ಕಾಂಗ್ರೆಸ್‌ನ 5 ಗ್ಯಾರಂಟಿ ಅನುಷ್ಠಾನ; ಸಮಿತಿಯ ವಿವರಗಳು
ಬೆಂಗಳೂರು, ಜನವರಿ 30: ಕರ್ನಾಟಕದ ಕಾಂಗ್ರೆಸ್ ರಾಜ್ಯದ ಜನರಿಗೆ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿತು. ಈಗ ಐದು ಗ್ಯಾರಂಟಿಗಳು ಜಾರಿಯಾಗಿವೆ. ಈ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣೆಗೆ ಸರ್ಕಾರ ಸಮಿತಿಯನ್ನು ರಚನೆ ಮಾಡಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ವಿಮಲಾಕ್ಷಿ ಬಿ., ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ ಸುಧಾರಣೆ) ಆದೇಶವನ್ನು ಹೊರಡಿಸಿದ್ದಾರೆ.

ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಗಳು ಹಾಗೂ ತಾಲೂಕು ಮತ್ತು ಬಿಬಿಎಂಪಿ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಿ ಆದೇಶವನ್ನು ಹೊರಡಿಸಲಾಗಿದೆ.
ಸಮಿತಿಯ ಸದಸ್ಯರು: ಮುಖ್ಯಮಂತ್ರಿಗಳ ಟಿಪ್ಪಣಿ 17/01/2024 ಉಲ್ಲೇಖಿಸಿ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಆದೇಶ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಸಾಂಸ್ಥಿಕ ಕಾರ್ಯವಿಧಾನಗಳು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನ ಪ್ರಾಧಿಕಾರ, ಬಿಬಿಎಂಪಿ ಮಟ್ಟದ ಅನುಷ್ಠಾನ ಸಮಿತಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಅನುಷ್ಠಾನ ಸಮಿತಿಗಳನ್ನು ರಚಿಸಿ, ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ಎಂಬ ವಿಷಯ ಒಳಗೊಂಡಿದೆ.
ರಾಜ್ಯದ ಜನರಿಗೆ 'ಶಕ್ತಿ', 'ಗೃಹ ಜ್ಯೋತಿ', 'ಅನ್ನ ಭಾಗ್ಯ', 'ಗೃಹ ಲಕ್ಷ್ಮಿ' ಮತ್ತು 'ಯುವ ನಿಧಿ' ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಶಕ್ತಿ ಯೋಜನೆಯನ್ನು ಜೂನ್ 11, 2023ರಂದು, ಗೃಹಜ್ಯೋತಿ ಯೋಜನೆಯನ್ನು ಜುಲೈ 1, 2023ರಂದು, ಅನ್ನಭಾಗ್ಯ ಯೋಜನೆಯನ್ನು ಜುಲೈ 2023ರಂದು, ಗೃಹಲಕ್ಷ್ಮೀ ಯೋಜನೆ ಮತ್ತು ಯುವನಿಧಿ ಯೋಜನೆಯನ್ನು ಜನವರಿ 12, 2024ರಂದು ಜಾರಿಗೊಳಿಸಿ, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭಗಳನ್ನು ವಿತರಿಸಲಾಗುತ್ತಿದೆ ಎಂದು ಆದೇಶ ಹೇಳಿದೆ.
ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಸಚಿವ ಸಂಪುಟ ದರ್ಜೆಯ ಸ್ಥಾನಮಾನವನ್ನು ಹೊಂದಿರುತ್ತಾರೆ. ಉಪಾಧ್ಯಕ್ಷರು (5 ಜನ) ರಾಜ್ಯ ಸಚಿವ ಸ್ಥಾನಮಾನ ಹೊಂದಿರುತ್ತಾರೆ. 31 ಜಿಲ್ಲೆ ಪ್ರತಿನಿಧಿಸುವ (ಜಿಲ್ಲೆಗೆ ಒಬ್ಬರಂತೆ 31) ಸದಸ್ಯರು ಇರುತ್ತಾರೆ. ಸದಸ್ಯ ಕಾರ್ಯದರ್ಶಿಯಾಗಿ ಸರ್ಕಾರದ ಅಪರ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶಿಷ್ಟ ಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಇರುತ್ತಾರೆ.
ರಾಜ್ಯದ ಜಿಲ್ಲೆಗಳನ್ನು 5 ವಿಭಾಗಗಳನ್ನಾಗಿ ವಿಂಗಡಿಸಿ, ರಾಜ್ಯ ಮಟ್ಟದ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರುಗಳಿಗೆ ಪ್ರತಿಯೊಂದು ವಿಭಾಗಗಳ ಜವಾಬ್ದಾರಿಯನ್ನು ಹಂಚಿಕೆ ಮಾಡಿ ಸದಸ್ಯ ಕಾರ್ಯದರ್ಶಿಯವರು ಆದೇಶ ಹೊರಡಿಸುತ್ತಾರೆ.
ಸದಸ್ಯ ಕಾರ್ಯದರ್ಶಿಯವರು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಇತರೆ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿಯವರನ್ನು ರಾಜ್ಯ ಮಟ್ಟದ ಅನುಷ್ಠಾನ ಪ್ರಾಧಿಕಾರದ ಸದಸ್ಯರನ್ನಾಗಿ ನೇಮಕ ಮಾಡಲಿದ್ದಾರೆ.
ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಸದಸ್ಯ ಕಾರ್ಯದರ್ಶಿರವರು ಸಕ್ಷಮ ಪ್ರಾಧಿಕಾರದ (ಸರ್ಕಾರದ) ಅನುಮೋದನೆ ಪಡೆದು ನೇಮಿಸತಕ್ಕದ್ದು.
ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಗಳು ಹಾಗೂ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಕಾರ್ಯಗಳು, ಜವಾಬ್ದಾರಿಗಳು, ಅಧಿಕಾರಿ/ ಸಿಬ್ಬಂದಿಗಳ ನೇಮಕಾತಿ, ರಾಜೀನಾಮೆ, ಕಛೇರಿ ನಿರ್ವಹಣೆ, ಸವಲತ್ತು, ಗೌರವಧನ, ಭತ್ಯೆಗಳು ಹಾಗೂ ಇತರೆ ಯಾವುದೇ ಸಂಬಂಧಪಟ್ಟ ವಿಷಯಗಳ ಕುರಿತು ಸಕ್ಷಮ ಪ್ರಾಧಿಕಾರದ (ಸರ್ಕಾರದ) ಅನುಮೋದನೆಯೊಂದಿಗೆ ರಾಜ್ಯ ಮಟ್ಟದ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರು ಪ್ರತ್ಯೇಕವಾಗಿ ಆದೇಶ ಹೊರಡಿಸಲಾಗುತ್ತದೆ.
ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಮುಖ ಜವಾಬ್ದಾರಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಯಾಗಿರುತ್ತದೆ ಹಾಗೂ ಈ ಪ್ರಾಧಿಕಾರವು ನೀತಿ ರಚನೆ, ಸುಧಾರಣಾ ಕ್ರಮಗಳು, ಅನುಷ್ಠಾನದಲ್ಲಿ ಸರಳೀಕರಣ ಹಾಗೂ ಸಮನ್ವಯತೆ ತರುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದು ಆದೇಶ ಹೇಳಿದೆ.












Click it and Unblock the Notifications