ಮಾಧುಸ್ವಾಮಿಗೆ ಗಾಳ ಹಾಕಿದ ಕಾಂಗ್ರೆಸ್; ಮತ್ತೆ ಸೋಲಿನ ಸುಳಿಯಲ್ಲಿ ವಿ ಸೋಮಣ್ಣ?
ತುಮಕೂರು, ಏಪ್ರಿಲ್ 08: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ಬಿಜೆಪಿ ಹೈಕಮಾಂಡ್ ತೀವ್ರ ಪೈಪೋಟಿಯ ನಡುವೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಿದೆ. ಇತ್ತ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಧುಸ್ವಾಮಿಗೆ ಟಿಕೆಟ್ ಕೈ ತಪ್ಪಿದ್ದು, ಇದೀಗ ಕಾಂಗ್ರೆಸ್ ಗಾಳ ಹಾಕಿದೆ.
ಹೌದು, ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ತುಮಕೂರಿನಿಂದ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದೆ. ಲೋಕಸಭಾ ಚುನಾವಣೆಯ ಟಿಕೆಟ್ ಹಂಚಿಕೆಯ ವಿಚಾರದಲ್ಲಿ ತುಮಕೂರು ಕ್ಷೇತ್ರದಲ್ಲಿ ಭಿನ್ನಮತ ಜೋರಾಗಿ ಸದ್ದು ಮಾಡುತ್ತಿದೆ. ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದ ಮಾಧುಸ್ವಾಮಿ ಅವರು ಈ ಹಿಂದೆ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವುದಿಲ್ಲ ಎಂದು ಅಸಮಾಧಾನ ಹೊರಹಾಕಿದ್ರು.

ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಮಾಜಿ ಸಚಿವ ಮಾಧುಸ್ವಾಮಿ ಅವರು ಸಹ ಬೇಡಿಕೆ ಇಟ್ಟಿದ್ರು. ಆದರೆ, ಬಿಜೆಪಿ ಹೈಕಮಾಂಡ್ ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ಮಣೆ ಹಾಕಿದ್ದು, ಹೈಕಮಾಂಡ್ ನಿರ್ಧಾರಕ್ಕೆ ಮಾಧುಸ್ವಾಮಿ ತೀವ್ರ ಅಸಮಾಧಾನ ಹೊರ ಹಾಕಿರುವ ಮಾಜಿ ಸಚಿವ ಮಾಧುಸ್ವಾಮಿ ಅವರು ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದೆ. ತುಮಕೂರಲ್ಲಿ ವಿ ಸೋಮಣ್ಣ ಅವರಿಗೆ ಟಿಕೆಟ್ ನೀಡಿರುವುದರಿಂದ ಅಸಮಾಧಾನಗೊಂಡಿರುವ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.
ಇನ್ನೂ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ಸಂಪರ್ಕದಲ್ಲಿರುವ ಮಾಧುಸ್ವಾಮಿ ಕೆಲ ದಿನಗಳ ಹಿಂದೆಯಷ್ಟೇ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಅವರನ್ನ ಭೇಟಿಯಾಗಿ ಸುದೀರ್ಘ ಕಾಲ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇತ್ತ ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಇದೀಗ ಮಾಧುಸ್ವಾಮಿ ಕಾಂಗ್ರೆಸ್ ಸೇರ್ಪಡೆಯಾದರೇ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ವಿ ಸೋಮಣ್ಣ ಅವರು ಮತ್ತೊಮ್ಮೆ ಸೋಲಿನ ಸುಳಿಯಲ್ಲಿ ಸಿಲುಕಿಕೊಳ್ಳುತ್ತಾರಾ ಎಂಬ ಅನುಮಾನ ಶುರುವಾಗಿದೆ.
ಲೋಕಸಭೆ ಚುನಾವಣೆ ಮತದಾನಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆ ಬಿಜೆಪಿ ನಾಯಕ ಮಾಧುಸ್ವಾಮಿ ಅವರ ನಡೆಯಿಂದಾಗಿ ವಿ. ಸೋಮಣ್ಣಗೆ ತಲೆನೋವು ಶುರುವಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿಗೆ ತುಮಕೂರು ಜಿಲ್ಲೆಯಲ್ಲಿ ಅಪಸ್ವರ ಕೇಳಿಬಂದಿದ್ದು, ಹೈಕಮಾಂಡ್ ನಾಯಕರು ಈ ಕುರಿತು ಚರ್ಚೆ ನಡೆಸಿದರು ಸಹ ಕೆಳಮಟ್ಟದಲ್ಲಿ ಹೊಂದಾಣಿಕೆ ಆಗುತ್ತಿಲ್ಲ. ಮಾಧುಸ್ಚಾಮಿ ಅಸಮಧಾನ ಬೆನ್ನಲ್ಲೇ ಜೆಡಿಎಸ್ನಲ್ಲೂ ಭಿನ್ನಮತ ಶುರುವಾಗಿದ್ದು, ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ ಸೋಮಣ್ಣ ಅವರಿಗೆ ಈ ಬಾರಿಯ ಚುನಾವಣೆಯೂ ಸಹ ಅಗ್ನಿ ಪರೀಕ್ಷೆಯಂತಾಗಿದೆ.












Click it and Unblock the Notifications