ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ; ಸಮೀಕ್ಷೆ ಕುರಿತು ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಬೆಂಗಳೂರು, ಫೆಬ್ರವರಿ 14: ಲೋಕಸಭೆ ಚುನಾವಣೆ ಹಿನ್ನಲೆ ರಾಜ್ಯ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಅಭ್ಯರ್ಥಿಗಳ ಆಯ್ಕೆ, ಸಮೀಕ್ಷೆ ಸೇರಿದಂತೆ ಹಲವು ವಿಷಯಗಳ ಕುರಿತು ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಸೇರಿದಂತೆ ಹಲವು ನಾಯಕರು ಸಭೆ ನಡೆಸಿದ್ದಾರೆ.
ಇನ್ನೂ ಸಭೆಯ ಬಳಿಕ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಿ, ದೆಹಲಿಯಲ್ಲಿ ಸಭೆ ಮಾಡಲಿದ್ದೇವೆ ಎಂದು ಹೇಳಿದರು.

ಇಂದಿನ ಸಭೆಯಲ್ಲಿ ಪಕ್ಷದ ವೀಕ್ಷಕರು, ಜಿಲ್ಲಾ ಮಂತ್ರಿಗಳು, ಕೆಲವು ಕಾರ್ಯಕರ್ತರು ಸಲ್ಲಿಸಿದ್ದ ವರದಿ ಹಾಗೂ ನಮ್ಮ ಸಮೀಕ್ಷೆ ವರದಿಗಳನ್ನು ಪರಾಮರ್ಶೆ ಮಾಡಿದ್ದೇವೆ. ಮತ್ತೊಂದು ಸುತ್ತಿನ ಸಮೀಕ್ಷೆ ಮೂಲಕ ಅಭಿಪ್ರಾಯ ಸಂಗ್ರಹಕ್ಕೆ ಸೂಚಿಸಿದ್ದೇವೆ. ಪಕ್ಷದ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮವಾಗಿಲ್ಲ, ಮುಂದಿನ ಸುತ್ತಿನ ಸಭೆಯನ್ನು ದೆಹಲಿಯಲ್ಲಿ ನಡೆಸಲಾಗುವುದು. ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರಿನಲ್ಲೇ ಸಭೆ ಮಾಡಲಾಗಿದೆ.
ಈ ತಿಂಗಳೊಳಗಾಗಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆಯೇ ಎಂದು ಕೇಳಿದಾಗ, "ಆದಷ್ಟು ಬೇಗ ಅಂತಿಮಗೊಳಿಸಬೇಕು. ಶೇ. 50 ರಷ್ಟು ಅಭ್ಯರ್ಥಿಗಳಿಗಾದರೂ ಕೆಲಸ ಆರಂಭಿಸಲು ನಾವು ಸೂಚನೆ ನೀಡಬೇಕಿದೆ. ಎಷ್ಟು ಕ್ಷೇತ್ರಗಳಲ್ಲಿ ಓರ್ವ ಆಕಾಂಕ್ಷಿಗಳಿದ್ದಾರೆ ಎಂದು ಕೇಳಿದಾಗ, "ನಾವು ಇನ್ನು ಆ ವಿಚಾರವಾಗಿ ಚರ್ಚೆ ಮಾಡಿಲ್ಲ. ನಾವು ಕೇವಲ ನಮಗೆ ಬಂದಿರುವ ವರದಿಗಳು, ಅಭಿಪ್ರಾಯದ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಎಐಸಿಸಿಗೆ ಕಳಿಸಲಾಗಿರುವ ಪಟ್ಟಿ ಬಗ್ಗೆ ಗೊಂದಲವಿದೆಯೇ ಎಂದು ಕೇಳಿದಾಗ, "ಇದೆಲ್ಲವೂ ಸುಳ್ಳು, ನಾವು ಎಐಸಿಸಿಗೆ ಯಾವುದೇ ಪಟ್ಟಿ ನೀಡಿಲ್ಲ. ಮುಖ್ಯಮಂತ್ರಿಗಳಿಗೆ ವಿವಿಧ ವರದಿಗಳು, ಅಭಿಪ್ರಾಯಗಳ ಕುರಿತ ಅಧಿಕೃತ ಪಟ್ಟಿಯನ್ನು ಇವತ್ತಷ್ಟೇ ನೀಡಿದ್ದೇನೆ. ನಾವು ನಮ್ಮ ಪಟ್ಟಿಯನ್ನು ಗೌಪ್ಯವಾಗಿಡಬೇಕು, ಆ ಕೆಲಸ ಮಾಡುತ್ತೇವೆ ಎಂದರು. ಸಚಿವರ ಸ್ಪರ್ಧೆ ಕುರಿತು ಮಾತನಾಡಿ, ರಾಜಕೀಯದಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು. ಎಲ್ಲರಿಗೂ ಅವಕಾಶವಿರುತ್ತದೆ. ಪಕ್ಷ ಗೆಲ್ಲುವುದು ಮುಖ್ಯ ಎಂದರು.












Click it and Unblock the Notifications