ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ: HDK
ಬೆಂಗಳೂರು, ಜುಲೈ 22: ರಾಜ್ಯದಲ್ಲಿ ನಂದಿನ ಹಾಲಿನ ಬೆಲೆ ಏರಿಕೆ ಮಾಡಿರುವ ಸರ್ಕಾರದ ನಿರ್ಧಾರವನ್ನು ಖಂಡಿಸಿರುವ ಜೆಡಿಎಸ್ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ ಅವರು ಆಡಳಿತರೂಢ ಕಾಂಗ್ರೆಸ್ ಸರ್ಕಾರ ಜನರ ತಲೆ ಮೇಲೆ ಫ್ಲಾವರ್ ಪಾಟ್ ಇಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್ ಸರ್ಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು.ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ನೋಡಿ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತನೀತಿಗೆ ಧಿಕ್ಕಾರ ಎಂದು ಹೇಳಿದ್ದಾರೆ.
ಆಲ್ಕೊಹಾಲಿನ ಬೆಲೆ ಏರಿಸಿದ ನಂತರ @INCKarnataka ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ!!! 1/4
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023
ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ.
ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಕರ್ನಾಟದಲ್ಲಿ ನಂದಿನಿ ಹಾಲಿನ ದರವನ್ನ ಪ್ರತಿ ಲೀಟರ್‌ಗೆ 3 ರೂಪಾಯಿ ಏರಿಕೆ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಇನ್ನು ಈ ಹೊಸ ದರವು ಇದೇ ಆಗಸ್ಟ್ 1ರಿಂದ ಜಾರಿಗೆ ಬರಲಿದೆ. ಬೆಲೆ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಲು ಶುಕ್ರವಾರ ಮಹತ್ವದ ಸಭೆ ಕರೆಯಲಾಗಿತ್ತು. ಇದೇ ಸಭೆಯಲ್ಲಿ ಬೆಲೆ ಏರಿಕೆಗೆ ಅನುಮತಿ ನೀಡಲಾಗಿದೆ.
ಕೆಎಂಎಫ್ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಅಂತಿಮವಾಗಿ ಸಿಎಂ ಸಿದ್ದರಾಮಯ್ಯ ಅವರು 3 ರೂಪಾಯಿ ಬೆಲೆ ಹೆಚ್ಚಳಕ್ಕೆ ಅನುಮತಿ ನೀಡಿದ್ದಾರೆ. ಹಾಗೇ ಇದೀಗ ಹೆಚ್ಚಳವಾದ 3 ರೂಪಾಯಿ ಹಾಲು ಉತ್ಪಾದಕರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು.












Click it and Unblock the Notifications