ಕುಂದಗೋಳ, ಚಿಂಚೋಳಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ
ಬೆಂಗಳೂರು, ಏಪ್ರಿಲ್ 28 : ಕರ್ನಾಟಕ ಕಾಂಗ್ರೆಸ್ ಎರಡೂ ಕ್ಷೇತ್ರಗಳ ವಿಧಾನಸಭೆ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮೇ 19ರಂದು ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಚಿಂಚೋಳಿ ಮತ್ತು ಕುಂದಗೋಳ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ಒಪ್ಪಿಗೆ ನೀಡಿದ್ದಾರೆ. ಏಪ್ರಿಲ್ 29ರ ಸೋಮವಾರ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.
ಸಿ.ಎಸ್.ಶಿವಳ್ಳಿ ಅವರ ನಿಧನದಿಂದಾಗಿ ಧಾರವಾಡ ಜಿಲ್ಲೆಯ ಕುಂದಗೋಳ, ಡಾ.ಉಮೇಶ್ ಜಾಧವ್ ಅವರ ರಾಜೀನಾಮೆಯಿಂದಾಗಿ ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಮೇ 19ರಂದು ಚುನಾವಣೆ ನಡೆಯಲಿದೆ.
ಬಿಜೆಪಿ ಸಹ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದರು. ಆದ್ದರಿಂದ, ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಯಲ್ಲಿ ಜಯಗಳಿಸುವುದು ಪ್ರತಿಷ್ಠೆಯ ಪ್ರಶ್ನೆಯಾಗಿದೆ......

ಸುಭಾಷ್ ರಾಥೋಡ್
ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಸುಭಾಷ್ ರಾಥೋಡ್ ಅವರು ಕಾಂಗ್ರೆಸ್ ಅಭ್ಯರ್ಥಿ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿಯಾದ ಸುಭಾಷ್ ರಾಥೋಡ್ ಅವರಿಗೆ ಭಾನುವಾರ ಬಿ ಫಾರಂ ಅನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾದ ಕೆ.ಸಿ. ವೇಣುಗೋಪಾಲ್, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಕೆಪಿಸಿಸಿ ಅಧ್ಯಕ್ಷದ ದಿನೇಶ್ ಗುಂಡೂರಾವ್ ನೀಡಿದರು. ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಉಪಸ್ಥಿತರಿದ್ದರು.

ಕುಸುಮಾವತಿ ಶಿವಳ್ಳಿ
ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕುಸುಮಾವತಿ ಶಿವಳ್ಳಿ ಅವರು ಅಭ್ಯರ್ಥಿ. ಕುಂದಗೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಗದೀಶ್ ಅವರ ಮೂಲಕ ಬಿಫಾರಂ ಅವರನ್ನು ಕಳುಹಿಸಲಾಯಿತು.

ಜೆಡಿಎಸ್-ಕಾಂಗ್ರೆಸ್ ಮೈತ್ರಿ
ಲೋಕಸಭಾ ಚುನಾವಣೆ ಬಳಿಕ ವಿಧಾನಸಭೆ ಉಪ ಚುನಾವಣೆಯಲ್ಲಿಯೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯುತ್ತಿಲ್ಲ. ಕಾಂಗ್ರೆಸ್ ಅಭ್ಯರ್ಥಿಗಳಿಗೆ ಪಕ್ಷ ಬೆಂಬಲ ನೀಡಿದೆ.

ಎರಡೂ ಕ್ಷೇತ್ರದಲ್ಲಿ ಗೆಲ್ಲಬೇಕು
2018ರ ವಿಧಾನಸಭೆ ಚುನಾವಣೆಯಲ್ಲಿ ಕುಂದಗೋಳ ಮತ್ತು ಚಿಂಚೋಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದರು. ಆದ್ದರಿಂದ, ಉಪ ಚುನಾವಣೆ ಗೆಲ್ಲುವ ಮೂಲಕ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ತಂತ್ರ ರೂಪಿಸಿದೆ. ಉಪ ಚುನಾವಣೆ ಕಾಂಗ್ರೆಸ್‌ಗೆ ಪ್ರತಿಷ್ಠೆಯಾಗಿದೆ.












Click it and Unblock the Notifications