ಕಾಂಗ್ರೆಸ್ ಸರ್ಕಾರದಲ್ಲಿ ಜಗದೀಶ್ ಶೆಟ್ಟರ್‌ಗೆ ಮಹತ್ವದ ಹುದ್ದೆ ಫಿಕ್ಸ್- ಇನ್‌ಸೈಡ್ ರಿಪೋರ್ಟ್
ಬೆಂಗಳೂರು, ಮೇ 16: ಕರ್ನಾಟಕ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು. ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಅವರು ವಿರುದ್ಧ ಪರಾಭಾವಗೊಂಡರು. ಆದರೂ, ಜಗದೀಶ್ ಶೆಟ್ಟರ್ ಅವರಿಗೆ ಸರ್ಕಾರದಲ್ಲಿ ಮಹತ್ವದ ಸ್ಥಾನ ನೀಡಲು ಕಾಂಗ್ರೆಸ್ ನಿರ್ಧರಿಸಿದೆ.
ಶೆಟ್ಟರ್ ಅವರು ಆರು ಬಾರಿ ಶಾಸಕರಾಗಿದ್ದಾರೆ ಮತ್ತು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷರಾಗಿದ್ದಾರೆ. ಅವರು ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಅವರು ಹುಬ್ಬಳ್ಳಿ-ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮಹೇಶ ಟೆಂಗಿನಕಾಯಿ ವಿರುದ್ಧ 34,289 ಮತಗಳ ಅಂತರದಿಂದ ಸೋತಿದ್ದಾರೆ.

ಶೆಟ್ಟರ್ ಅವರು ತಮ್ಮ ವಿಧಾನಸಭೆ ಕ್ಷೇತ್ರವನ್ನು ಗೆಲ್ಲಲು ಸಾಧ್ಯವಾಗದಿದ್ದರೂ, ಉತ್ತರ ಕರ್ನಾಟಕದ ಲಿಂಗಾಯತ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಅವರ ವರ್ಚಸ್ಸಿದೆ. ಇದು ಹಲವು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲು ಕಾರಣವಾಯಿತು. ಹೀಗಾಗಿ ಬಿಜೆಪಿ ಹೀನಾಯವಾಗಿ ಸೋತಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಶೆಟ್ಟರ್ ಅವರು ಬಿಜೆಪಿಯಿಂದ ಹೊರ ಬಂದಿದ್ದು ಲಿಂಗಾಯತ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಕಾರಣವಾಗಿದೆ. ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಕಾಂಗ್ರೆಸ್ ಹಿರಿಯರು ಈಗಾಗಲೇ ಪಕ್ಷದ ರಾಜ್ಯ ನಾಯಕತ್ವಕ್ಕೆ ಸೂಚನೆ ನೀಡಿದ್ದಾರೆ.
ಬೊಮ್ಮಾಯಿ ಅವರಿಗಿಂತ ಕಿರಿಯರು ಎಂಬ ಕಾರಣಕ್ಕೆ ಶೆಟ್ಟರ್ ಅವರು ಬಸವರಾಜ ಬೊಮ್ಮಾಯಿ ಅವರ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಯಾವುದೇ ಸ್ಥಾನಮಾನ ಸ್ವೀಕರಿಸಿರಲಿಲ್ಲ. ಕೆಲವೇ ದಿನಗಳಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಕಾಂಗ್ರೆಸ್ ಸರ್ಕಾರದಲ್ಲಿ ಶೆಟ್ಟರ್‌ಗೆ ಸ್ಥಾನ ಕಲ್ಪಿಸಲು ಕಾಂಗ್ರೆಸ್ ತೀವ್ರ ಪ್ರಯತ್ನ ನಡೆಸುತ್ತಿದೆ.

ಕಾಂಗ್ರೆಸ್ ಪಕ್ಷದ ಮೂಲಗಳು ಪಕ್ಷದ ಹಿರಿಯ ನಾಯಕರು ಮಾಜಿ ಮುಖ್ಯಮಂತ್ರಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಮತ್ತು ಅವರು ಮತ್ತೆ ಬೆಂಗಳೂರಿನಲ್ಲಿಯೇ ಇದ್ದಾರೆ ಎಂದು ತಿಳಿಸಿವೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಶೆಟ್ಟರ್, 'ನಾನು ಬೇಷರತ್ತಾಗಿ ಕಾಂಗ್ರೆಸ್‌ಗೆ ಸೇರಿದ್ದೇನೆ ಮತ್ತು ನಾನು ಯಾವ ಹುದ್ದೆಗಳನ್ನು ಏರಲಿದ್ದೇನೆ ಬಗ್ಗೆ ನನ್ನ ಬಳಿ ಉತ್ತರವಿಲ್ಲ' ಎಂದು ಹೇಳಿದರು.
ಆದಾಗ್ಯೂ, ಮಾಜಿ ಮುಖ್ಯಮಂತ್ರಿಗೆ ಹೊಸ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗುವುದು ಅಥವಾ ಪಕ್ಷದ ಕಾರ್ಯಾಧ್ಯಕ್ಷ ಹುದ್ದೆಗೆ ಅವರನ್ನು ಪರಿಗಣಿಸಬಹುದು ಎಂದು ಹಿರಿಯ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.
ಕಾಂಗ್ರೆಸ್ ಮೂಲಗಳ ಪ್ರಕಾರ ಶೆಟ್ಟರ್ ಅವರು ರಾಜ್ಯದ ಹಿರಿಯ ನಾಯಕರಾದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತು ಇತರರೊಂದಿಗೆ ಅತ್ಯುತ್ತಮ ಬಾಂಧವ್ಯವನ್ನು ಹೊಂದಿದ್ದಾರೆ.












Click it and Unblock the Notifications