇಕೆಂದು ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಸೃಷ್ಟಿ ಮಾಡಿದ್ದಾರೆ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಹಾಗೂ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಈಗಾಗಲೇ ತಮ್ಮದೇ ರೀತಿಯಲ್ಲಿ ತಮ್ಮ ತಮ್ಮ ನಾಯಕರನ್ನು ಸಿಎಂ ಮಾಡಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಕರ್ನಾಟಕದ ಮುಂದಿನ ಸಿಎಂ ಯಾರು ಎನ್ನುವುದು ಇಂದಿನ ಶಾಸಕಾಂಗ ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆ ಹೆಚ್ಚಿದೆ.












Click it and Unblock the Notifications