ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಟಾಸ್ಕ್; 20+ ಟಾರ್ಗೆಟ್ ತಪ್ಪಿದ್ರೆ ಕೈ ತಪ್ಪುತ್ತಾ ಸಚಿವಸ್ಥಾನ?
ಬೆಂಗಳೂರು, ನವೆಂಬರ್ 16: ವಿಧಾನಸಭಾ ಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್, ಇದೀಗ ಲೋಕಸಭಾ ಚುನಾವಣೆಗೂ ಹಲವು ತಂತ್ರಗಾರಿಕೆಯನ್ನ ನಡೆಸುತ್ತಿದೆ. ಇತ್ತ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು, ಕಾಂಗ್ರೆಸ್ ಗೆ ಸೋಲಿನ ರುಚಿ ತೋರಿಸಲು ರಣತಂತ್ರ ರೂಪಿಸಿದೆ.
ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ ಗೆ ಈ ಬಾರೀಯ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲಬೇಕು ಎಂದು ಟಾರ್ಗೆಟ್ ನೀಡಿದೆ. ಅಲ್ಲದೇ ಕರ್ನಾಟಕ ಕಾಂಗ್ರೆಸ್ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಜೊತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆ ನಡೆಸಿದ್ದು, ಲೋಕಸಭಾ ಚುನಾವಣೆ ಕುರಿತು ಚರ್ಚಿಸಿದ್ದಾರೆ.

ಈ ಹಿಂದೆ 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಕ್ಷೇತ್ರದಲ್ಲಿ ಜಯಗಳಿಸುವ ಮೂಲಕ ಹೀನಾಯವಾಗಿ ಸೋಲು ಕಂಡಿತ್ತು. ಹೀಗಾಗಿ ಈ ಬಾರೀ 135 ವಿಧಾನಸಭಾ ಕ್ಷೇತ್ರಗಳನ್ನ ಕಾಂಗ್ರೆಸ್ ಗೆಲುವು ಸಾಧಿಸಿದೆ. ಅಲ್ಲದೇ ಪಂಚ ಗ್ಯಾರಂಟಿಗಳನ್ನ ಜಾರಿಗೊಳಿಸಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲೂ ಹೆಚ್ಚು ಸ್ಥಾನಗಳನ್ನ ಗೆಲ್ಲಬಹುದು ಎಂಬ ವಿಶ್ವಾಸದಲ್ಲಿರುವ ಕಾಂಗ್ರೆಸ್ ಸಚಿವ ಸಂಪುಟದ ಮಂತ್ರಿಗಳಿಗೆ ಟಾರ್ಗೆಟ್ ನೀಡಿದೆ.
ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ನಾಯಕರು ಎಲ್ಲಾ ಮಂತ್ರಿಗಳನ್ನ ಲೋಕಸಭಾ ಚುನಾವಣಾ ದೃಷ್ಟಿಯಿಂದ ಪ್ರತಿಯೊಂದು ಲೋಕಸಭೆಗೂ ವೀಕ್ಷಕರನ್ನಾಗಿ ನೇಮಿಸಲಾಗಿದೆ. ಇವರು ಯಾರು ಅಭ್ಯರ್ಥಿಯಾಗಬೇಕು ಎಂಬ ಬಗ್ಗೆ ಕ್ಷೇತ್ರದಲ್ಲಿ ಸ್ಥಳೀಯ ಮುಖಂಡರ ಅಭಿಪ್ರಾಯವನ್ನ ಸಂಗ್ರಹಿಸಬೇಕು ಅಲ್ಲದೇ, ಕ್ಷೇತ್ರದಲ್ಲಿರುವ ಅಸಮಾಧಾನವನ್ನ ಶಮನಗೊಳಿಸುವ ಮೂಲಕ ಪಕ್ಷ ಸಂಘಟನೆಯನ್ನ ನಡೆಸಬೇಕು. ಇನ್ನೂ ಒಂದೊಂದು ಕ್ಷೇತ್ರಕ್ಕೂ ಮೂರು ಅಭ್ಯರ್ಥಿಗಳ ಹೆಸರನ್ನ ಸಲ್ಲಿಸಬೇಕು.
ಅಲ್ಲದೇ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಯ ಆಯ್ಕೆ ನಂತರ ಆ ಕ್ಷೇತ್ರದ ಚುನಾವಣಾ ಉಸ್ತುವಾರ ಆಯಾ ಸಚಿವರ ಹೆಗಲಗೆ ಆ ಜವಾಬ್ದಾರಿಯನ್ನ ನೀಡಲಾಗಿರುತ್ತದೆ. ಚುನಾವಣಾ ಪ್ರಚಾರ, ಗ್ಯಾರಂಟಿ ಯೋಜನೆಗಳ ಮಹತ್ವ, ಗ್ಯಾರಂಟಿ ಯೋಜನೆಗಳನ್ನ ಜನರಿಗೆ ತಲುಪಿಸುವ ಮೂಲಕ ಜನರಿಗೆ ಹತ್ತಿರವಾಗುವಂತಹ ಹಾಗೂ ಚುನಾವಣೆಯ ಎಲ್ಲಾ ಜವಾಬ್ದಾರಿಯನ್ನ ಮಂತ್ರಿಗಳನ್ನ ನೀಡುವ ಮೂಲಕ ಆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನ ಗೆಲ್ಲಿಸಿಕೊಂಡು ಬರುವಂತಹ ಟಾಸ್ಕ್ ಹೈಕಮಾಂಡ್ ನೀಡಿದೆ. ಒಂದು ವೇಳೆ ಹೈಕಮಾಂಡ್ ಕೊಟ್ಟಿರುವ ಟಾರ್ಗೆಟ್ ನ ಮಂತ್ರಿ ಸರಿಯಾಗಿ ನಿರ್ವಹಿಸದೇ ಸೋಲು ಕಂಡರೇ ಸಚಿವ ಸ್ಥಾನ ಕೈ ತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಲೋಕಸಭಾ ಚುನಾವಣೆಯನ್ನ ಪ್ರತಿಯೊಬ್ಬ ಸಚಿವರು ಗಂಭೀರವಾಗಿ ಪರಿಗಣಿಸಿದ್ದಾರೆ ಎನ್ನಲಾಗಿದೆ.

