ಸಂಪುಟ ವಿಸ್ತರಣೆ : ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್!
ಬೆಂಗಳೂರು, ಮೇ 24 : ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆರಂಭವಾಗಿದೆ.
ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ದೆಹಲಿಗೆ ಬರುವಂತೆ ಸೂಚನೆ ನೀಡಿದೆ. ಮೇ 26ರಂದು ದೆಹಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ, ಕೆಪಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆ ಮಹತ್ವದ ಸಭೆ ನಡೆಯಲಿದೆ.
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಲಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಮೇ 26ರ ಭಾನುವಾರ ನಾಯಕರು ಸಭೆ ನಡೆಸಲಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ಗೆ 22, ಜೆಡಿಎಸ್‌ಗೆ 12 ಸಚಿವ ಸ್ಥಾನಗಳು ದೊರೆಯಲಿವೆ.
ಯಾವ-ಯಾವ ಶಾಸಕರು ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟ ಸೇರಬೇಕು? ಎಂದು ದೆಹಲಿಯಲ್ಲಿ ಚರ್ಚೆ ನಡೆಯಲಿದೆ. ಸೋಮವಾರ ಅಥವ ಮಂಗಳವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ.
ಎಚ್.ಡಿ.ಕುಮಾರಸ್ವಾಮಿ ಅವರು ಮೇ 25ರ ಶುಕ್ರವಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ. ಬಳಿಕ ಸ್ಪೀಕರ್ ಆಯ್ಕೆ ನಡೆಯಲಿದೆ. ಜೆಡಿಎಸ್ ಪಕ್ಷದಲ್ಲೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆದ ಬಳಿಕ ಸಂಪುಟ ವಿಸ್ತರಣೆ ನಡೆಯಲಿದೆ.












Click it and Unblock the Notifications