ಇದೇ ನನ್ನ ಕೊನೆಯ ಚುನಾವಣೆ ಎಂದು ಎಷ್ಟು ಬಾರಿ ನುಡಿದಿರಿ, ಎಷ್ಟು ಬಾರಿ ತಪ್ಪಿದಿರಿ ? ಸಿದ್ದುಗೆ ಸುನೀಲ್ ಕುಮಾರ್ ಪ್ರಶ್ನೆ
ಬೆಂಗಳೂರು,ಜನವರಿ 16: ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ 200 ಯುನಿಟ್ ವಿದ್ಯುತ್ ಉಚಿತ ಎಂಬ ಘೋಷಣೆ ಬೆನ್ನೆಲ್ಲೆ ಬಿಜೆಪಿ ನಾಯಕರ ಟೀಕೆ ಟಿಪ್ಪಣಿಗಳು ಹೆಚ್ಚಾಗಿದ್ದು, ಇಂಧನ ಸಚಿವ ಸುನೀಲ್ ಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಟ್ವೀಟ್ ವಾರ್ ಮುಂದುವರೆದಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಚಿವ ಸುನೀಲ್ ಕುಮಾರ್, ಸಾಲ ಮಾಡಿಯಾದರೂ ತುಪ್ಪ ತಿನ್ನಬೇಕೆಂಬ ವಿತ್ಥನೀತಿಯನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನವರು ರಾಜ್ಯದ ಜನರ ಮೇಲೆ ಹೇರಿ ಹೋಗಿದ್ದಾರೆ. ಸಾಲ ರತ್ತುವಳಿಯನ್ನೇ ಬಂಡವಾಳ ಹೂಡಿಕೆ ಎಂದು ವ್ಯಾಖ್ಯಾನಿಸುವ ಅವರ ಭಂಡತನ ಅರ್ಥಶಾಸ್ತ್ರದ ಹೊಸ ವ್ಯಾಖ್ಯಾನವೇ ಸರಿ. ದಿವಾಳಿ ಹೊಂದುವುದನ್ನೇ ಪ್ರಧಾನ ಗುರಿಯಾಗಿಸಿಕೊಂಡ ಅರ್ಥ ವ್ಯವಸ್ಥೆಗೆ ನಿಮ್ಮ ಆದರ್ಶ ಎಂದು ಕಿಡಿಕಾದ್ದಾರೆ.
ಸಾಲ ಮಾಡಿಯಾದರೂ ತುಪ್ಪ ತಿನ್ನಬೇಕೆಂಬ “ವಿತ್ಥನೀತಿ”ಯನ್ನು @siddaramaiah ನವರು ರಾಜ್ಯದ ಮೇಲೆ ಹೇರಿ ಹೋಗಿದ್ದಾರೆ. ಸಾಲ ಎತ್ತುವಳಿಯನ್ನೇ ಬಂಡವಾಳ ಹೂಡಿಕೆ ಎಂದು ವ್ಯಾಖ್ಯಾನಿಸುವ ಅವರ ಭಂಡತನ ಅರ್ಥಶಾಸ್ತ್ರದ ಹೊಸ ವ್ಯಾಖ್ಯಾನವೇ ಸರಿ. ದಿವಾಳಿ ಹೊಂದುವುದನ್ನೇ ಪ್ರಧಾನ ಗುರಿಯಾಗಿಸಿಕೊಂಡ ಅರ್ಥವ್ಯವಸ್ಥೆಗೆ ನಿಮ್ಮ ನೀತಿ ಆದರ್ಶ (1/8)
— Sunil Kumar Karkala (@karkalasunil) January 15, 2023
ಕುತ್ತಿಗೆವರೆಗೆ ಮುಳುಗಿದ್ದ ಎಸ್ಕಾಂಗಳನ್ನು ಸಾಲದ ಹೊರೆಯಿಂದ ಮೇಲೆತ್ತಿದ್ದೇವೆ ಎಂದು ಬೆನ್ನು ಚಪ್ಪರಿಸಿಕೊಂಡಿದ್ದೀರಿ, ಸಂತೋಷ. ಸಮಕಾಲೀನ ರಾಜಕಾರಣದ "ಉತ್ತರಪುರುಷ" ಎಂದು ಬಿರುದಾಂಕಿತರಾದ ನಿಮ್ಮಿಂದ ಇಂಥ ಸುಳ್ಳು ಬಡಾಯಿಗಿಂತ ಹೆಚ್ಚಿನದನ್ನು ನಿರೀಕ್ಷಿಸಲು ಸಾಧ್ಯವೇ? ನೀವು ಎಸ್ಕಾಂಗಳ ಮೇಲೆ ಹೊರಿಸಿ ಹೋದ ಸಾಲದ ಗಂಟನ್ನು ಇಳಿಸಿದ್ದು ನಾವು.

ನೀವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೆಪಿಸಿಎಲ್ ಮೇಲಿನ 10,203 ಕೋಟಿ ರೂ. ಸಾಲವೂ ಸೇರಿದಂತೆ 2013 ರಿಂದ 2018 ರ ಅವಧಿಯಲ್ಲಿ 33,414.20 ಕೋಟಿ ಸಾಲದ ಗಂಟನ್ನು ಎಸ್ಕಾಂಗಳ ಮೇಲೆ ಹೊರಿಸಿದ್ದಿರಿ. ನೀವೇ ಸ್ಟೇರಿಂಗ್ ಹಿಡಿದು "ಸಮನ್ವಯ" ಸಾಧಿಸಿದ ಮೈತ್ರಿ ಸರ್ಕಾರದ ಕಾಲದಲ್ಲಿ 27,178 ಕೋಟಿ ರೂ. ಸಾಲದ ಹೊರೆ ಎಸ್ಕಾಂಗಳ ಮೇಲೆ ಬಿತ್ತು. ಆದರೆ ವಾಸ್ತವವನ್ನು ಮರೆ ಮಾಚುವುದಕ್ಕಾಗಿ ನೀವು ಸಾಲವನ್ನು ಬಂಡವಾಳ ಹೂಡಿಕೆ ಎಂದು ವ್ಯಾಖ್ಯಾನಿಸಿದ್ದೀರಿ. ಇಷ್ಟೊಂದು ಸಾಲ ಮಾಡಿದ ಮೇಲೆ ಹೊರೆ ಇಳಿಸಿದ್ದೇನೆ ಎಂದು ಬೆನ್ನು ತಟ್ಟಿಕೊಳ್ಳುವ ನಿಮ್ಮ ಜ್ಞಾನನಿಧಿಯ ಬಗ್ಗೆ ಸಾಮಾನ್ಯ ಪ್ರಜೆಯೂ ಸರ್ವಾಂಗಗಳಿಂದಲೂ ಕನಿಕರ ವ್ಯಕ್ತಪಡಿಸಬಹುದು ಎಂದು ಟ್ವೀಟ್ ಮಾಡಿದ್ದಾರೆ.
ಈ ಕಾರಣಕ್ಕಾಗಿಯೇ ನೀವು ಕತ್ತಲೆಯಲ್ಲಿ ಬಜೆಟ್ ಓದಿದ ಸಂಗತಿಯನ್ನು ನಾನು ನೆನಪು ಮಾಡಿಕೊಂಡಿದ್ದೇನೆ. ನುಡಿದಂತೆ ನಡೆಯುವವರು ನಾವು ಎಂದು ಅತಿಯಾಗಿ ಬೆನ್ನುತಟ್ಟಿಕೊಳ್ಳಬೇಡಿ. ನಿಮ್ಮ ನಡೆ-ನುಡಿಯೊಳಗಿನ ಕಾಪಟ್ಯ ಎಲ್ಲರಿಗೂ ಗೊತ್ತು. ಇದೇ ನನ್ನ ಕೊನೆಯ ಚುನಾವಣೆ ಎಂದು ಎಷ್ಟು ಬಾರಿ ನುಡಿದಿರಿ, ಎಷ್ಟು ಬಾರಿ ತಪ್ಪಿದಿರಿ ? ಎಂದು ಪ್ರಶ್ನಿಸಿದ್ದಾರೆ.

ರಾಜಕೀಯವಾಗಿ ಮರು ಜನ್ಮ ನೀಡಿದ ಬಾದಾಮಿಯನ್ನು ತ್ಯಜಿಸಿ ಕೋಲಾರಕ್ಕೆ ವಲಸೆ ಹೊರಟಿದ್ದೀರಿ. ಇದು ನುಡಿದಂತೆ ನಡೆಯುವ ಪರಿಯಾ ? ನಿಮ್ಮ ಮಾತು, ಕೃತಿ ಒಂದು ರೀತಿಯಲ್ಲಿ "ಹಸ್ತಿ ದಂತ" ಇದ್ದಂತೆ. ಆನೆಗೆ ಇರುವುದು ಎರಡೇ ದಂತ ಎಂದು ಭಾವಿಸುವುದು ಎಷ್ಟು ಮೂರ್ಖತನವೋ, ಸಿದ್ದರಾಮಯ್ಯ ನವರ ನುಡಿಯಂತೆ ನಡೆ ಎಂಬುದುದ ಅಷ್ಟೇ ಅಪಾಯಕಾರಿ ಎಂದು ಕಿಡಿಕಾರಿದ್ದಾರೆ.
ರೈತರ ಕೃಷಿ ಪಂಪ್ ಸೆಟ್‌ಗಳಿಗೆ ನೀಡಬೇಕಿದ್ದ ವಿದ್ಯುತ್ ಸಬ್ಸಿಡಿಯನ್ನೇ ಬಾಕಿ ಇಟ್ಟು ಹೋದ ಘನ ಸರ್ಕಾರ ತಮ್ಮದ್ದಾಗಿತ್ತು ಎಂಬುದನ್ನು ಮರೆಯದಿರಿ. ಎಲ್ಲ ಆಯಾಮಗಳನ್ನು ಪರಿಶೀಲಿಸಿದಾಗ ನೀವು ಕೊಟ್ಟ ಉಚಿತ ವಿದ್ಯುತ್ ಭರವಸೆ ಈಡೇರಿಸುವುದಕ್ಕೆ ವಾರ್ಷಿಕ 9000 ಕೋಟಿ ರೂ. ಬೇಕಾಗುತ್ತದೆ. ಅಂದರೆ ವಾರ್ಷಿಕವಾಗಿ ಮತ್ತೆ9000 ಕೋಟಿ ಸಾಲದ "ಹೂಡಿಕೆ" ಮಾಡುವ ಯೋಚನೆ ನಿಮ್ಮದಾಗಿದೆ. "ಭರವಸೆ ಉಚಿತ, ಸಾಲ ಖಚಿತ" ಎಂಬ ಅರ್ಥನೀತಿಯನ್ನು ಸ್ವಲ್ಪ ಬದಲಾಯಿಸಿಕೊಳ್ಳಿ ಎಂದು ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದಾರೆ.












Click it and Unblock the Notifications