ಡಿಸೆಂಬರ್ ಕೊನೆಯ ವಾರದಲ್ಲಿ ಶಾಲೆ ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರ!
ಬೆಂಗಳೂರು, ನ. 23: ರಾಜ್ಯದಲ್ಲಿ ಕಾಲೇಜುಗಳು ಆರಂಭವಾದ ಹಿನ್ನೆಲೆಯಲ್ಲಿ ಶಾಲೆಗಳನ್ನೂ ಆರಂಭಿಸುವ ಕುರಿತು ಚರ್ಚೆಗಳು ಶುರುವಾಗಿವೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆಯೂ ನಡೆಯಿತು. ಆದರೆ ಸಧ್ಯ ಶಾಲೆಗಳನ್ನು ಆರಂಭಿಸುವುದು ಬೇಡ ಎಂದು ಸಿಎಂ ನೇತೃತ್ವದಲ್ಲಿ ರಾಜ್ಯ ಆರೋಗ್ಯ ಇಲಾಖೆ ಅಭಿಪ್ರಾಯ ಪಟ್ಟಿತ್ತು. ಈ ವರ್ಷ ಒಂದರಿಂದ ಎಂಟನೇ ತರಗತಿಯ ವರೆಗೆ ಶಾಲೆಗಳು ಆರಂಭವಾಗುವ ಸಾಧ್ಯತೆಗಳು ತೀರಾ ಕಡಿಮೆ ಎನ್ನಲಾಗುತ್ತಿದೆ.
ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಡಿಸೆಂಬರ್ ತಿಂಗಳಿನಲ್ಲೂ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ಬಗ್ಗೆ ಆರೋಗ್ಯ ಇಲಾಖೆಯ ತಾಂತ್ರಿಕ ಸಮಿತಿ ಅಧ್ಯಕ್ಷ ಡಾ.ಎಂ.ಕೆ. ಸುದರ್ಶನ್ ಅವರು ಆರೋಗ್ಯ ಇಲಾಖೆಗೆ ವರದಿ ಕೊಟ್ಟಿದ್ದು, ಡಿಸೆಂಬರ್‌ನಲ್ಲಿ ಶಾಲೆ ತೆರೆಯುವುದು ಬೇಡ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕದಲ್ಲಿ ಶಾಲೆ ಪುನರಾರಂಭ ಸೂಕ್ತವಲ್ಲ ತಜ್ಞರ ಅಭಿಪ್ರಾಯ
ಆರೋಗ್ಯ ಇಲಾಖೆ ಸೂಚನೆ ಮೇರೆಗೆ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಆಸ್ಪತ್ರೆಗಳಲ್ಲೂ ಸೌಲಭ್ಯ ಹೆಚ್ಚಿಸಲಾಗಿದೆ. ಈಗ ಪ್ರತಿ ದಿನ ಸರಾಸರಿ 1,700 ರಷ್ಟು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ ಎಂಟು ತಿಂಗಳಲ್ಲಿ ಕೈಗೊಂಡ ನಾನಾ ಕ್ರಮಗಳ ಪರಿಣಾಮವಾಗಿ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಆದರೆ ದೆಹಲಿ, ಹರ್ಯಾಣ, ಗುಜರಾತ್ ಮೊದಲಾದ ರಾಜ್ಯಗಳಲ್ಲಿ ಸೋಂಕು ಹರಡುವಿಕೆ ವೇಗ ಪಡೆದಿದೆ ಎಂದು ಸಭೆಯಲ್ಲಿ ಚರ್ಚೆಯಾಗಿದೆ.
ಚಳಿಗಾಲವೂ ಇರುವುದರಿಂದ ಕೋವಿಡ್ ಸೋಂಕು ಹರಡುವಿಕೆ ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಗಳು ತೀವ್ರವಾಗಿ ಬಾಧಿಸುತ್ತದೆ. ಸೆಪ್ಟೆಂಬರ್ ನಲ್ಲಿ ನಡೆದ ಸರ್ವೆ ಪ್ರಕಾರ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ, ಡಿಸೆಂಬರ್ ನಲ್ಲಿ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿಬಂದಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಅಭಿಪ್ರಾಯವನ್ನೇ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.
ಕರ್ನಾಟಕದಲ್ಲಿ ಶಾಲೆ ಆರಂಭಿಸುವ ಕುರಿತು ಸರ್ಕಾರದ ಸ್ಪಷ್ಟನೆ!
ಡಿಸೆಂಬರ್ ಕೊನೆಯ ವಾರದಲ್ಲಿ ಕೋವಿಡ್ ಪರಿಸ್ಥಿತಿ ನೋಡಿಕೊಂಡು ಶಾಲೆಗಳನ್ನು ತೆರೆಯಲು ಮತ್ತೆ ನಿರ್ಧಾರ ಕೈಗೊಳ್ಳಬಹುದು ಎಂದು ಸಭೆಯಲ್ಲಿ ಅಭಿಪ್ರಾಯಪಡಲಾಗಿದೆ. ಇದೇ ಅಭಿಪ್ರಾಯವನ್ನು ಆರೋಗ್ಯ ಇಲಾಖೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಮಂಡಿಸಲಿದೆ.