ಲಸಿಕೆ ಉಚಿತವಾಗಿ ಕೊಡಿಸುವ 'ಧಮ್' ಇದೆಯೇ? ನಳಿನ್; ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 23 : "ಜನರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ 'ಧಮ್' ನಿಮಗಿದೆಯೇ ಶ್ರೀ ನಳಿನ್ ಕುಮಾರ್ ಕಟೀಲ್ ಅವರೇ?" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಡುವಿನ ವಾಕ್ಸಮರ ಮುಂದುವರೆದಿದೆ. ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ರಾಜ್ಯಾಧ್ಯಕ್ಷರಿಗೆ ಹಲವು ಪ್ರಶ್ನೆ ಕೇಳಿದ್ದಾರೆ. 'ಧಮ್' (ಇದು ನಿಮ್ಮದೇ ಭಾಷೆ) ಎಂದು ಛೇಡಿಸಿದ್ದಾರೆ.
"ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವಿರಾ ನಳಿನ್ ಕುಮಾರ್ ಕಟೀಲ್ ಅವರೇ?" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

"ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರ ಮನವೊಲಿಸಿ, ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಕೊರೊನಾದಿಂದ ಭೀತಿಗೊಳಗಾಗಿರುವ ಜನರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ 'ಧಮ್' (ಇದು ನಿಮ್ಮದೇ ಭಾಷೆ) ನಿಮಗಿದೆಯೇ ಶ್ರೀ ನಳಿನ್ ಕುಮಾರ್ ಕಟೀಲ್ ಅವರೇ?" ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
243 ಸದಸ್ಯ ಬಲದ ಬಿಹಾರ ವಿಧಾನಸಭೆ ಚುನಾವಣೆಗೆ ಅಕ್ಟೋಬರ್ 28, ನವೆಂಬರ್ 3, ನವೆಂಬರ್ 7ರಂದು ಚುನಾವಣೆ ನಡೆಯಲಿದೆ. ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದ ಜನರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡುವುದಾಗಿ ಭರವಸೆ ನೀಡಿದೆ.
ಸಿದ್ದರಾಮಯ್ಯ ಗುರುವಾರ ಟ್ವೀಟ್ ಮಾಡಿದ್ದು ನಳಿನ್ ಕುಮಾರ್ ಕಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದರು. "ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆಗೆ ಕಟ್ಟಿ, ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ನಳಿನ್ ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ" ಎಂದು ಹೇಳಿದ್ದರು.
"ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಎಂಬ ಪೋಕರಿಯನ್ನು ಯಾರೋ ತಮ್ಮ 'ಸಂತೋಷ'ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ" ಎಂದು ಟೀಕಿಸಿದ್ದರು.












Click it and Unblock the Notifications