ಲೋಕಸಭಾ ಚುನಾವಣೆ ತಯಾರಿ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
ಲೋಕಸಭೆ ಚುನಾವಣೆಯಲ್ಲಿ ಆಯಾ ಸಚಿವರುಗಳಿಗೆ ತಮ್ಮ ಉಸ್ತುವಾರಿ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಆದರೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಆಯಾ ಸಚಿವರಿಗೆ ಆ ಜಿಲ್ಲೆ ಜವಾಬ್ದಾರಿ ನೀಡಿಲ್ಲ. ಭೈರತಿ ಸುರೇಶ್ ಅವರು ಕೋಲಾರ ಉಸ್ತುವಾರಿಗಳು, ಆದರೆ ಅಭ್ಯರ್ಥಿ ಆಯ್ಕೆ ಸಂಬಂಧ ಅವರಿಗೆ ಮಂಡ್ಯ ಹಾಗೂ ಮೈಸೂರು ಜಿಲ್ಲೆ ನೀಡಲಾಗಿದೆ. ಹಾಸನ ಉಸ್ತುವಾರಿ ರಾಜಣ್ಣ ಅವರಿಗಿದ್ದರೂ ಅಭ್ಯರ್ಥಿ ಆಯ್ಕೆ ಜವಾಬ್ದಾರಿಯನ್ನು ಚೆಲುವರಾಯಸ್ವಾಮಿ ಅವರಿಗೆ ನೀಡಿದ್ದೇವೆ.
ರಾಮನಗರ ಉಸ್ತುವಾರಿ ರಾಮಲಿಂಗಾ ರೆಡ್ಡಿ ಅವರಿದ್ದರೂ ವೆಂಕಟೇಶ್ ಅವರಿಗೆ ಜವಾಬ್ದಾರಿ ನೀಡಿದ್ದೇವೆ. ಜಾರ್ಜ್ ಅವರು ಕೇಂದ್ರ ಚುನಾವಣಾ ಸಮಿತಿಯಲ್ಲಿರುವ ಕಾರಣ ಅವರಿಗೆ ಈ ಜವಾಬ್ದಾರಿ ನೀಡಿಲ್ಲ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಸಚಿವರುಗಳು ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮೂರ್ನಾಲ್ಕು ದಿನ ಅಥವಾ ಒಂದು ವಾರದಲ್ಲಿ ವರದಿ ನೀಡುವಂತೆ ತಿಳಿಸಿದ್ದೇವೆ. ಪ್ರತಿ ಲೋಕಸಭೆ ಕ್ಷೇತ್ರದಿಂದ 3 ಸಂಭಾವ್ಯ ಅಭ್ಯರ್ಥಿಗಳ ಹೆಸರು ನೀಡುವಂತೆ ಸೂಚಿಸಿದ್ದು, ನಂತರ ನಾವು ಈ ಹೆಸರುಗಳ ಬಗ್ಗೆ ಸಮೀಕ್ಷೆ ಮಾಡಿಸುತ್ತೇವೆ ಎಂದು ತಿಳಿಸಿದರು.
ಇನ್ನೂ ಲೋಕಸಭಾ ಚುನಾವಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟದ ಸಚಿವರ ಜೊತೆಗೆ ಸಭೆಯನ್ನ ನಡೆಸಿದ್ದು, ಪ್ರತಿ ಜಿಲ್ಲೆಗೆ ಓರ್ವ ಮಂತ್ರಿಯನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಕ್ಷೇತ್ರದ ಕುರಿತು ಜವಾಬ್ದಾರಿಯನ್ನೂ ವಹಿಸಲಾಗಿದೆ ಎಂದು ಹೇಳಿದ್ದಾರೆ.












Click it and Unblock the Notifications