ಪೆಟ್ರೋಲ್, ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ರಾಜ್ಯವ್ಯಾಪಿ ಪ್ರತಿಭಟನೆ
ಬೆಂಗಳೂರು, ಮಾ. 31: ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೆಪಿಸಿಸಿ ವತಿಯಿಂದ ಬೆಂಗಳೂರು ಸಹಿತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಬೆಂಗಳೂರಿನ ಕೆಪಿಸಿಸಿ ಕಚೇರಿ ಎದಿರು ಗುರುವಾರ ಹಮ್ಮಿಕೊಂಡಿದ್ದ "ಬೆಲೆಯೇರಿಕೆ ಮುಕ್ತ ಭಾರತ ಅಭಿಯಾನ" ಕ್ಕೆ ಚಾಲನೆ ನೀಡಲಾಯಿತು. ಸಿಲಿಂಡರ್‌ಗಳಿಗೆ ಹಾರ ಹಾಕಿ ಬೆಲೆ ಏರಿಕೆಯನ್ನು ಖಂಡಿಸಲಾಯಿತು. ದೇಶವ್ಯಾಪಿ ಪ್ರತಿಭಟನೆ ನಡೆಯುತ್ತಿದ್ದು, ಕರ್ನಾಟಕದಲ್ಲಿಯೂ ಪ್ರತಿಭಟನೆಯ ಕಾವು ಜೋರಾಗಿತ್ತು.

ಕೆಪಿಸಿಸಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಧ್ರುವನಾರಾಯಣ್, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.

ಮೋದಿಯ ಮುಖವಾಡ ಹೊಂದಿದ್ದ ಚಾಲಕನ ಬೈಕ್‌ಗೆ ಡಿ.ಕೆ. ಶಿವಕುಮಾರ್ ಹಾರ ಹಾಕಿ, ಆರತಿ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಪೋಸ್ಟರ್ ಅನ್ನು ತಲೆಯ ಮೇಲೆ ಹೊತ್ತರು.

ಇದಕ್ಕೂ ಮುನ್ನ ಶಿವಕುಮಾರ್ ಸದಾಶಿವನಗರದ ತಮ್ಮ ಮನೆಯಲ್ಲಿ ಸಿಲಿಂಡರ್‌ಗೆ ಹಾರ ಹಾಕುವ ಮೂಲಕ ಗ್ಯಾಸ್ ಸಿಲಿಂಡರ್ ದರ ಏರಿಕೆಯನ್ನು ಖಂಡಿಸಿದರು.












Click it and Unblock the Notifications