ಕ್ರಿಮಿನಲ್ ಮಾನನಷ್ಟ ಮೊಕದ್ದಮ್ಮೆ: ಡಿ. ರೂಪಾಗೆ ಜಾಮೀನು
ಬೆಂಗಳೂರು, ಜೂನ್ 07: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಸಮನ್ಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮಂಗಳವಾರ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರಾದರು. ನ್ಯಾಯಾಲಯ ಅವರಿಗೆ ಷರತ್ತಿನ ಜಾಮೀನು ಮಂಜೂರು ಮಾಡಿದೆ.
ಪ್ರಕರಣ ಸಂಬಂಧ ನಗರದ 24ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಿಚಾರಣೆಗೆ ಡಿ. ರೂಪಾ ಮೌದ್ಗಿಲ್ ಹಾಜರಾಗಿದ್ದರು. ಕೋರ್ಟ್ ಅವರ ಹಾಜರಾತಿಯನ್ನು ದಾಖಲಿಸಿಕೊಂಡು, 25 ಸಾವಿರ ಮೊತ್ತದ ವೈಯಕ್ತಿಕ ಬಾಂಡ್ ಒದಗಿಸುವಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತು.

ಏನಿದು ಪ್ರಕರಣ?; ಡಿ. ರೂಪಾ ಮೌದ್ಗಿಲ್ 2023ರ ಫೆ.18 ಮತ್ತು 19ರಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ತಮ್ಮ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ.
ತಮ್ಮ ತೇಜೋವಧೆ ಮಾಡುವ ದುರುದ್ದೇಶದಿಂದಲೇ ರೂಪ ಅವರು ಈ ಕೃತ್ಯ ಎಸಗಿರುವುದರಿಂದ ತಮ್ಮ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ಆರೋಪಿಸಿ ರೋಹಿಣಿ ಸಿಂಧೂರಿ ಮಾ.3ರಂದು ಅಧೀನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಅಲ್ಲದೇ, ಮಾನಹಾನಿ ಮಾಡಿ ಮಾನಸಿಕ ಯಾತನೆ ಉಂಟು ಮಾಡಿರುವುದಕ್ಕಾಗಿ ಡಿ. ರೂಪಾ ಅವರಿಂದ 1 ಕೋಟಿ ರೂಪಾಯಿಯನ್ನು ಪರಿಹಾರವಾಗಿ ಕೊಡಿಸಿಕೊಡಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದರು.

ಅರ್ಜಿ ಪರಿಗಣಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರೂಪಾ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲು ಆದೇಶಿಸಿತ್ತು. ಅಲ್ಲದೆ, 2023ರ ಮಾ.24ರಂದು ರೂಪಾ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಇದರಿಂದ ಅವರು ಮಂಗಳವಾರ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರಾಗಿದ್ದರು.
ಹೈಕೋರ್ಟ್ ಮೊರೆ: ಈ ಮಧ್ಯೆ, ರೋಹಿಣಿ ಸಿಂಧೂರಿ ತಮ್ಮ ವಿರುದ್ಧ ಹೂಡಿರುವ ಕ್ರಿಮಿನಲ್ ಮಾನನಷ್ಟ ಖಾಸಗಿ ದೂರನ್ನು ರದ್ದುಪಡಿಸುವಂತೆ ಕೋರಿ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಆದರೆ ರೂಪಾ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಹಿಂದೆ ಸರಿದಿದ್ದಾರೆ.
ಡಿ. ರೂಪಾ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆಯು ಸೋಮವಾರ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠದ ಮುಂದೆ ಬಂದಿತ್ತು. ವಿಚಾರಣೆ ವೇಳೆ ಪ್ರಕರಣದ ಬಗ್ಗೆ ಮಾಹಿತಿ ಪಡೆದ ನ್ಯಾಯಮೂರ್ತಿಗಳು, ಈ ಹಿಂದೆ ತಾವು ವಕೀಲರಾಗಿದ್ದ ಸಂದರ್ಭದಲ್ಲಿ ಬೇರೊಂದು ಪ್ರಕರಣ ಸಂಬಂಧ ರೋಹಿಣಿ ಸಿಂಧೂರಿ ಅವರನ್ನು ಪ್ರತಿನಿಧಿಸಿದ್ದೆವು. ಹಾಗಾಗಿ, ತಾವು ಈ ಅರ್ಜಿ ವಿಚಾರಣೆ ನಡೆಸುವುದಿಲ್ಲ ಎಂದರು.
ಅಲ್ಲದೆ, ರೂಪಾ ಅರ್ಜಿಯನ್ನು ಬೇರೊಂದು ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸಲು ಸೂಕ್ತ ಆದೇಶ ಪ್ರಕಟಿಸುವುದಕ್ಕಾಗಿ ಪ್ರಕರಣದ ಕಡತವನ್ನು ಸಿಜೆ ಮುಂದೆ ಮುಂಡಿಸಬೇಕು ಎಂದು ರಿಜಿಸ್ಟ್ರಾರ್‌ಗೆ ನಿರ್ದೇಶಿಸಿದರು.












Click it and Unblock the Notifications