ಖಾತೆ ಕಸರತ್ತು: ಖಾತೆ ಹಂಚಿಕೆಗೂ ದೆಹಲಿಯ ನಿರ್ಧಾರವೇ ಅಂತಿಮ; ಬಿ ವೈ ವಿಜಯೇಂದ್ರ

ಬೆಂಗಳೂರು: ಸಚಿವರ ಆಯ್ಕೆ ಮಾತ್ರವಲ್ಲ, ಯಾರಿಗೆ ಯಾವ ಖಾತೆ ನೀಡಬೇಕು ಎಂಬುದನ್ನೂ ದೆಹಲಿಯ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯಮಂತ್ರಿಗಳು ಮತ್ತೆ ಮತ್ತೆ ದೆಹಲಿಗೆ ತೆರಳಿ ಅನುಮೋದನೆ ಪಡೆಯಬೇಕಾದ ಪರಿಸ್ಥಿತಿ ರಾಜ್ಯದ ರಾಜಕೀಯ ಇತಿಹಾಸದಲ್ಲೇ ಅಪರೂಪವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ವಿಧಾನಸಭೆಯ ಸ್ಪೀಕರ್, ಉಪಸಭಾಧ್ಯಕ್ಷರು, ವಿಧಾನ ಪರಿಷತ್ತಿನ ಸಭಾಪತಿ ಹಾಗೂ ಉಪಸಭಾಪತಿ ಹುದ್ದೆಗಳ ಕುರಿತು ಎಐಸಿಸಿ ಲೆಟರ್‍ಹೆಡ್‍ನಲ್ಲಿ ನಿರ್ದೇಶನ ನೀಡಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಇಂತಹ ನಡೆ ವಿಧಾನಮಂಡಲದ ಸ್ವಾಯತ್ತತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವಂತದ್ದು ಎಂದು ವಿಜಯೇಂದ್ರ ತಿಳಿಸಿದರು.

Congress New Cabinet Delhi s decision on account allocation will be final Said BY Vijayendra

ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಕಾಂಗ್ರೆಸ್ ಸರ್ಕಾರ, ಸಚಿವ ಸಂಪುಟದಲ್ಲಿ ಒಬ್ಬ ಮಹಿಳೆಗೂ ಅವಕಾಶ ನೀಡಿಲ್ಲ. ಕೊನೆಯ ಕ್ಷಣದಲ್ಲಿ ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಕೈಬಿಡುವ ಮೂಲಕ ಮಹಿಳೆಯರ ಬಗ್ಗೆ ತನ್ನ ನಿಜವಾದ ಮನೋಭಾವವನ್ನು ಕಾಂಗ್ರೆಸ್ ಪ್ರದರ್ಶಿಸಿದೆ ಎಂದು ಟೀಕಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಚಾರ್ಜ್‍ಶೀಟ್ ಸಲ್ಲಿಕೆಯಾಗಿರುವ ಹಾಗೂ ನ್ಯಾಯಾಂಗ ಪ್ರಕ್ರಿಯೆ ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿರುವುದನ್ನು ವಿಜಯೇಂದ್ರ ಪ್ರಶ್ನಿಸಿದರು. ಭ್ರಷ್ಟಚಾರ ರಹಿತ ಆಡಳಿತದ ಬಗ್ಗೆ ಮಾತನಾಡುವ ಕಾಂಗ್ರೆಸ್ ತನ್ನದೇ ನೈತಿಕತೆಯನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದರು.

ಸಚಿವ ಸ್ಥಾನ ನೀಡದಿದ್ದರೆ ಕಾಂಗ್ರೆಸ್ ಹೈಕಮಾಂಡ್‍ಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸುವುದಾಗಿ ನಾಗೇಂದ್ರ ಅವರು ಬೆದರಿಕೆ ಹಾಕಿದ ಬಳಿಕವೇ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಕುರಿತು ಕಾಂಗ್ರೆಸ್ ನಾಯಕರು ಸಾರ್ವಜನಿಕರಿಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ಸಚಿವ ಸಂಪುಟ ವಿಸ್ತರಣೆ ಬಳಿಕ ಮಾಜಿ ಸಚಿವರು, ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರ ಹೇಳಿಕೆಯನ್ನು ತಾವು ಮತ್ತೊಮ್ಮೆ ಗಮನಿಸಬೇಕಾಗುತ್ತದೆ. ಹಿರಿಯ ಶಾಸಕ ತನ್ವೀರ್ ಸೇಠ್ ಅವರು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರಿಗೂ ಸಚಿವ ಸ್ಥಾನ ಸಿಕ್ಕಿದೆ ಎಂದಿದ್ದಾರೆ. ಮತ್ತೊಬ್ಬ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರು ನಾನು ಕಾಂಗ್ರೆಸ್ಸಿಗ ಎನ್ನಲೂ ನಾಚಿಕೆ ಆಗುತ್ತದೆ ಎಂದು ಹೇಳಿದ್ದಾರೆ. ಶಾಸಕ ಎಸ್.ಆರ್.ಶ್ರೀನಿವಾಸ್ ಅವರು, ನಾನೊಬ್ಬ ಸಾಮಾನ್ಯ ರೈತನ ಮಗ. ಯಾರ ತಲೆ ಒಡೆದೂ ಸಂಪಾದನೆ ಮಾಡಿಲ್ಲ. ಪೇಮೆಂಟ್ ಕೊಡಲಾಗದ ಕಾರಣ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯು ರಾಜ್ಯದ ಅಭಿವೃದ್ಧಿ, ಜನಹಿತ ಅಥವಾ ಉತ್ತಮ ಆಡಳಿತದ ಉದ್ದೇಶದಿಂದ ನಡೆದಿಲ್ಲ. ಅಧಿಕಾರದ ಹಂಚಿಕೆ, ಹಣಬಲ, ಗುಂಪುಗಾರಿಕೆ ಹಾಗೂ ಹೈಕಮಾಂಡ್ ರಾಜಕಾರಣದ ಫಲವಾಗಿ ಸಚಿವ ಸಂಪುಟ ವಿಸ್ತರಣೆ ನಡೆದಿದೆ ಆರೋಪಿಸಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ತಾವು ಆರಂಭದಿಂದಲೂ "ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ" ಎಂದು ಹೇಳಿದ್ದೆ. ಇಂದು ಕಾಂಗ್ರೆಸ್‍ನ ಹಿರಿಯ ನಾಯಕರು, ಮಾಜಿ ಸಚಿವರು ಮತ್ತು ಶಾಸಕರು ನೀಡಿರುವ ಬಹಿರಂಗ ಹೇಳಿಕೆಗಳೇ ತಮ್ಮ ಆರೋಪಕ್ಕೆ ಪುಷ್ಟಿ ನೀಡಿವೆ. ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನವೇ ಸಚಿವ ಸಂಪುಟ ರಚನೆಯ ಹಿಂದಿನ ವಾಸ್ತವವನ್ನು ಬಯಲಿಗೆಳೆಯುತ್ತಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+