ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿವೆ, ಆದರೆ 2ನೇ ಅಲೆ ಎನ್ನಲಾಗದು: ರವಿಕುಮಾರ್
ಬೆಂಗಳೂರು, ಮಾರ್ಚ್ 31: ರಾಜ್ಯದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿವೆ ಆದರೆ ಇದನ್ನು ಕೊರೊನಾದ ಎರಡನೇ ಅಲೆ ಎಂದು ಬಿಂಬಿಸಲು ಸಾಧ್ಯವಿಲ್ಲ ಎಂದು ರಾಜ್ಯಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಹೇಳಿದ್ದಾರೆ.
ಕೋವಿಡ್-19 ಲಕ್ಷಣಗಳಿರುವವರು ಸ್ವಯಂ ವೈದ್ಯರಾಗಿ ಔಷಧಗಳನ್ನು ತೆಗೆದುಕೊಳ್ಳಬಾರದೆಂದು ರವಿಕುಮಾರ್ ಜನತೆಯಲ್ಲಿ ಮನವಿ ಮಾಡಿದ್ದು, ಆರ್ ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳುವಂತೆ, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಪರಿಸ್ಥಿತಿ ನೀವಂದುಕೊಂಡಷ್ಟು ಗಂಭೀರವಾಗಿಲ್ಲ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸಿದ್ಧವಿದೆ. ಆರ್ ಟಿ-ಪಿಸಿಆರ್ ಪರೀಕ್ಷೆಗಳನ್ನು ನಡೆಸುವುದಕ್ಕೆ ಸರ್ಕಾರ ಸಿದ್ಧವಿದೆ. ಅಗತ್ಯ ಮೂಲಸೌಕರ್ಯಗಳ ವ್ಯವಸ್ಥೆ ಇದ್ದು, ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕೆ ವೈದ್ಯರು ಸಿದ್ಧರಿದ್ದಾರೆ ಎಂದು ರವಿಕುಮಾರ್ ಹೇಳಿದ್ದಾರೆ.

ಹಾಗೆಯೇ ರಾಜ್ಯದಲ್ಲಿ ಉಪ ಚುನಾವಣೆಗಳು ಹತ್ತಿರವಾಗುತ್ತಿದ್ದು, ಚುನಾವಣಾ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ ಎಂದಿದ್ದಾರೆ.
ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರಗಳಲ್ಲಿ, ಬೆಳಗಾಗಿ ಲೋಕಸಭಾ ಕ್ಷೇತ್ರಗಳಲ್ಲಿ ಏ.17 ರಂದು ಉಪಚುನಾವಣೆ ನಡೆಯುತ್ತಿದ್ದು, 15 ದಿನಗಳ ಕಾಲ ಸಭೆಗಳನ್ನು ನಡೆಸುವುದಕ್ಕೆ ವಿಧಿಸಲಾಗಿರುವ ನಿರ್ಬಂಧ ಈ ಪ್ರದೇಶಗಳಲ್ಲಿ ಅನ್ವಯಿಸುವುದಿಲ್ಲ ಎಂದು ರವಿಕುಮಾರ್ ಹೇಳಿದ್ದಾರೆ.
ಉಪಚುನಾವಣೆ ನಡೆಯುತ್ತಿರುವ ಪ್ರದೇಶಗಳಲ್ಲಿ ರಾಜಕೀಯ ಪಕ್ಷಗಳಿಗೆ ಒಳಾಂಗಣ ಮತ್ತು ಹೊರಾಂಗಣ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ಅವಕಾಶವಿದೆ ಎಂದು ಹೇಳಿದ್ದಾರೆ.












Click it and Unblock the Notifications