Karnataka By-Election 2024: ಮೂರೂ ಕ್ಷೇತ್ರ ಗೆಲ್ಲಲು ಕಾಂಗ್ರೆಸ್ ದೊಡ್ಡ ಪ್ಲ್ಯಾನ್, ಏನದು?
ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೆ ಅತ್ತ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಖಾಡಕ್ಕಿಳಿದು ಸದ್ದು ಮಾಡುತ್ತಿವೆ. ಇದೀಗ ಕಾಂಗ್ರೆಸ್ ಕೂಡ ಫೀಲ್ಡಿಗೆ ಇಳಿದಿದ್ದು, ಮೂರಕ್ಕೆ ಮೂರೂ ಕ್ಷೇತ್ರಗಳಲ್ಲಿ ಗೆಲ್ಲಲೇಬೇಕು ಎಂದು ಪಣ ತೊಟ್ಟಿದೆ.
ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ವಿಶೇಷ ಸಭೆ ನಡೆಸಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಸಂಬಂಧ ಕಾಂಗ್ರೆಸ್ ಸಚಿವರು ಹಾಗೂ ಪಕ್ಷದ ನಾಯಕರ ಜೊತೆ ಸುದೀರ್ಘ ಚರ್ಚೆ ನಡೆಸಿ, ಕೆಲ ಮಹತ್ವದ ನಿರ್ಣಯಗಳನ್ನೂ ತೆಗೆದುಕೊಳ್ಳಲಾಗಿದೆ.

ಸಭೆಯಲ್ಲಿದ್ದ ಪಕ್ಷದ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಅವರು ದೊಡ್ಡ ಕರೆ ನೀಡಿದ್ದಾರೆ. ಮೂರೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ. ಆದ್ದರಿಂದ ಸಂಪೂರ್ಣ ಶ್ರಮ ಹಾಕಿ ಚುನಾವಣೆ ನಿರ್ವಹಿಸಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ. ಪ್ರತಿ ಚುನಾವಣೆ ಸಂದರ್ಭದಲ್ಲೂ ಬಿಜೆಪಿಯ ಪ್ರತಿಯೊಬ್ಬರೂ ಜಿದ್ದಿಗೆ ಬಿದ್ದವರಂತೆ ಸುಳ್ಳುಗಳನ್ನು ಹೇಳುತ್ತಾರೆ. ಅವರ ಸುಳ್ಳುಗಳನ್ನು ಜನರೆದುರು ಬಯಲುಗೊಳಿಸಬೇಕು ಎಂದು ಪ್ಲ್ಯಾನ್ ಕೊಟ್ಟಿದ್ದಾರೆ.
ಲೋಕಸಭೆ ಚುನಾವಣೆ ಮುಗಿದ ಮರುದಿನವೇ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎಂದು ಮೋದಿಯವರಿಂದ ಹಿಡಿದು ಸಿ.ಟಿ.ರವಿವರೆಗೂ ಪ್ರತಿಯೊಬ್ಬರೂ ರಾಶಿ ರಾಶಿ ಸುಳ್ಳು ಹೇಳಿದ್ದರು. ಈ ಚುನಾವಣೆಯಲ್ಲೂ ಹೊಸ ಹೊಸ ಸುಳ್ಳುಗಳನ್ನು ಬೆಳಿಗ್ಗೆ, ಮಧ್ಯಾಹ್ನ, ಸಂಜೆ, ರಾತ್ರಿ ಹೇಳುತ್ತಲೇ ಇರುತ್ತಾರೆ. ಇವುಗಳನ್ನು ಸರಿಯಾಗಿ ಕೌಂಟರ್ ಮಾಡಬೇಕು ಎಂದು ಹೇಳಿದ್ದಾರೆ.

