ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರಿಗೆ ಕೊರೊನಾವೈರಸ್
ಬೆಂಗಳೂರು, ಏಪ್ರಿಲ್ 07: ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಐಎಎಸ್ ಅಧಿಕಾರಿ ದಿವಂಗತ ಡಿ.ಕೆ ರವಿ ಅವರ ಪತ್ನಿ ಕುಸುಮಾ ಹನುಮಂತರಾಯಪ್ಪ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
"ನನ್ನ ಕೊವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವ ಕಾರಣ ಮನೆಯಲ್ಲಿಯೇ ಐಸೋಲೇಟ್ ಆಗಿದ್ದು, ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ" ಎಂದು ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕರ್ನಾಟಕದಲ್ಲಿ 50 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ
ಮಹಾಮಾರಿ ಕೊರೊನಾ ಎರಡನೇ ಅಲೆಯು ತೀವ್ರತರವಾಗಿದ್ದು ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ ಕಾರ್ಯದರ್ಶಿ ಈಶ್ವರ್ ಖಂಡ್ರೆರಿಗೆ ಕೊವಿಡ್-19:
ಕರ್ನಾಟಕದ ಕಾಂಗ್ರೆಸ್ ಕಾರ್ಯದರ್ಶಿ ಈಶ್ವರ್ ಖಂಡ್ರೆ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ಮಂಗಳವಾರವಷ್ಟೇ ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿತ್ತು. "ಇಂದು ಸಣ್ಣ ಪ್ರಮಾಣದಲ್ಲಿ ರೋಗ ಲಕ್ಷಣಗಳು ಕಂಡು ಬಂದಿರುವ ಕಾರಣ ಕೊವಿಡ್-19 ಪರೀಕ್ಷೆಗೆ ಮಾಡಿಕೊಂಡಿದ್ದು ವರದಿ ಪಾಸಿಟಿವ್ ಎಂದು ಬಂದಿದ್ದು ಯಾರು ಆತಂಕ ಪಡುವ ಅಗತ್ಯವಿಲ್ಲ ಕೊವಿಡ್ ನಿಯಮಗಳ ಪ್ರಕಾರ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ" ಎಂದು ಈಶ್ವರ್ ಖಂಡ್ರೆ ಟ್ವೀಟ್ ಮಾಡಿದ್ದರು.
ಕರ್ನಾಟಕದಲ್ಲಿ ಕೊರೊನಾವೈರಸ್ ಪ್ರಕರಣ:
ರಾಜ್ಯದಲ್ಲಿ ಒಂದೇ ದಿನ 6976 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 35 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ 2794 ಸೋಂಕಿತರು ಗುಣಮುಖರಾಗಿದ್ದಾರೆ. ಕರ್ನಾಟಕದಲ್ಲಿ ಒಟ್ಟು 1033560ಕ್ಕೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ಈ ಪೈಕಿ 971556 ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಈವರೆಗೂ 12731 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 49254 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.