ಮಹಿಳಾಧಿಕಾರಿಗೆ ಕಾಂಗ್ರೆಸ್ ಮುಖಂಡ ಧಮ್ಕಿ: ಯಾರೇ ಆಗಿದ್ರೂ ಕಾನೂನು ಕ್ರಮ ಎಂದ ಡಿ.ಕೆ.ಶಿವಕುಮಾರ್
ಚಿಕ್ಕಬಳ್ಳಾಪುರ: ಬ್ಯಾನರ್ ತೆರವು ಮಾಡಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿರುವ ವಿಚಾರ ರಾಜಕೀಯ ತಿರುವು ಪಡೆದುಕೊಂಡಿದೆ. ಈ ಘಟನೆ ಬಗ್ಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ತಮ್ಮದೇ ಪಕ್ಷದ ನಾಯಕನ ಈ ವರ್ತನೆ ಏನು ಕ್ರಮ ತೆಗೆದುಕೊಳ್ಳುತ್ತೀರಿ? ಎಂಬ ಪ್ರಶ್ನೆಗೆ, ಯಾರೇ ಆದರೂ ಕಾನೂನಿನ ಪ್ರಕಾರ ಕ್ರಮ ಜರುಗಲಿದೆ ಎಂದು ಹೇಳಿದ್ದಾರೆ.
ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಅಳವಡಿಸಲಾಗಿದ್ದ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಕ್ಕೆ ಸಂಬಂಧಿಸಿದಂತೆ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯ ಹಾಗೂ ಅಶ್ಲೀಲ ಶಬ್ದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿರುವುದು ಭಾರೀ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಆಡಳಿತಾಧಿಕಾರಿಯೊಬ್ಬರ ವಿರುದ್ಧ ಈ ರೀತಿ ವರ್ತನೆ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಹುಟ್ಟಿಸಿದೆ.

ನಗರಸಭೆ ವ್ಯಾಪ್ತಿಯಲ್ಲಿ ಕಾನೂನು ಪ್ರಕಾರ ಬ್ಯಾನರ್ ತೆರವು ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಇದರಿಂದ ಆಕ್ರೋಶಗೊಂಡ ರಾಜೀವ್ ಗೌಡ, ಪೌರಾಯುಕ್ತೆ ಅಮೃತಾ ಗೌಡ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಅವಮಾನಕಾರಿ ಪದಗಳನ್ನು ಬಳಸಿದ್ದಾರೆ ಎನ್ನಲಾಗಿದ್ದು, ಇದರ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಘಟನೆಯಿಂದ ಮಹಿಳಾ ಅಧಿಕಾರಿಗಳ ಭದ್ರತೆ ಹಾಗೂ ಗೌರವದ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, "ಯಾರೇ ಆಗಲಿ, ಯಾವ ಪಕ್ಷದವರೇ ಆಗಲಿ, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ.
ರಾಜೀವ್ ಗೌಡ ವಿರುದ್ಧ ದೂರು
ಪೌರಾಯುಕ್ತೆ ಅಮೃತಾ ಗೌಡ ಅವರ ದೂರಿನ ಮೇರೆಗೆ ರಾಜೀವ್ ಗೌಡ ವಿರುದ್ಧ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆದರಿಕೆ, ಅವಾಚ್ಯ ನಿಂದನೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಗಳ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಬೆಳಕಿಗೆ ಬಂದ ಬಳಿಕ, ವಿವಿಧ ಸಂಘಟನೆಗಳು ಹಾಗೂ ನಾಗರಿಕರು ಅಧಿಕಾರಿಯ ಪರವಾಗಿ ನಿಂತು, ಸಾರ್ವಜನಿಕ ಸೇವೆಯಲ್ಲಿರುವ ಮಹಿಳಾ ಅಧಿಕಾರಿಗಳಿಗೆ ರಕ್ಷಣೆ ಒದಗಿಸಬೇಕು ಮತ್ತು ರಾಜಕೀಯ ಒತ್ತಡಕ್ಕೆ ಮಣಿಯದೆ ಕಾನೂನು ಕ್ರಮಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಈ ಪ್ರಕರಣವು ಮುಂದಿನ ದಿನಗಳಲ್ಲಿ ರಾಜಕೀಯ ಹಾಗೂ ಆಡಳಿತಾತ್ಮಕ ವಲಯದಲ್ಲಿ ಇನ್ನಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.
ಬೆದರಿಕೆ ಹಾಕಿದ್ದೇನು?
ಬ್ಯಾನ್ ತೆರವು ಮಾಡಿದ್ದ ವಿಚಾರವಾಗಿ ಕಾಂಗ್ರೆಸ್ ಮುಖಂಡ ಮಹಿಳಾ ಅಧಿಕಾರಿಗೆ ದೂರವಾಣಿ ಕರೆ ಮಾಡಿ, ಬ್ಯಾನರ್ ತೆಗೆಸಿದವರನ್ನು 'ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಕಾರ್ಯಕರ್ತರನ್ನು ಕರೆಸಿ ದಂಗೆ ಎಬ್ಬಿಸುತ್ತೇನೆ ಎಂದು ಧಮ್ಕಿ ಹಾಕಿದ್ದೂ ಅಲ್ಲದೆ, ಮಹಿಳಾಧಿಕಾರಿಗೆ ಅಶ್ಲೀಲ ಪದಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಇದರ ಆಡಿಯೋ ಹಂಚಿಕೊಂಡಿದ್ದ ಜೆಡಿಎಸ್ ಹಾಗೂ ಬಿಜೆಪಿ, ಈ ಗೂಂಡಾ ವಿರುದ್ಧ ಕ್ರಮ ತೆಗೆದುಕೊಂಡು, ಪಕ್ಷದಿಂದ ವಜಾ ಮಾಡುವಂತೆ ಆಗ್ರಹಿಸಿವೆ.












Click it and Unblock the Notifications