Congress: ಮಾರ್ಚ್ ಬಳಿಕ ಸಚಿವ ಸಂಪುಟ ವಿಸ್ತರಣೆ? ನನಗೆ ಮಂತ್ರಿ ಸ್ಥಾನ ಸಿಗುತ್ತೆ ಎಂದ ಕೈ ನಾಯಕ
ರಾಜ್ಯ ಕಾಂಗ್ರೆಸ್‌ನಲ್ಲಿ ಸದ್ದು ಮಾಡಿ ಸೈಲೆಂಟ್ ಆಗಿದ್ದ ಸಚಿವ ಸಂಪುಟ ವಿಸ್ತರಣೆ ವಿಚಾರವು ಮತ್ತೆ ಮುನ್ನೆಲೆಗೆ ಬಂದಿದೆ. ಸಚಿವ ಸಂಪುಟ ವಿಸ್ತರಣೆ, ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಮನಬಂದಂತೆ ಮಾತನಾಡಬೇಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಖಡಕ್ ಸೂಚನೆ ನೀಡಿದೆ. ಆದರೆ ಈ ಬಜೆಟ್ ಮಂಡನೆ ಬಳಿಕ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಖುದ್ದು ಕಾಂಗ್ರೆಸ್ ಸಚಿವನೇ ಸುಳಿವು ಕೊಟ್ಟಿದ್ದಾರೆ.
ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು ಈ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮಾರ್ಚ್ ತಿಂಗಳಿನಲ್ಲಿ ಕಾಂಗ್ರೆಸ್ ಸರ್ಕಾರ ಬಜೆಟ್ ಮಂಡಿಸಲಿದೆ. ಇದಾದ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಆಗ ನನಗೂ ಸಚಿವ ಸ್ಥಾನ ಸಿಗಲಿದೆ ಎಂದು ವಿನಯ್ ಕುಲಕರ್ಣಿ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ರಚನೆಯಾದಾಗಲೇ ಸಚಿವ ಸ್ಥಾನದ ಮೇಲೆ ವಿನಯ್ ಕಣ್ಣಿಟ್ಟಿದ್ದರು. ಆದರೆ, ಸಿಕ್ಕಿರಲಿಲ್ಲ. ಈಗ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದು, ನನಗೆ ಸಚಿವ ಸ್ಥಾನ ಕೊಡಲೇಬೇಕು, ಕೊಟ್ಟೇ ಕೊಡುತ್ತಾರೆ ಎಂದು ಶಾಸಕ ವಿನಯ ಕುಲಕರ್ಣಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾಗುತ್ತಾರೋ ಇಲ್ಲವೋ ಗೊತ್ತಿಲ್ಲ. ಸಿದ್ದರಾಮಯ್ಯ ಅವರನ್ನೇ ಸಿಎಂ ಆಗಿ ಮುಂದುವರಿಸುತ್ತಾರಾ ಎನ್ನುವ ಬಗ್ಗೆ ನಮಗೂ ಗೊತ್ತಿಲ್ಲ. ಹೈಕಮಾಂಡ್ ಈ ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ. ಹಿರಿಯ ನಾಯಕರು ಹೇಳಿದ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ಬಾಕಿ ಎಲ್ಲವೂ ಅವರಿಗೇ ಬಿಟ್ಟಿದ್ದು. ಹೈಕಮಾಂಡ್ ಏನೇ ತೀರ್ಮಾನ ತೆಗೆದುಕೊಂಡರೂ ನಾನು ಬದ್ಧ ಎಂದಿದ್ದಾರೆ.
ಸಿದ್ದರಾಮಯ್ಯನವರು ಆರ್ಥಿಕ ತಜ್ಞರಾಗಿ, ಹಣಕಾಸು ಸಚಿವರಾಗಿ ಕೆಲಸ ಮಾಡಿದ್ದಾರೆ. ಅವರ ಜಾಗದಲ್ಲಿ ಬೇರೆ ಯಾರಾದರೂ ಇದ್ದಿದ್ದರೆ ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸಲು ಆಗುತ್ತಿರಲಿಲ್ಲ. ಆದರೆ ಈಗ ಎಲ್ಲರಿಗೂ ಗ್ಯಾರಂಟಿ ಯೋಜನೆಗಳು ತಲುಪುತ್ತಿದ್ದು, ಎಲ್ಲ ಜಾತಿ, ಪಕ್ಷದವರಿಗೂ ನಮ್ಮ ಗ್ಯಾರಂಟಿ ಕೈಸೇರಿದೆ. ನಮ್ಮ ವಿರೋಧಿ ಬಿಜೆಪಿ ಪಕ್ಷದವರಿಗೂ ಗ್ಯಾರಂಟಿ ಯೋಜನೆಗಳು ತಲುಪಿವೆ ಎಂದು ಟಾಂಗ್ ನೀಡಿದ್ದಾರೆ.

ಮಾರ್ಚ್ ತಿಂಗಳ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಈ ಬಾರಿ ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ. ಇನ್ನು ರಾಜ್ಯದಲ್ಲಿ ದಲಿತ ಸಿಎಂ ವಿಚಾರ ಕೂಡ ಹೈಕಮಾಂಡ್‌ಗೆ ಬಿಟ್ಟಿದ್ದು. ನಮ್ಮ ಕಾಂಗ್ರೆಸ್‌ನಲ್ಲಿ ಯಾವುದೇ ಜಾತೀಯತೆ ಇಲ್ಲ. ಇಲ್ಲಿ ಅಲ್ಲಾ, ರಾಮ, ಸೀತೆ ಎಲ್ಲರೂ ಇದ್ದಾರೆ. ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ನಾನು ಅಷ್ಟು ದೊಡ್ಡವನೂ ಅಲ್ಲ ಎಂದು ವಿನಯ್ ಕುಲಕರ್ಣಿ ಹೇಳಿದ್ದಾರೆ.
ಈಗಾಗಲೇ ಪಕ್ಷದ ಕೆಲವರಿಗೆ ಸಚಿವ ಸಂಪುಟ ವಿಸ್ತರಣೆಯಾಗುವ ಮಾಹಿತಿ ಸಿಕ್ಕಿದೆ. ಸಚಿವ ಸ್ಥಾನ ಸಿಕ್ಕೆ ಸಿಗುತ್ತೆ ಎಂದು ಹಲವರು ವಿಶ್ವಾಸದಲ್ಲಿದ್ದರೆ, ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಾಗಿಯೇ ಇದೆ. ಈ ಹಿಂದೆಯೂ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಕಾಂಗ್ರೆಸ್‌ನ ಹಲವು ನಾಯಕರು ಆಸೆ ಬಿಚ್ಚಿಟ್ಟಿದ್ದರು. ಬಳಿಕ ಹೈಕಮಾಂಡ್ ಇದಕ್ಕೆ ಬ್ರೇಕ್ ಕೂಡ ಹಾಕಿತ್ತು. ಇನ್ನೇನು ಬಜೆಟ್ ಮಂಡನೆ ಬಳಿಕ ಸಿದ್ದರಾಮಯ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿಯಾಗುವ ಸಾಧ್ಯತೆ ಇದೆ.












Click it and Unblock the Notifications