ಉಪಚುನಾವಣೆ ಮುಗಿಯುವರೆಗೂ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರಮಾಣ ಇನ್ನೂ ಹೆಚ್ಚಲಿದೆ. ಈ ಬಗ್ಗೆಯೂ ನಾವು ಬಹಳ ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ.
ಜಾತಿ ಸಮೀಕ್ಷೆ, ಒಳ ಮೀಸಲಾತಿ, ಪಂಚಮಸಾಲಿ ಸಮುದಾಯದ ಬೇಡಿಕೆ ಕುರಿತಂತೆ ಎದುರಾಳಿ ಪಕ್ಷದವರು ಅಪಪ್ರಚಾರ ಮಾಡುತ್ತಾರೆ. ಈ ಎಲ್ಲ ವಿಚಾರಗಳ ಬಗ್ಗೆಯೂ ನಮ್ಮ ನಿಲುವು ಸ್ಪಷ್ಟವಾಗಿದ್ದು, ಆಯಾ ಸಮುದಾಯದ ಮುಖಂಡರು ಮತ್ತು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿ ನಮ್ಮ ಬೆಂಬಲ ಇರುವುದನ್ನು ಮನದಟ್ಟು ಮಾಡಿಸಿದ್ದೇವೆ. ಆದರೂ ಬಿಜೆಪಿ ಸರಣಿ ಸುಳ್ಳುಗಳ ಮೂಲಕ ಭಯಂಕರ ಅಪಪ್ರಚಾರ ಮಾಡುತ್ತದೆ. ಸುಳ್ಳುಗಳ ಹೊರತಾಗಿ ಬಿಜೆಪಿಗೆ ಬೇರೆ ಬಂಡವಾಳ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಒಟ್ಟಾರೆ ಮೂರೂ ಕ್ಷೇತ್ರಗಳ ಉಪಚುನಾವಣೆ ಬಹಳ ಮಹತ್ವದ್ದಾಗಿದ್ದು ನಾವು ಮೂರನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬರೂ ತಾವು ವಹಿಸಿಕೊಂಡ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸಚಿವರು, ಶಾಸಕರಿಗೆ ವಿಶೇಷ ಜವಾಬ್ದಾರಿ ಹೆಗಲಿಗೆ ನೀಡಿದ್ದಾರೆ.
ಸದ್ಯ ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೆ ಈ ಉಪಚುನಾವಣೆಗಳು ದೊಡ್ಡ ಸಂಕಷ್ಟ ತಂದೊಡ್ಡಿದೆ. ಈಗಾಗಲೇ ಶಿಗ್ಗಾಂವಿ ಕ್ಷೇತ್ರಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಪುತ್ರ, ಭರತ್ ಬೊಮ್ಮಾಯಿಗೆ ಟಿಕೆಟ್ ಫೈನಲ್ ಆಗಿದೆ. ಸಂಡೂರು ಕ್ಷೇತ್ರದಲ್ಲೂ ಬಿಜೆಪಿ ಬಂಗಾರು ಹನುಮಂತು ಅವರನ್ನು ಕಣಕ್ಕಿಳಿಸಿದೆ.
ಆದರೆ, ಚನ್ನಪಟ್ಟಣದಲ್ಲಿ ಅಭ್ಯರ್ಥಿ ಆಯ್ಕೆ ಇನ್ನೂ ಕಗ್ಗಂಟಾಗಿದೆ. ಮೂಲಗಳ ಪ್ರಕಾರ ಈ ಟಿಕೆಟ್ ಜೆಡಿಎಸ್ ಪಾಲಾಗುವ ಸಾಧ್ಯತೆ ಇದ್ದು, ಮತ್ತೊಂದೆಡೆ ಸಿ.ಪಿ.ಯೋಗೇಶ್ವರ್ ಅವರು ಸ್ಪರ್ಧೆಗೆ ಟೊಂಕ ಕಟ್ಟಿ ನಿಂತಿದ್ದಾರೆ. ಕಾಂಗ್ರೆಸ್ ಕೂಡ ಈ ಕ್ಷೇತ್ರಕ್ಕೆ ಪ್ರಬಲ ಅಭ್ಯರ್ಥಿಯನ್ನು ಇಳಿಸಲು ತಂತ್ರ ರೂಪಿಸಿದೆ.












Click it and Unblock the Notifications