ಸಂಪುಟ ಪುನಾರಚನೆಗೆ ತಾತ್ಕಾಲಿಕ ತಡೆ, ವಿಸ್ತರಣೆಗೆ ಹಸಿರು ನಿಶಾನೆ
ಬೆಂಗಳೂರು, ಮೇ 31 : ಸಂಪುಟ ಪುನಾರಚನೆಯಿಂದ ಕಾಂಗ್ರೆಸ್‌ನಲ್ಲಿ ಅತೃಪ್ತಿ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ, ಕರ್ನಾಟಕ ಕಾಂಗ್ರೆಸ್ ಸಂಪುಟ ವಿಸ್ತರಣೆಯನ್ನು ಮಾತ್ರ ಮಾಡಲು ತೀರ್ಮಾನ ಕೈಗೊಂಡಿದೆ. ರಾಜ್ಯದ ಮೈತ್ರಿ ಸರ್ಕಾರದಲ್ಲಿ 3 ಸಚಿವ ಸ್ಥಾನ ಖಾಲಿ ಇದೆ.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ಚರ್ಚೆ ನಡೆದಿದೆ. ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಆಗಿದೆ. ಆಗಲೇ ಸಚಿವ ಸ್ಥಾನ ಕಿತ್ತುಕೊಳ್ಳಲು ಕೆಲವು ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಚಿವ ಸಂಪುಟ ಪುನಾರಚನೆಗೆ ಕೈ ಹಾಕಿದರೆ ಸಚಿವ ಸ್ಥಾನ ಕಳೆದುಕೊಂಡವರು, ಸಚಿವ ಸ್ಥಾನ ಸಿಗದವರು ಬಂಡಾಯ ಏಳುವ ಸಾಧ್ಯತೆ ಇದೆ. ಆದ್ದರಿಂದ, ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಿ, ಸೆಪ್ಟೆಂಬರ್ ಬಳಿಕ ಸಂಪುಟ ಪುನಾರಚನೆ ಮಾಡಲು ತೀರ್ಮಾನಿಸಲಾಗಿದೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲಾ ಸಚಿವರು ತಮ್ಮ ಇಲಾಖೆಯಲ್ಲಿ ಮಾಡಿರುವ ಕೆಲಸಗಳ ಬಗ್ಗೆ ವೈಯಕ್ತಿಕವಾಗಿ ವಿವರಣೆ ನೀಡಿದ್ದಾರೆ. ಮೈತ್ರಿ ಧರ್ಮ ಪಾಲನೆ ಮಾಡಬೇಕು, ಪುನಾರಚನೆ ನಡೆಯದೇ ಹೋದರೂ ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ರಾಜ್ಯ ನಾಯಕರು ಸಚಿವರಿಗೆ ಸೂಚನೆ ನೀಡಿದ್ದಾರೆ.....

ಕಾಂಗ್ರೆಸ್ ತೀರ್ಮಾನವೇನು?
ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಕಳೆದಿದೆ. ಆದ್ದರಿಂದ, ಸದ್ಯಕ್ಕೆ ಸಂಪುಟ ಪುನಾರಚನೆ ಬೇಡ ಎಂದು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಮಾಹಿತಿ ನೀಡಿಲಾಗಿದೆ. ಆದರೆ, ಸಂಪುಟದಲ್ಲಿ ಖಾಲಿ ಇರುವ ಮೂರು ಸ್ಥಾನಗಳನ್ನು ಭರ್ತಿ ಮಾಡಲು ಕಾಂಗ್ರೆಸ್ ಬಯಸಿದೆ.

ಹಿರಿಯ ನಾಯಕರನ್ನು ಕೈ ಬಿಡುವುದು
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ 5 ವರ್ಷ ಸಚಿವರಾಗಿದ್ದು, ಈಗ ಪುನಃ ಮೈತ್ರಿ ಸರ್ಕಾರದಲ್ಲಿರುವ ಸಚಿವರನ್ನು ಕೈ ಬಿಡಲು ಕಾಂಗ್ರೆಸ್ ಬಯಸಿದೆ. ಆರ್.ವಿ.ದೇಶಪಾಂಡೆ, ಕೃಷ್ಣ ಬೈರೇಗೌಡ, ಯು.ಟಿ.ಖಾದರ್, ಕೆ.ಜೆ.ಜಾರ್ಜ್ ಅವರನ್ನು ಕೈ ಬಿಡುವ ಕುರಿತು ಚರ್ಚೆ ನಡೆದಿದೆ.

ದಿನೇಶ್ ಗುಂಡೂರಾವ್ ಹೇಳಿಕೆ
'ಸಂಪುಟ ವಿಸ್ತರಣೆ ಅಥವ ಪುನಾರಚನೆ ಬಗ್ಗೆ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ. ಸದ್ಯ ಸರ್ಕಾರ ಕೆಲಸಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಣೆ ಮಾಡುವಂತೆ ಸಚಿವರಿಗೆ ಸೂಚನೆ ನೀಡಿದ್ದೇನೆ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕೆ.ಜೆ.ಜಾರ್ಜ್ ಹೇಳಿದ್ದೇನು?
'ಸಂಪುಟ ಪುನಾರಚನೆ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಹಿರಿಯ ಸಚಿವರನ್ನು ಕೈ ಬಿಡುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ' ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.












Click it and Unblock the Notifications